ದೆಹಲಿಯಲ್ಲಿ ಕೇಂದ್ರ ಸಚಿವರ ನೇತೃತ್ವದಲ್ಲಿ ನಡೆದ ಕಬ್ಬು ಬೆಳೆಗಾರರ ಸಭೆ ವಿಫಲವಾದ ಹಿನ್ನೆಲೆ ಮಂಗಳವಾರ ಕರೆ ನೀಡಿದ್ದ ಹೆದ್ದಾರಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆಯೇ ರೈತರು ಎತ್ತಿನ ಬಂಡಿ, ಟ್ರ್ಯಾಕ್ಟರ್‌ನೊಂದಿಗೆ ಆಗಮಿಸಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದ ಪ್ರತಿಭಟಿಸಿದರು.
ಹುಬ್ಬಳ್ಳಿ:
ದೆಹಲಿಯಲ್ಲಿ ಕೇಂದ್ರ ಸಚಿವರ ನೇತೃತ್ವದಲ್ಲಿ ನಡೆದ ಕಬ್ಬು ಬೆಳೆಗಾರರ ಸಭೆ ವಿಫಲವಾದ ಹಿನ್ನೆಲೆ ಮಂಗಳವಾರ ಕರೆ ನೀಡಿದ್ದ ಹೆದ್ದಾರಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಬೆಳಗ್ಗೆಯೇ ರೈತರು ಎತ್ತಿನ ಬಂಡಿ, ಟ್ರ್ಯಾಕ್ಟರ್‌ನೊಂದಿಗೆ ಆಗಮಿಸಿ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ತಡೆದ ಪ್ರತಿಭಟಿಸಿದರು. ಸಂಜೆ 6 ಗಂಟೆಗೆ ಪೊಲೀಸರ ಮಧ್ಯಸ್ಥಿಕೆಯಲ್ಲಿ ನಡೆದ ಸಭೆಯಲ್ಲಿ ಪ್ರತಿಭಟನೆ ಹಿಂಪಡೆಯುವುದಾಗಿ ಮುಖಂಡರು ಘೋಷಿಸಿದರು. ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ಯಥಾಸ್ಥಿತಿ ಸಾಗಿತು.
ರೈತ ಸಂಘಟನೆಗಳ ಪ್ರತಿಭಟನೆಗೆ ವಿವಿಧ ಕನ್ನಡಪರ ಸಂಘಟನೆ, ಉತ್ತರ ಕರ್ನಾಟಕ ಆಟೋ ಚಾಲಕರ ಮತ್ತು ಮಾಲೀಕರ ಸಂಘ ಹಾಗೂ ಆಮ್ ಆದ್ಮಿ ಪಕ್ಷ ಬೆಂಬಲ ಸೂಚಿಸಿದವು. ಬೆಳಗ್ಗೆ 11ರ ಸುಮಾರಿಗೆ ನಗರದ ಗಬ್ಬೂರು ವೃತ್ತದ ಬಳಿ ರಸ್ತೆ ತಡೆ ನಡೆಸಿದ ರೈತರು, ಬಳಿಕ ಅದರಗುಂಚಿ-ನೂಲ್ವಿ ಮಧ್ಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜಮಾಯಿಸಿದರು. ಕಲ್ಲು, ಲಾರಿ, ಟ್ರ್ಯಾಕ್ಟರ್, ಎತ್ತಿನಗಾಡಿ ಹಾಗೂ ಬೈಕ್‌ಗಳನ್ನು ರಸ್ತೆಗೆ ಅಡ್ಡ ಹಾಕಿ ಕೇಂದ್ರ ಸರ್ಕಾರ ಮತ್ತು ಸಚಿವರ ವಿರುದ್ಧ ಘೋಷಣೆ ಕೂಗಿದರು. ಹೆದ್ದಾರಿ ಬಂದ್‌ನಿಂದ ವಾಹನ ಸವಾರರು ಬಿಸಿಲಿನಲ್ಲಿ ಗಂಟೆಗಟ್ಟಲೆ ಸಿಲುಕಿ ಪರದಾಡಿದರು. ಬಳಿಕ ಪೊಲೀಸರು ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿ, ಕುಂದಗೋಳ ಕ್ರಾಸ್ ಮೂಲಕ ವಾಹನ ಸಾಗಲು ವ್ಯವಸ್ಥೆ ಮಾಡಿದರು. ಬಂಕಾಪುರ ಟೋಲ್, ಶಿಗ್ಗಾಂವಿ ಹಾಗೂ ತಡಸ ವೃತ್ತದ ಬಳಿಯೂ ವಾಹನ ತಡೆದು ಪರ‍್ಯಾಯ ಮಾರ್ಗಕ್ಕೆ ಕಳುಹಿಸಿದ್ದರಿಂದ ಹೆದ್ದಾರಿಯಲ್ಲಿ ಹೆಚ್ಚಿನ ವಾಹನ ದಟ್ಟಣೆ ಕಂಡುಬರಲಿಲ್ಲ.
