ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಅಧಿವೇಶನದ ಅತ್ಯಮೂಲ್ಯವಾದ ಸಮಯು ಕೇವಲ ಪ್ರತಿಭಟನೆ, ಸತ್ಯಾಗ್ರಹ, ಧರಣಿಗಳಿಗೆ ವ್ಯರ್ಥವಾಗುತ್ತಿದೆ ಎಂದು ಹಲವರ ಅಭಿಪ್ರಾಯ ವ್ಯಕ್ತಪಡಿಸಿದ್ದು, ಈ ಹಿನ್ನೆಲೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುವ ಅಧಿವೇಶನ ವ್ಯವಸ್ಥಿತವಾಗಿ ಹಾಗೂ ಅರ್ಥಪೂರ್ಣವಾಗಿ ನಡೆಸಲು ಸಲಹೆ ನೀಡಿದ್ದಾರೆ.
ಅಧಿವೇಶನದ ಸಂದರ್ಭದಲ್ಲಿ ಕೃಷಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಂದಾಯ ಸೇರಿದಂತೆ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಹಲವಾರು ಸಂಘಟನೆಗಳು ಧರಣಿ, ಸತ್ಯಾಗ್ರಹ ನಡೆಸುವುದು ಸಾಮಾನ್ಯವಾಗಿದ್ದು, ಈ ಹಿನ್ನೆಲೆಯಲ್ಲಿ ಅಧಿವೇಶನ ಆರಂಭಗೊಳ್ಳುವ ಮುಂಚೆಯೇ ಸಂಬಂಧಪಟ್ಟ ಸಂಘಟನೆಗಳ ಪ್ರಮುಖರ ಸಭೆ ಕರೆದು ಅವರ ಬೇಡಿಕೆ ಕುರಿತು ಸವಿಸ್ತಾರವಾಗಿ ಚರ್ಚೆ ನಡೆಸಿ ಅವುಗಳ ಪರಿಹಾರಕ್ಕೆ ಪ್ರಯತ್ನಿಸಬೇಕು. ಆ ಮೂಲಕ ಸಂಘಟನೆಗಳು ಅಧಿವೇಶನದ ಸಂದರ್ಭದಲ್ಲಿ ಸುವರ್ಣ ಸೌಧದ ಹೊರಗಡೆ ಧರಣಿ ಸತ್ಯಾಗ್ರಹ ನಡೆಸದಂತೆ ಸಂಘಟನೆಗಳ ಮುಖಂಡರಲ್ಲಿ ಮನವಿ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ತಮ್ಮ ಸಚಿವ ಸಂಪುಟದ ಸಂಬಂಧಪಟ್ಟ ಸಚಿವರಿಗೆ ಸೂಚಿಸಬೇಕು. ವಿಷಯವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಕೋರಿದ್ದಾರೆ.