ಶಿರಸಿ: ತೋಟಗಾರಿಕೆ ಪ್ರಾಧಾನ್ಯ ಹೊಂದಿರುವ ಉತ್ತರ ಕನ್ನಡ ಜಿಲ್ಲೆಯಲ್ಲಿ ತೋಟಗಾರಿಕೆ ಮಹತ್ವದ ಕುರಿತು ರೈತರಿಗೆ ಹಾಗೂ ಜನಸಾಮಾನ್ಯರಿಗೆ ಅರಿವು ಮೂಡಿಸಿ ತೋಟಗಾರಿಕೆಯಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸಿ, ಪ್ರೋತ್ಸಾಹಿಸಲು ಮಾ. ೫ ಮತ್ತು ೬ರಂದು ಬನವಾಸಿಯ ಕದಂಬೋತ್ಸವದಲ್ಲಿ ಜಿಲ್ಲಾ ಮಟ್ಟದ ತೋಟಗಾರಿಕೆ ಫಲಪುಷ್ಪ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ ಎಂದು ತೋಟಗಾರಿಕೆ ಉಪನಿರ್ದೇಶಕ ಡಾ. ಬಿ.ಪಿ. ಸತೀಶ ತಿಳಿಸಿದರು.
ಸಭಾಪತಿ ಬಸವರಾಜ ಹೊರಟ್ಟಿ ಘನ ಉಪಸ್ಥಿತಿಯಲ್ಲಿ ನಡೆಯುವ ಫಲಪುಷ್ಪ ಪ್ರದರ್ಶನವನ್ನು ಮಾ. ೫ರಂದು ಸಂಜೆ ೫ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ಉದ್ಘಾಟಿಸಲಿದ್ದಾರೆ. ಶಾಸಕ ಶಿವರಾಮ ಹೆಬ್ಬಾರ ಅಧ್ಯಕ್ಷತೆ ವಹಿಸಲಿದ್ದಾರೆ. ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ, ಎಂಸಿಎ ಅಧ್ಯಕ್ಷ ಸತೀಶ ಸೈಲ್, ಸಂಸದರು, ಶಾಸಕರು, ವಿವಿಧ ಸ್ತರದ ಜನಪ್ರತಿನಿಧಿಗಳು ಉಪಸ್ಥಿತರಿರಲಿದ್ದಾರೆ ಎಂದ ಅವರು, ಫಲಪುಷ್ಪ ಪ್ರದರ್ಶನಕ್ಕೆ ಇಲಾಖೆಯಿಂದ ₹೧೦ ಲಕ್ಷ ಅನುದಾನ ಲಭ್ಯವಿದ್ದು, ೧೫ರಿಂದ ೨೦ ತಳಿಗಳ ೨೫ ಸಾವಿರ ಹೂವುಗಳು, ೨,೫೦೦ ಹೂವಿನ ಕುಂಡಗಳನ್ನು ಪ್ರದರ್ಶನ ಮಾಡಲಾಗುವುದು ಎಂದರು.
ಕೃಷಿ ಇಲಾಖೆಯ ಉಪನಿರ್ದೇಶಕ ಟಿ.ಎನ್. ನಟರಾಜ ಮಾತನಾಡಿ, ಕದಂಬೋತ್ಸವದಲ್ಲಿ ನಡೆಯುವ ಫಲ ಪುಷ್ಪ ಪ್ರದರ್ಶನದಲ್ಲಿ ೩೦ ಮಳಿಗೆಗಳಲ್ಲಿ ವಸ್ತು ಪ್ರದರ್ಶನಕ್ಕೆ ಏರ್ಪಾಟು ಮಾಡಿಕೊಳ್ಳಲಾಗಿದ್ದು, ಈ ವರ್ಷ ಕೇಂದ್ರ ಸರ್ಕಾರವು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಣೆ ಮಾಡಿದೆ. ಆದ್ದರಿಂದ ಸಿರಿಧಾನ್ಯಕ್ಕೆ ಹೆಚ್ಚು ಆದ್ಯತೆ ನೀಡಲಾಗಿದೆ. ಮಾ. ೫ರಂದು ಬೆಳಗ್ಗೆ ೯ ಗಂಟೆಗೆ ತೋಟಗಾರಿಕಾ ಮತ್ತು ಅರಣ್ಯ ಕಾಲೇಜಿನ ವಿದ್ಯಾರ್ಥಿಗಳ ಆಶ್ರಯದಲ್ಲಿ ಸಿರಿಧಾನ್ಯ ನಡಿಗೆ ಎಂಬ ಕಾರ್ಯಕ್ರಮ ಹಮ್ಮಿಕೊಂಡು, ಜನರಲ್ಲಿ ಸಿರಿಧಾನ್ಯದ ಮಹತ್ವದ ಕುರಿತು ಜಾಗೃತಿ ಮೂಡಿಸಲಾಗುತ್ತದೆ ಎಂದರು.ಸುದ್ದಿಗೋಷ್ಠಿಯಲ್ಲಿ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸತೀಶ ಹೆಗಡೆ, ಸಹಾಯಕ ನಿರ್ದೇಶಕ ಗಣೇಶ ಹೆಗಡೆ, ಕೃಷಿ ಇಲಾಖೆಯ ಅಧಿಕಾರಿ ನಂದೀಶ ಮತ್ತಿತರರು ಇದ್ದರು.