- ತ್ಯಾವಣಗಿಯಲ್ಲಿ ಡಾ.ಅಂಬೇಡ್ಕರ್ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಭೂಮಿಪೂಜೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ಮಾಯಕೊಂಡ ಕ್ಷೇತ್ರದಲ್ಲಿ ಹೆಚ್ಚು ಹೆಚ್ಚು ವಸತಿ ಶಾಲೆಗಳನ್ನು ತೆರೆಯಲು ಆದ್ಯತೆ ನೀಡಲಾಗುವುದು. ಆ ಮೂಲಕ ಸಮಾಜದಲ್ಲಿ ತುಳಿತಕ್ಕೊಳಗಾದ ಮಕ್ಕಳಿಗೆ ಶಿಕ್ಷಣ ಸೌಲಭ್ಯ ಕೊಡಿಸಬೇಕೆಂಬುದು ನಮ್ಮ ಗುರಿಯಾಗಿದೆ ಎಂದು ಮಾಯಕೊಂಡ ಕ್ಷೇತ್ರ ಶಾಸಕ ಕೆ.ಎಸ್. ಬಸವಂತಪ್ಪ ಹೇಳಿದರು.ಕ್ಷೇತ್ರದ ವ್ಯಾಪ್ತಿಯ ಚನ್ನಗಿರಿ ತಾಲೂಕಿನ ತ್ಯಾವಣಗಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ಉಪವಿಭಾಗ ಚನ್ನಗಿರಿ, ಸಮಾಜ ಕಲ್ಯಾಣ ಇಲಾಖೆ ದಾವಣಗೆರೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಆಶ್ರಯದಲ್ಲಿ ₹18 ಕೋಟಿ ವೆಚ್ಚದ ಡಾ.ಅಂಬೇಡ್ಕರ್ ವಸತಿ ಶಾಲಾ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.
ಮಾಯಕೊಂಡ ಕ್ಷೇತ್ರ ವ್ಯಾಪ್ತಿಯ ಕಾರಿಗನೂರು, ತ್ಯಾವಣಗಿ, ಬಸವಾಪಟ್ಟಣ, ಆನಗೋಡು ಸೇರಿದಂತೆ 5 ವಸತಿ ಶಾಲೆಗಳನ್ನು ನಿರ್ಮಿಸಲಾಗಿದೆ. ಇನ್ನೂ ಎರಡ್ಮೂರು ವಸತಿ ಶಾಲೆಗಳನ್ನು ನಿರ್ಮಿಸಬೇಕಾಗಿದೆ. ಈ ವರ್ಷ ಬಜೆಟ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 20 ವಸತಿ ಶಾಲೆಗಳನ್ನು ಮಂಜೂರು ಮಾಡಿದ್ದಾರೆ. ಕಾರ್ಮಿಕ ಇಲಾಖೆ 10, ಅಲ್ಪಸಂಖ್ಯಾತ ಇಲಾಖೆ ಹಿಂದುಳಿದ ವರ್ಗಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಿಂದ ವಸತಿ ಶಾಲೆಗಳನ್ನು ನಿರ್ಮಿಸಲಾಗುವುದು ಎಂದು ಮಾಹಿತಿ ನೀಡಿದರು.
- - -
-16ಕೆಡಿವಿಜಿ40:ಮಾಯಕೊಂಡ ಕ್ಷೇತ್ರದ ವ್ಯಾಪ್ತಿ ತ್ಯಾವಣಗಿ ಗ್ರಾಮದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕೆ ಶಾಸಕ ಕೆ.ಎಸ್. ಬಸವಂತಪ್ಪ ಭೂಮಿಪೂಜೆ ನೆರವೇರಿಸಿದರು.