ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿಕೆ । ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಚಾಲನೆಕನ್ನಡಪ್ರಭ ವಾರ್ತೆ ಚಿತ್ರದುರ್ಗ
ನಗರದ ಒನಕೆ ಓಬವ್ವ ಜಿಲ್ಲಾ ಕ್ರೀಡಾಂಗಣದ ಮುಂಭಾಗದ ಬುದ್ಧನಗರದಲ್ಲಿ ಅಧಿಕಾರಿಗಳು ಹಾಗೂ ಗಣತಿದಾರರೊಂದಿಗೆ ಮನೆ ಭೇಟಿ ನೀಡಿ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ರಾಜ್ಯದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಲಾಗುವುದು ಎಂದು ರಾಜ್ಯ ಸರ್ಕಾರವು ಪಕ್ಷದ ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ, ರಾಜ್ಯಾದ್ಯಂತ ಕಾರ್ಯ ಪ್ರಾರಂಭವಾಗಿದೆ. ರಾಜ್ಯದಲ್ಲಿ ಜಾತಿ ಗಣತಿ ಮಾಡುತ್ತಿಲ್ಲ. ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸ್ಥಿತಿಗತಿಗಳ ಕುರಿತು ಮಾಹಿತಿಯನ್ನು ಅಂಕಿ-ಅಂಶಗಳ ಮೂಲಕ ಸಂಗ್ರಹಿಸುವುದು, ಆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಸಿಗಬೇಕು ಎಂಬುದೇ ಸಮೀಕ್ಷೆಯ ಉದ್ದೇಶವಾಗಿದೆ ಎಂದರು.
ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025ಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ 4,62,280 ಮನೆಗಳನ್ನು ಗುರುತಿಸಲಾಗಿದ್ದು, ಒಟ್ಟು 3768 ಗಣತಿದಾರರು, 376 ಮೇಲ್ವಿಚಾರಕರು, 92 ಮಾಸ್ಟರ್ ಟ್ರೈನರ್ಸ್‍ಗಳನ್ನು ನೇಮಿಸಲಾಗಿದೆ ಎಂದು ತಿಳಿಸಿದರು.ಸಮೀಕ್ಷೆಯಲ್ಲಿ ಒಟ್ಟು 60 ಪ್ರಶ್ನಾವಳಿಗಳು ಕೇಳಿದ್ದು, ಮುಖ್ಯವಾಗಿ ಆಧಾರ್ ಕಾರ್ಡ್ ಅಥವಾ ರೇಷನ್ ಕಾರ್ಡ್ ಆಧಾರದಲ್ಲಿ ಸಮೀಕ್ಷೆ ನಡೆಸಲಾಗುತ್ತಿದೆ. ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸಮೀಕ್ಷೆಯ ಬಗ್ಗೆ ಅರಿವು ಮೂಡಿಸಲು ಈಗಾಗಲೇ ಆಶಾ ಕಾರ್ಯಕರ್ತೆಯರು ಹಾಗೂ ಎನ್‍ಆರ್‍ಎಲ್‍ಎಂ ಮೂಲಕ ಮನೆಗಳಿಗೆ ಭೇಟಿ ನೀಡಿ ಕುಟುಂಬ ಅನುಸೂಚಿ ನಮೂನೆಗಳನ್ನು ನೀಡಿ ಜಾಗೃತಿ ಮೂಡಿಸಲಾಗಿದೆ. ಒಟ್ಟು 4,31,000 ಕುಟುಂಬ ಅನುಸೂಚಿಗಳನ್ನು ಚಿತ್ರದುರ್ಗ ಜಿಲ್ಲೆಗೆ ನೀಡಲಾಗಿದ್ದು, ಮನೆಗಳಿಗೆ ನಮೂನೆಗಳನ್ನು ಹಂಚಿಕೆ ಮಾಡಲಾಗುತ್ತಿದೆ ಎಂದರು.
ನಗರಸಭೆ ಅಧ್ಯಕ್ಷೆ ಅನಿತಾ ರಮೇಶ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪುಷ್ಪಲತಾ, ತಹಶೀಲ್ದಾರ್ ಗೋವಿಂದರಾಜು, ನಗರಸಭೆ ಸದಸ್ಯೆ ಶ್ರೀದೇವಿ ಚಕ್ರವರ್ತಿ, ಪೌರಾಯುಕ್ತೆ ಲಕ್ಷ್ಮಿ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು, ಗಣತಿದಾರರು ಇದ್ದರು.