
ಕನ್ನಡಪ್ರಭ ವಾರ್ತೆ ಉಡುಪಿರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ‘ಗೃಹ ಆರೋಗ್ಯ ಯೋಜನೆ’ಯ ಮೂಲಕ ಜನಸಾಮಾನ್ಯರ ಮನೆ ಬಾಗಿಲಿಗೆ ಅರೋಗ್ಯ ಸೇವೆ ತಲುಪಿಸಿ, ಅಸಾಂಕ್ರಾಮಿಕ ರೋಗಗಳಿಂದ ಉಂಟಾಗುವ ಮರಣ ಪ್ರಮಾಣವನ್ನು ಕಡಿಮೆ ಮಾಡಿ ಎಂದು ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದ್ದಾರೆ.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಆರೋಗ್ಯ ನಮ್ಮ ಆದ್ಯತೆಯಾಗಬೇಕು. ಕೆಲವರಿಗೆ ತಮಗಿರುವ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವೇ ಇರುವುದಿಲ್ಲ. ಇಂತಹ ಆರೋಗ್ಯ ಸಮಸ್ಯೆಗಳನ್ನು ಹೊಂದಿರುವವರನ್ನು ಅವರಿರುವೆಡೆಯಲ್ಲಿ ಗುರುತಿಸಿ, ಸೂಕ್ತ ಚಿಕಿತ್ಸೆ ನೀಡಲು ಗೃಹ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದ ಅವರು, ಕಾಯಿಲೆಗಳು ಬಂದ ನಂತರ ಚಿಕಿತ್ಸೆ ಪಡೆಯುವ ಬದಲು ರೋಗ ಬಾರದಂತೆ ಎಚ್ಚರವಹಿಸಬೇಕು ಎಂದರು.
ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಪ್ರಸ್ತುತ ಜೀವನ ಶೈಲಿ ಬದಲಾವಣೆಯಿಂದ ಅನೇಕ ರೋಗಗಳು ಹೆಚ್ಚುತ್ತಿವೆ. ಗ್ರಾಮೀಣ ಭಾಗದ, ಬಡಜನರು ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿರುವುದು ಮನಗಂಡ ಸರ್ಕಾರ ಈ ಗೃಹ ಅರೋಗ್ಯ ಯೋಜನೆ ಜಾರಿಗೊಳಿಸಿದೆ. ಕಾರ್ಯಕ್ರಮ ಅನುಷ್ಠಾನಕ್ಕೆ ಸಂಬಂಧಿಸಿದಂತೆ ನಗರಸಭೆಯ ವತಿಯಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಬಸವರಾಜ ಜಿ. ಹುಬ್ಬಳ್ಳಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಮರಾವ್, ಕಾರ್ಯಕ್ರಮ ಅನುಷ್ಟಾನಾಧಿಕಾರಿಗಳು, ವೈದ್ಯಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ನಾಗರತ್ನ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿದರು. ಹಿರಿಯ ಅರೋಗ್ಯ ನಿರೀಕ್ಷಣಾಧಿಕಾರಿ ಸತೀಶ್ ರಾವ್ ನಿರೂಪಿಸಿ, ವಂದಿಸಿದರು.