ಈ ವೇಳೆ ಮಾತನಾಡಿದ ರೈತ ಮುಖಂಡರು, ಕಬ್ಬಿಗೆ ನ್ಯಾಯಸಮ್ಮತ ಮತ್ತು ಲಾಭದಾಯಕ ಬೆಲೆ ನಿಗದಿಪಡಿಸಬೇಕು. ಸಕ್ಕರೆಗೆ ಕನಿಷ್ಠ ಬೆಲೆ ಹೆಚ್ಚಿಸುವ ಜತೆಗೆ ಸ್ವಾಮಿನಾಥನ್ ಆಯೋಗದ ಶಿಫಾರಸು ಜಾರಿಗೊಳಿಸಬೇಕು. ಮಹದಾಯಿ ಹಾಗೂ ಕಳಸಾ-ಬಂಡೂರಿ ಯೋಜನೆಗಳ ಅನುಷ್ಠಾನಕ್ಕೂ ಕ್ರಮಕೈಗೊಳ್ಳಬೇಕು. ಬೇಡಿಕೆಗಳು ಈಡೇರುವವರೆಗೆ ಹೋರಾಟ ನಿಲ್ಲಿಸುವುದಿಲ್ಲ ಎಂದು ಎಚ್ಚರಿಸಿದರು.
ಸವಾರರೊಂದಿಗೆ ವಾಗ್ವಾದ:
ರಸ್ತೆಗೆ ಅಡ್ಡಲಾಗಿ ವಾಹನ ನಿಲ್ಲಿಸಿದ್ದರಿಂದ ಸಂಚಾರಕ್ಕೆ ಅಡ್ಡಿಯಾಯಿತು. ಮುಂದೆ ಸಾಗಲು ಯತ್ನಿಸಿದ ಕೆಲ ವಾಹನ ಸವಾರರನ್ನು ರೈತರು ತರಾಟೆಗೆ ತೆಗೆದುಕೊಂಡರು. ರೈತರು ಸಂಕಷ್ಟದಲ್ಲಿರುವಾಗ ಸಾರ್ವಜನಿಕರು ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು. ಇದರಿಂದ ವಾಹನ ಸವಾರರು ಮುಂದಕ್ಕೂ ಹೋಗಲಾಗದೆ, ಹಿಂದಕ್ಕೂ ಮರಳಲಾಗದೆ ಕೆಲಕಾಲ ಪರದಾಡಿದರು.
ಬಿಗಿ ಪೊಲೀಸ್ ಬಂದೋಬಸ್ತ್
ಹೆದ್ದಾರಿ ತಡೆ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ, ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಭೂಷಣ್ ಬೊರಸೆ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯರಿಕೊಪ್ಪದಲ್ಲಿ 200ಕ್ಕೂ ಹೆಚ್ಚು ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಗಬ್ಬೂರು ಹಾಗೂ ನರೇಂದ್ರ ಕ್ರಾಸ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಬೆಳಗ್ಗೆ 8ರಿಂದಲೇ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಿ ಬ್ಯಾರಿಕೇಡ್ ಅಳವಡಿಸಲಾಗಿದ್ದು, ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿಡಲು ಪೊಲೀಸ್ ಬಂದೋಬಸ್ತ್ ಮುಂದುವರಿಸಲಾಗುವುದು ಎಂದರು.
ಜೋಶಿ ಕಚೇರಿ, ನಿವಾಸದ ಸುತ್ತ ಬ್ಯಾರಿಕೇಡ್
ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಚಿಟಗುಪ್ಪಿ ಆಸ್ಪತ್ರೆ ಬಳಿಯ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಕಚೇರಿ ಮುಂಭಾಗ ಹಾಗೂ ಅವರ ನಿವಾಸದ ಸುತ್ತಮುತ್ತಲಿನ ಪ್ರದೇಶದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಮುಂಜಾಗ್ರತಾ ಕ್ರಮವಾಗಿ ಬ್ಯಾರಿಕೇಡ್ ಅಳವಡಿಸಿ, ರಸ್ತೆಯಲ್ಲಿ ಸಂಚಾರವನ್ನು ಸಂಪೂರ್ಣ ಬಂದ್ ಮಾಡಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಸಿಬ್ಬಂದಿ ನಿಯೋಜಿಸಿ, ಪರಿಸ್ಥಿತಿಯ ಮೇಲೆ ನಿಗಾ ಇರಿಸಿರುವುದು ಕಂಡುಬಂದಿತು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.