ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೌರಕಾರ್ಮಿಕರ ವಸತಿ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದ್ದು, ಮಳೆಗಾಲ ಆರಂಭಕ್ಕೂ ಮುನ್ನ ಪೌರಕಾರ್ಮಿಕರಿಗೆ ಸೂರು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು. ಪೌರಕಾರ್ಮಿಕರು ಹಲವು ವರ್ಷಗಳಿಂದ ಗುಡಿಸಲು ಹಾಗೂ ತಾತ್ಕಾಲಿಕ ಕುಟೀರಗಳಲ್ಲಿ ಹಾವು-ಚೇಳುಗಳ ಭಯದ ನಡುವೆ ಜೀವನ ಸಾಗಿಸುತ್ತಿದ್ದಾರೆ. ಇಂತಹ ಕಾರ್ಮಿಕರಿಗೆ ಸುರಕ್ಷಿತ ಮತ್ತು ಶಾಶ್ವತ ವಸತಿ ಕಲ್ಪಿಸುವುದು ಸರ್ಕಾರ ಹಾಗೂ ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಬೇಕು ಎಂದು ಅಭಿಪ್ರಾಯಪಟ್ಟರು.
ಕನ್ನಡಪ್ರಭ ವಾರ್ತೆ ಸಕಲೇಶಪುರ
ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಪೌರಕಾರ್ಮಿಕರ ವಸತಿ ನಿರ್ಮಾಣ ಕಾಮಗಾರಿಗೆ ಚಾಲನೆ ದೊರೆತಿದ್ದು, ಮಳೆಗಾಲ ಆರಂಭಕ್ಕೂ ಮುನ್ನ ಪೌರಕಾರ್ಮಿಕರಿಗೆ ಸೂರು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.ಪಟ್ಟಣದ ಕುಶಾಲನಗರದಲ್ಲಿ ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ನಿರ್ಮಾಣವಾಗುತ್ತಿರುವ ಪೌರಕಾರ್ಮಿಕರ ವಸತಿ ಸಮುಚ್ಚಯಕ್ಕೆ ಭೇಟಿ ನೀಡಿ ಅವರು ಕಾಮಗಾರಿಯನ್ನು ಪರಿಶೀಲಿಸಿದರು. ಬಳಿಕ ಮಾತನಾಡಿದ ಅವರು, ಕಳೆದ ದಶಕಗಳಿಂದ ಕುಂಟುತ್ತಾ ಸಾಗುತ್ತಿದ್ದ ವಸತಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸುವ ಉದ್ದೇಶದಿಂದ ವಸತಿ ಸಚಿವರಾದ ಜಮೀರ್ ಅಹ್ಮದ್ ರವರನ್ನು ಭೇಟಿಯಾಗಿ ಚರ್ಚೆ ನಡೆಸಿ ಕಾಮಗಾರಿ ಪುನರಾರಂಭಕ್ಕೆ ಮನವಿ ಮಾಡಲಾಗಿತ್ತು ಎಂದು ತಿಳಿಸಿದರು. ತಮ್ಮ ಮನವಿಗೆ ಸ್ಪಂದಿಸಿದ ಸಚಿವರು ಗುತ್ತಿಗೆದಾರರಿಗೆ ಕಾಮಗಾರಿ ಮರುಪ್ರಾರಂಭಿಸಲು ಸೂಚನೆ ನೀಡಿದ್ದು, ಕಳೆದ ಮೂರು ದಿನಗಳಿಂದ ಕಾಮಗಾರಿ ಮತ್ತೆ ಆರಂಭಗೊಂಡಿದೆ ಎಂದು ಹೇಳಿದರು. ಮಳೆಗಾಲ ಆರಂಭಕ್ಕೂ ಮುನ್ನವೇ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಪ್ರತಿದಿನ ಬೆಳಗ್ಗಿನ ಜಾವ ಎದ್ದು ಪಟ್ಟಣವನ್ನು ಸ್ವಚ್ಛವಾಗಿಡುವ ಪೌರಕಾರ್ಮಿಕರು ಹಲವು ವರ್ಷಗಳಿಂದ ಗುಡಿಸಲು ಹಾಗೂ ತಾತ್ಕಾಲಿಕ ಕುಟೀರಗಳಲ್ಲಿ ಹಾವು-ಚೇಳುಗಳ ಭಯದ ನಡುವೆ ಜೀವನ ಸಾಗಿಸುತ್ತಿದ್ದಾರೆ. ಇಂತಹ ಕಾರ್ಮಿಕರಿಗೆ ಸುರಕ್ಷಿತ ಮತ್ತು ಶಾಶ್ವತ ವಸತಿ ಕಲ್ಪಿಸುವುದು ಸರ್ಕಾರ ಹಾಗೂ ಜನಪ್ರತಿನಿಧಿಗಳ ಆದ್ಯ ಕರ್ತವ್ಯವಾಗಬೇಕು ಎಂದು ಅಭಿಪ್ರಾಯಪಟ್ಟರು.ಕರ್ನಾಟಕ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಒಟ್ಟು 63 ಮನೆಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದು, ಕಾಮಗಾರಿ ವಿಳಂಬವಾಗುತ್ತಿದ್ದ ಹಿನ್ನೆಲೆಯಲ್ಲಿ ಕೆಲ ಪೌರಕಾರ್ಮಿಕರು ತಮ್ಮ ಪಾಲಿನ ಮನೆಗಳನ್ನು ಸ್ವಂತ ಖರ್ಚಿನಲ್ಲಿ ಪೂರ್ಣಗೊಳಿಸಿ ಈಗಾಗಲೇ ವಾಸವಾಗಿದ್ದಾರೆ ಎಂದು ತಿಳಿಸಿದರು. ಇನ್ನೂ ಅನೇಕ ಪೌರಕಾರ್ಮಿಕರು ಕೌಡಳ್ಳಿ ಸಮೀಪದ ಗುಡಿಸಲು ಪ್ರದೇಶಗಳಲ್ಲಿ ವಾಸಿಸುತ್ತಿದ್ದು, ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಎಲ್ಲರಿಗೂ ವಸತಿ ಸೌಲಭ್ಯ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಪೌರಕಾರ್ಮಿಕರ ಮುಖಂಡ ಪಳನಿ, ಕೊಳಚೆ ನಿರ್ಮೂಲನಾ ಮಂಡಳಿ ಎಂಜಿನಿಯರ್ ಜ್ಯೋತ್ಸ್ನಾ ಹಾಗೂ ಗುತ್ತಿಗೆದಾರ ಪವನ್ ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.