ಹಾವೇರಿ: ಅಸಾಂಕ್ರಾಮಿಕ ರೋಗಗಳನ್ನು ಆರಂಭಿಕ ಹಂತದಲ್ಲಿ ಪತ್ತೆ ಮಾಡುವುದು ಹಾಗೂ ಜಾಗೃತಿ ಮೂಡಿಸುವುದು, ಸಕಾಲದಲ್ಲಿ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಗಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ವಿಕೇಂದ್ರೀಕೃತ ಆರೋಗ್ಯ ಸೇವೆಗಳ ಮೂಲಕ ನಿರಂತರ ಆರೈಕೆಯನ್ನು ಖಚಿತಪಡಿಸುವ ಉದ್ದೇಶದೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯಾದ್ಯಂತ ಗೃಹ ಆರೋಗ್ಯ ಯೋಜನೆ ವಿಸ್ತರಣೆ ಮಾಡಿದ್ದು, ಬುಧವಾರ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಜಿಲ್ಲೆಯಲ್ಲಿ ಯೋಜನೆಗೆ ಚಾಲನೆ ನೀಡಿದರು. ರಾಜ್ಯಾದ್ಯಂತ ಅಸಾಂಕ್ರಾಮಿಕ ರೋಗಗಳ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆಯನ್ನು ಬಲಪಡಿಸುವ ಗುರಿ ಹೊಂದಿರುವ ಯೋಜನೆ ಇದಾಗಿದ್ದು, ಮುಖ್ಯಮಂತ್ರಿಗಳು 2024ರ ಅ. 24ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಚಾಲನೆ ನೀಡಿದ್ದರು. ಗೃಹ ಆರೋಗ್ಯ ಕಾರ್ಯಕ್ರಮವು ಕೋಲಾರ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದ್ದು, ಪ್ರಮುಖ ಆರೋಗ್ಯ ತಂಡಗಳು ಅಸಾಂಕ್ರಾಮಿಕ ರೋಗಗಳಿಗಾಗಿ ಮನೆ- ಮನೆಗೆ ತೆರಳಿ ಆರೋಗ್ಯ ತಪಾಸಣೆ ಮತ್ತು ನಿರ್ವಹಣೆ ನಡೆಸಲಾಗಿದೆ. ಅದರ ಯಶಸ್ಸಿನ ನಂತರ, ಅಗತ್ಯ ಆರೋಗ್ಯ ಸೇವೆಗಳಿಗೆ ಸಮಾನ ಪ್ರವೇಶವನ್ನು ಖಚಿತವಡಿಸಿಕೊಳ್ಳಲು ಈ ಯೋಜನೆಯನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುತ್ತಿದೆ.ರೋಗ ನಿರ್ಣಯವಾದ ನಂತರ, ವ್ಯಕ್ತಿಗಳು ಅವರ ಹತ್ತಿರದ ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ ತೆರಳಿ ಆರೋಗ್ಯ ತವಾಸಣೆ, ನಿರ್ವಹಣೆ ಮತ್ತು ಉಚಿತವಾಗಿ ಅಸಾಂಕ್ರಾಮಿಕ ರೋಗಗಳ ಶಿಷ್ಟಾಚಾರದ ಔಷಧಿಗಳನ್ನು ಒದಗಿಸಲಾಗಲಾಗುತ್ತದೆ. ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಮತ್ತು ಜಾಗೃತಿ ಮೂಡಿಸಿ, ಆರೋಗ್ಯ ತಪಾಸಣೆಗಾಗಿ ಆಯುಷ್ಮಾನ್ ಆರೋಗ್ಯ ಮಂದಿರಕ್ಕೆ ಕಳುಹಿಸುವುದಾಗಿದೆ. ಆಯುಷ್ಮ್ಮಾನ್ ಆರೋಗ್ಯ ಮಂದಿರಗಳಲ್ಲಿ(ಎಎಎಂ) ಆರೋಗ್ಯ ತಪಾಸಣೆ ನಡೆಸಿ ಎನ್‌ಸಿಡಿ ಪೋರ್ಟಲ್‌ಗೆ ಡೇಟಾವನ್ನು ನಮೂದಿಸುತ್ತಾರೆ. ಆರೋಗ್ಯ ತಪಾಸಣೆ, ನಿರ್ವಹಣೆ ಮತ್ತು ಹೆಚ್ಚಿನ ಚಿಕಿತ್ಸೆಗಾಗಿ ಮೇಲ್ದರ್ಜೆ ಆಸ್ಪತ್ರೆಗಳಿಗೆ ಕಳುಹಿಸಬಹುದು. ರೋಗನಿರ್ಣಯ, ಚಿಕಿತ್ಸೆ ಮತ್ತು ದೀರ್ಘಕಾಲೀನ ನಿರ್ವಹಣೆ ಸೇವೆಗಳನ್ನು ಒದಗಿಸಲಾಗುವುದು.ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆಹಾವೇರಿ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಬುಧವಾರ ಜರುಗಿದ ಸಭೆಯಲ್ಲಿ ಗೃಹ ಆರೋಗ್ಯ ಯೋಜನೆಗೆ ಆಶಾ ಕೈಪಿಡಿ ಬಿಡುಗಡೆ ಮಾಡುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಚಾಲನೆ ನೀಡಿದರು. ಈ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಎಸ್. ಪಾಟೀಲ, ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ, ಶಾಸಕ ಹಾಗೂ ವಿಧಾನಸಭೆ ಉಪ ಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷ ಎಸ್.ಆರ್. ಪಾಟೀಲ, ಬೆಂಗಳೂರು ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯದ ನಿರ್ದೇಶಕಿ ಡಾ. ಬಿ.ಎಲ್. ಸುಜಾತಾ ರಾಥೋಡ, ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರುಚಿ ಬಿಂದಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋದಾ ವಂಟಗೋಡಿ, ವೈದ್ಯಕೀಯ ನಿರ್ದೇಶಕ ಡಾ. ಪ್ರದೀಪಕುಮಾರ ಎಂ.ವಿ., ಆರೋಗ್ಯ ಇಲಾಖೆ ಅಧಿಕಾರಿಗಳು ಇದ್ದರು.ಉಚಿತ ಆರೋಗ್ಯ ತಪಾಸಣೆ...30 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನ ವ್ಯಕ್ತಿಗಳಿಗೆ 14 ಅಸಾಂಕ್ರಾಮಿಕ ರೋಗಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ಬಾಯಿ ಕ್ಯಾನ್ಸರ್, ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್, ಡಯಾಬಿಟಿಕ್ ಫುಟ್ ಮತ್ತು ರೆಟಿನೋಪತಿ, ಮಾನಸಿಕ ಆರೋಗ್ಯ ಅಸ್ವಸ್ಥತೆಗಳು, ನರವೈಜ್ಞಾನಿಕ ಅಸ್ವಸ್ಥತೆಗಳು, ನಿದ್ರೆಯಲ್ಲಿ ಉಸಿರುಗಟ್ಟುವಿಕೆ, ದೀರ್ಘಕಾಲದ ಮೂತ್ರಪಿಂಡದ ಕಾಯಿಲೆ, ದೀರ್ಘಕಾಲದ ಪ್ರತಿರೋಧಕ ಶ್ವಾಸಕೋಶದ ಕಾಯಿಲೆ, ಆಲ್ಕೋಹಾಲ್ ರಹಿತ ಕೊಬ್ಬಿನ ಪಿತ್ತಜನಕಾಂಗದ ಕಾಯಿಲೆ ಮತ್ತು ರಕ್ತಹೀನತೆಯ(19-29 ವರ್ಷ ವಯಸ್ಸಿನವರಿಗೆ) ಆರೋಗ್ಯ ತಪಾಸಣೆಯನ್ನು ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ(ಎಎಎಂ) ಉಚಿತವಾಗಿ ನಡೆಸಲಾಗುವುದು.