ಹೊಸಪೇಟೆ; ವಿದ್ಯಾರ್ಥಿಗಳಿಗೆ ಕಾಲೇಜು ಶಿಕ್ಷಣಕ್ಕೆ ಮಾತ್ರವಲ್ಲದೆ ವಿವಿಧ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಓದಲು ವಿದ್ಯಾರ್ಥಿನಿಲಯಗಳು ಸಾಕಷ್ಟು ಅನುಕೂಲವಾಗುತ್ತವೆ ಎಂದು ವಿಜಯನಗರ ಶಾಸಕ ಎಚ್.ಆರ್. ಗವಿಯಪ್ಪ ಹೇಳಿದರು.
ವಿದ್ಯಾರ್ಥಿಗಳು ಸರ್ಕಾರದಿಂದ ಒದಗಿಸುವ ಎಲ್ಲ ಸೌಲಭ್ಯಗಳನ್ನು ಸರಿಯಾಗಿ ಉಪಯೋಗ ಮಾಡಿಕೊಂಡು ತಮ್ಮ ತಂದೆ, ತಾಯಿಯವರ ಆಸೆಯನ್ನು ಈಡೇರಿಸಬೇಕು, ವಿದ್ಯಾಭ್ಯಾಸದ ಜೊತೆಗೆ ಉತ್ತಮ ಸಂಸ್ಕಾರ ಕಲಿಬೇಕು. ತಂದೆ, ತಾಯಿ, ಗುರು ಹಿರಿಯರಿಗೆ ಗೌರವ ಕೊಡಬೇಕು ಎಂದು ಶಾಸಕರು ಸಲಹೆ ನೀಡಿದರು.
ಜಿಲ್ಲಾಧಿಕಾರಿ ಎಂ.ಎಸ್.ದಿವಾಕರ್ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕವಾಗಿ ಸಾಧನೆ ಮಾಡಬೇಕಾದರೆ ಅವರಿಗೆ ಮೊದಲು ಮೂಲಭೂತ ಸೌಲಭ್ಯಗಳಿರಬೇಕು. ವಿಜಯನಗರ ಜಿಲ್ಲೆಯನ್ನು ಶೈಕ್ಷಣಿಕವಾಗಿ ಮುಂದೆ ತರಲು ಸಾಕಷ್ಟು ಯೋಜನೆಗಳು ರೂಪಿಸಲಾಗುತ್ತಿದೆ. ಜಿಲ್ಲೆಯಲ್ಲಿ ಕಾನೂನು ಪದವಿ ಕಾಲೇಜು ಮತ್ತು ಮೆಡಿಕಲ್ ಕಾಲೇಜು ಸೇರಿದಂತೆ ಉನ್ನತ ಶಿಕ್ಷಣದ ಕಾಲೇಜುಗಳನ್ನು ತೆರೆಯಲು ಯೋಜನೆ ರೂಪಿಸಿದ್ದು, ಈಗಾಗಲೇ ಕಾನೂನು ಪದವಿ ಕಾಲೇಜು ಆರಂಭಕ್ಕೆ ಸ್ಥಳ ನಿಗದಿಯಾಗಿದೆ. ಉಳಿದ ಕಾಲೇಜುಗಳಿಗೆ ಉತ್ತಮ ಸ್ಥಳಕ್ಕಾಗಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಹೇಳಿದರು.ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್.ಎನ್.ಎಫ್ ಇಮಾಮ್ ನಿಯಾಜಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಕೆ.ಬಿ.ರಾಮಚಂದ್ರಪ್ಪ ಸೇರಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿವಿಧ ಅಧಿಕಾರಿಗಳು ಹಾಗೂ ವಸತಿ ನಿಲಯಗಳ ವಾರ್ಡನ್‌ಗಳು ಮತ್ತು ವಿದ್ಯಾರ್ಥಿಗಳು ಇದ್ದರು.