ಕನ್ನಡಪ್ರಭ ವಾರ್ತೆ ರಾಯಚೂರು
ಈ ವೇಳೆ ಮಾತನಾಡಿದ ಎನ್.ಎಸ್.ಭೋಸರಾಜು, ಇಂತಹ ಪ್ರಕರಣಗಳು ಸಮಾಜವೇ ತಲೆತಗ್ಗಿಸುವಂತಾಗಿದ್ದು, ಇವುಗಳನ್ನು ತಡೆಗಟ್ಟಲು ಎಲ್ಲರೂ ಒಗ್ಗಟ್ಟಾಗಿ ಜಾಗೃತಿ ಮೂಡಿಸುವ ಮೂಲಕ ಪ್ರಯತ್ನಿಸಬೇಕು. ಗ್ರಾಮೀಣ ಭಾಗಗಳಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಕಂಡುಬಂದ ತಕ್ಷಣ ಪೊಲೀಸರು ಅವುಗಳನ್ನು ಗಂಭೀರವಾಗಿ ಪರಿಗಣಿಸಿ, ಗ್ರಾಮಗಳಿಗೆ ಭೇಟಿ ನೀಡಿ ಜನರೊಂದಿಗೆ ಸಂಪರ್ಕದಲ್ಲಿರಬೇಕು. ಸಮಸ್ಯೆಗಳು ದೊಡ್ಡದಾಗುವ ಮುನ್ನವೇ ಅವುಗಳನ್ನು ಪರಿಹರಿಸುವ ಪ್ರಯತ್ನ ಮಾಡಬೇಕು ಎಂದು ಪೊಲೀಸ್ ಇಲಾಖೆಗೆ ಸೂಚಿಸಿದರು.
ಈ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ನಿರ್ಲಕ್ಷ್ಯ ತೋರಿದ ಆರೋಪದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸರನ್ನು ಈಗಾಗಲೇ ಅಮಾನತುಗೊಳಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಆರೋಪಿಗಳನ್ನು ಬಂಧಿಸಲಾಗಿದ್ದು, ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನುಬದ್ಧವಾಗಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸೂಚಿಸಿದರು.ಸಂತ್ರಸ್ತ ಕುಟುಂಬಕ್ಕೆ ನ್ಯಾಯ ದೊರಕುವಂತೆ ತನಿಖೆಯನ್ನು ನಿಷ್ಪಕ್ಷಪಾತವಾಗಿ ನಡೆಸಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಭೋಸರಾಜು ಒತ್ತಾಯಿಸಿದರು. ವಿವಿಧ ಇಲಾಖೆಗಳ ಅಧಿಕಾರಿಗಳು,ಮುಖಂಡರು,ಗ್ರಾಮಸ್ಥರು ಸೇರಿ ಅನೇಕರು ಉಪಸ್ಥಿತರಿದ್ದರು.
ಸ್ಥಳೀಯ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಸಂಘಟನೆಗಳ ಪದಾಧಿಕಾರಿಗಳು, ಸದಸ್ಯರು, ವಿದ್ಯಾರ್ಥಿಗಳು ಘೋಷಣೆಗಳನ್ನು ಕೂಗಿದರು. ನಂತರ ಗ್ರೆಡ್ -2 ತಹಶಿಲ್ದಾರ್ ಪರಶುರಾಮ ಮುಖಾಂತರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಹಿಳೆಯರ ಮೇಲಿನ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಅಕ್ರಮ ಮದ್ಯ ಮಾರಾಟ ಹಾಗೂ ಅಶ್ಲೀಲತೆ ಚಿತ್ರಗಳ ಪ್ರಚಾರಕ್ಕೆ ಕಡಿವಾಣ ಹಾಕಬೇಕು. ಅಂತಹ ವೀಡಿಯೋ ಹರಿಯಲು ಬಿಟ್ಟು ಮಹಿಳೆಯರ ಮೇಲೆ ದೌರ್ಜನ್ಯ, ಅತ್ಯಾಚಾರ ಮಾಡಲಾಗುತ್ತಿದೆ. ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಕರ್ತವ್ಯ ಲೋಪ: ನಾಲ್ವರು ಪೇದೆಗಳ ಸಸ್ಪೆಂಡ್: ಜಿಲ್ಲೆ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದಲ್ಲಿ ಯುವತಿಯ ಮೇಲೆ ನಡೆದಿದೆ ಎನ್ನಲಾದ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮುಖ್ಯ ಪೇದೆ ಸೇರಿ ನಾಲ್ವರು ಪೊಲೀಸ್ ಪೇದೆಗಳನ್ನು ಅಮಾನತುಗೊಳಿಸಲಾಗಿದೆ. ಸಿರವಾರ ಠಾಣೆಯ ಮುಖ್ಯ ಪೇದೆಗಳಾದ ಭೀಮರಡ್ಡಿ, ವೀರೇಶ, ಪೇದೆಗಳಾದ ದೇವರಾಜ, ನಾಗರಾಜ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಲು ಗಿರಿ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಕಳೆದ ಬುಧವಾರ ಯುವತಿ ಬಹಿರ್ದೆಸೆಗೆ ಹೋಗಿದವಳು ಮರುದಿನ ಊರಿನ ಬಾವಿಯಲ್ಲಿ ಅರೆನಗ್ನ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಬುಧವಾರ ರಾತ್ರಿಯೇ ಯುವತಿ ಪೋಷಕರು ಸಿರವಾರ ಪೊಲೀಸ್ ಠಾಣೆಗೆ ದೂರು ನೀಡಿದ್ದರೂ ಸಹ ಠಾಣೆಯಲ್ಲಿದ್ದ ಪೊಲೀಸರು ಬೇಜವಾಬ್ದಾರಿ ತೋರಿ ನಿರ್ಲಕ್ಷ್ಯದಿಂದ ಸ್ಪಂದನೆ ಮಾಡಿದ್ದಾರೆ ಎಂದು ಹಲವಾರು ದಲಿತಪರ ಸಂಘಟನೆಗಳ ಮುಖಂಡರು ಗ್ರಾಮಕ್ಕೆ ಬಂದಿದ್ದ ಬಳ್ಳಾರಿ ಐಜಿಪಿ, ರಾಯಚೂರು ಜಿಲ್ಲಾಧಿಕಾರಿ, ಪೋಲಿಸ್ ವರಿಷ್ಠಾಧಿಕಾರಿಗಳ ಮುಂದೆ ಪ್ರತಿಭಟನೆ ಮಾಡಿ ದೂರು ಸಲ್ಲಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾ ಪೊಲೀಸ್ ಇಲಾಖೆ ಕರ್ತವ್ಯ ಲೋಪದ ಆರೋಪದ ಮೇಲೆ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಸಸ್ಪೆಂಡ್ ಮಾಡಿದೆ.