ರಾಣಿಬೆನ್ನೂರು: ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಜಾರಿಗೆ ತಂದಿರುವ ಕಾಯಕಲ್ಪ ಉಪಕ್ರಮವು ಸರ್ಕಾರಿ ಆಸ್ಪತ್ರೆಗಳ ಗುಣಮಟ್ಟ ಸುಧಾರಣೆಯಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಾಗರಾಜ ಹೇಳಿದರು.
ಆಸ್ಪತ್ರೆಯಲ್ಲಿ ಉತ್ಪತ್ತಿಯಾಗುವ ಜೈವಿಕ ವೈದ್ಯಕೀಯ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಂಗಡಿಸಿ, ಸಂಗ್ರಹಿಸಿ ಹಾಗೂ ನಿಯಮಾನುಸಾರ ವಿಲೇವಾರಿ ಮಾಡುವುದು ಸೋಂಕು ನಿಯಂತ್ರಣದ ಪ್ರಮುಖ ಭಾಗವಾಗಿದೆ. ಇದರಲ್ಲಿ ಯಾವುದೇ ರೀತಿಯ ನಿರ್ಲಕ್ಷ್ಯವಾಗದಂತೆ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಆಸ್ಪತ್ರೆಯ ಸುತ್ತಮುತ್ತಲಿನ ಪ್ರದೇಶ, ವಾರ್ಡ್, ಹೊರರೋಗಿಗಳ ವಿಭಾಗ, ಶೌಚಾಲಯ ಹಾಗೂ ರೋಗಿಗಳು ಮತ್ತು ಸಾರ್ವಜನಿಕರು ಸಂಚರಿಸುವ ಸ್ಥಳಗಳಲ್ಲಿ ನಿರಂತರ ಸ್ವಚ್ಛತೆ ಕಾಪಾಡಬೇಕು ಎಂದು ಸೂಚಿಸಿದರು.
ಜನಸಂಖ್ಯೆ ಹಾಗೂ ಆಸ್ಪತ್ರೆಗೆ ಆಗಮಿಸುವ ರೋಗಿಗಳ ಸಂಖ್ಯೆಗೆ ಅನುಗುಣವಾಗಿ ಇನ್ನಷ್ಟು ವೈದ್ಯಕೀಯ ಸೌಲಭ್ಯ, ಅಗತ್ಯ ಉಪಕರಣ ಹಾಗೂ ಸಿಬ್ಬಂದಿ ಬೇಕಾಗಿರುವುದು ಗಮನಕ್ಕೆ ಬಂದಿದೆ. ಈ ಕುರಿತು ಸರ್ಕಾರದ ಗಮನಕ್ಕೆ ತಂದು ಅಗತ್ಯ ಸೌಲಭ್ಯಗಳನ್ನು ಒದಗಿಸಲು ಕ್ರಮಕೈಗೊಳ್ಳಲಾಗುವುದು ಎಂದರು.ಈ ವೇಳೆ ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಅವರು, ಸ್ವಚ್ಛತೆ, ಜೈವಿಕ ತ್ಯಾಜ್ಯ ನಿರ್ವಹಣೆ, ಶೌಚಾಲಯ, ಹೊರರೋಗಿಗಳ ವಿಭಾಗ ಸೇರಿದಂತೆ ವಿವಿಧ ವ್ಯವಸ್ಥೆಗಳನ್ನು ಪರಿಶೀಲಿಸಿ, ಅಗತ್ಯ ಸಲಹೆ-ಸೂಚನೆ ನೀಡಿದರು.