ಕನ್ನಡಪ್ರಭ ವಾರ್ತೆ ಹನೂರು
ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ರೈತರ ಸಮಸ್ಯೆಗಳು ಗಮನದಲ್ಲಿದ್ದು ಹಂತ ಹಂತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ ಎಂದು ಶಾಸಕ ಎಂ.ಆರ್. ಮಂಜುನಾಥ್ ತಿಳಿಸಿದರು.ಪಟ್ಟಣದ ಲೋಕೋಪಯೋಗಿ ಅತಿಥಿ ಗೃಹದಲ್ಲಿ ಸಾಮೂಹಿಕ ನಾಯಕತ್ವ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹೆಸರು ಸೇನೆ ರೈತ ಮುಖಂಡರ ಸಭೆಯಲ್ಲಿ ಮಾತನಾಡಿದರು.ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇತ್ತೀಚೆಗೆ ಕಾಡುಪ್ರಾಣಿಗಳ ಹಾವಳಿ ಹೆಚ್ಚಾಗಿರುವ ಬಗ್ಗೆ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಕಾಡುಪ್ರಾಣಿಗಳ ಹಾವಳಿಗೆ ಶಾಶ್ವತ ಕ್ರಮ ವಹಿಸಲು ಸೂಚನೆ ನೀಡಿದ್ದೇನೆ. ಅರಣ್ಯ ಇಲಾಖೆ ಅಧಿಕಾರಿಗಳು ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ ಎಂದರು.
ಕ್ಷೇತ್ರ ವ್ಯಾಪ್ತಿಯ ಕೆಲವು ಗ್ರಾಮಗಳಲ್ಲಿ ಅಂತರ್ಜಲ ಮಟ್ಟ ಕುಸಿತವಾಗಿರುವುದರಿಂದ ನೀರಿನ ಸಮಸ್ಯೆ ಉಂಟಾಗಿರುವುದರಿಂದ ಈಗಾಗಲೇ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿದ್ದರೆ ಅಂತಹ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಇದಲ್ಲದೆ ಖಾಸಗಿ ಬೋರ್ವೆಲ್ ಗಳ ಮುಖಾಂತರವೂ ನೀರು ಪಡೆದುಕೊಂಡು ಸಾರ್ವಜನಿಕರಿಗೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂದರು.ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಮಾತನಾಡಿ, ಮಲೆ ಮಹದೇಶ್ವರ ವನ್ಯಜೀವಿ ಧಾಮವನ್ನು ಹುಲಿ ಸಂರಕ್ಷಿತ ಪ್ರದೇಶ ಘೋಷಣೆ ಮಾಡುವ ಮುನ್ನ ಸರ್ಕಾರ ಸರಿಯಾದ ಕ್ರಮ ಕೈಗೊಳ್ಳಬೇಕು. ಅಲ್ಲಿನ ಮೂಲ ನಿವಾಸಿಗಳಿಗೆ ಯಾವುದೇ ತೊಂದರೆಯಾಗದಂತೆ ಸೂಕ್ತ ಕ್ರಮ ವಹಿಸಬೇಕು ಎಂದರು.ರೈತರು ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ನಿಗದಿ ಪಡಿಸುವ ನಿಟ್ಟಿನಲ್ಲಿ ಸದನದಲ್ಲಿ ವಿಸ್ಕೃತವಾಗಿ ಚರ್ಚೆ ನಡೆಸಿ ರೈತರಿಗೆ ಅನುಕೂಲ ಕಲ್ಪಿಸಬೇಕು ಎಂದು ಮನವಿ ಮಾಡಿದರು.
ಚಂಗಡಿ ಗ್ರಾಮ ಸ್ಥಳಾಂತರಕ್ಕೆ ಒತ್ತು: ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ ಬರುವ ಚಂಗಡಿ ಗ್ರಾಮ ಸ್ಥಳಾಂತರ ಪ್ರಕ್ರಿಯೆ ಸರ್ಕಾರದ ಹಂತದಲ್ಲಿದ್ದು ಅತಿ ಶೀಘ್ರದಲ್ಲಿಯೇ ಮುಖ್ಯಮಂತ್ರಿಗಳು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಚಂಗಡಿ ಗ್ರಾಮವನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.ಇನ್ನು ಕಾಡಂಚಿನ ಗ್ರಾಮಗಳ ರೈತರಿಗೆ ಮೂಲಭೂತ ಸೌಲಭ್ಯಾಕರ್ ಪಿಸುವ ಸಲುವಾಗಿ ಹಲವಾರು ಬಾರಿ ಅಧಿಕಾರಿಗಳ ಸಭೆ ನಡೆಸಿ ಖುದ್ದು ಗ್ರಾಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದೇನೆ. ಹನೂರು ಕ್ಷೇತ್ರದ ಪ್ರತಿ ಹಳ್ಳಿಹಳ್ಳಿಗೆ ಮೂಲಭೂತ ಸೌಲಭ್ಯ ಒದಗಿಸಿಕೊಡುವುದೇ ನನ್ನ ಮೊದಲ ಆದ್ಯತೆ ಎಂದರು.
ಈ ವೇಳೆ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ಗುಂಡ್ಲುಪೇಟೆ ಅಧ್ಯಕ್ಷ ಷಣ್ಮುಗ ಸ್ವಾಮಿ ಚಾಮರಾಜನಗರ ಅಧ್ಯಕ್ಷ ಬಸವಣ್ಣ, ಜಿಲ್ಲಾ ಉಪಾಧ್ಯಕ್ಷ ಮಹೇಶ್, ಹನೂರು ಅಧ್ಯಕ್ಷ ಮಾದಪ್ಪ, ಚಂಗಡಿ ಕರಿಯಪ್ಪ, ಪ್ರಧಾನ ಕಾರ್ಯದರ್ಶಿ ಶಾಂತಕುಮಾರ್ ವಿನೇಶ್, ಅಮೋಘ ಸೇರಿದಂತೆ ಇನ್ನಿತರರು ಹಾಜರಿದ್ದರು.