ಕನ್ನಡಪ್ರಭ ವಾರ್ತೆ ಗುಡಿಬಂಡೆ
ವಿಶ್ವದಲ್ಲೇ ಭವ್ಯ ಪರಂಪರೆ ಹೊಂದಿರುವ ಭಾರತೀಯ ಸಂಸ್ಕೃತಿ ತನ್ನದೇ ಆದ ಪ್ರಾಮುಖ್ಯತೆ ಹೊಂದಿದೆ. ಅಂತಹ ನಮ್ಮ ಸಂಸ್ಕೃತಿಯನ್ನು ಉಳಿಸಿ ಬೆಳೆಸಲು ನಾವೆಲ್ಲರೂ ಮುಂದಾಗಬೇಕು, ನಮ್ಮ ಧಾರ್ಮಿಕ ಆಚರಣೆಗಳನ್ನು ಪಾಲನೆ ಮಾಡಬೇಕೆಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಿರ್ದೇಶಕ ಸಿ.ಎಸ್.ಪ್ರಶಾಂತ್ ತಿಳಿಸಿದರು.ತಾಲೂಕಿನ ಸೋಮೇನಹಳ್ಳಿ ಗ್ರಾಮದ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಮ್ಮಿಕೊಂಡಿದ್ದ ಸಾಮೂಹಿಕ ಮಂಗಳಗೌರಿ ಪೂಜೆ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಭಾರತದ ಸಂಸ್ಕೃತಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ. ನಮ್ಮ ಸಂಸ್ಕೃತಿಯನ್ನು ನಾವೇ ಮರೆಯಬಾರದು. ಭಾರತೀಯ ಸಂಪ್ರದಾಯದಂತೆ ಆಚರಿಸಿಕೊಂಡು ಬರುತ್ತಿದ್ದ ಹಬ್ಬ, ಹರಿದಿನಗಳನ್ನು ಆಚರಿಸಬೇಕು. ಈ ನಿಟ್ಟಿನಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಪ್ರತಿ ವರ್ಷ ಒಂದೊಂದು ಧಾರ್ಮಿಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.ಆ ಮೂಲಕ ಜನರಲ್ಲಿ ಧಾರ್ಮಿಕ ಪ್ರಜ್ಞೆ ಬೆಳೆಸುವಲ್ಲಿ ಉತ್ತೇಜನ ನೀಡಲಾಗುತ್ತದೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘಗಳ ಕಾರ್ಯವೈಖರಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಿನ್ನೆಲೆ ಮತ್ತು ದ್ಯೇಯೋದ್ದೇಶ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮದ ಮೂಲಕ ವೀರೇಂದ್ರ ಹೆಗ್ಗಡೆಯವರು ಸಮಾಜಕ್ಕೆ ಕೊಡುತ್ತಿರುವ ಕೊಡುಗೆಗಳ ಬಗ್ಗೆ ವಿವರಿಸಿದರು.
ಬಳಿಕ ಜನಜಾಗೃತಿ ವೇದಿಕೆಯ ಜಿಲ್ಲಾ ಸದಸ್ಯೆ ಡಿ.ಎಲ್.ಪರಿಮಳ ಮಾತನಾಡಿ, ದೇಶದ ಸಂಸ್ಕೃತಿ, ಸಂಪ್ರದಾಯವನ್ನು ಉಳಿಸಿ, ಬೆಳೆಸುವುದು ಪ್ರತಿ ತಾಯಂದಿರ ಕರ್ತವ್ಯ, ನಮ್ಮ ದೇಶದ ಜನರಲ್ಲಿ ಪವಿತ್ರವಾದ ಧಾರ್ಮಿಕ ಭಾವನೆಗಳಿದ್ದು, ಈ ಭಾವನೆಗಳಿಗೆ ಪೂರಕವಾಗಿ ಪ್ರತಿಯೊಬ್ಬರೂ ಒಂದೊಂದು ಆಚರಣೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ. ಆದರೆ ಇತ್ತೀಚಿಗೆ ನಮ್ಮಲ್ಲಿ ಪಾಶ್ಚಾತ್ಯ ಸಂಸ್ಕೃತಿ ಹೆಚ್ಚಾಗುತ್ತಿದೆ. ವಿದೇಶಿಗರು ನಮ್ಮ ಸಂಸ್ಕೃತಿಯನ್ನು ಅನುಸರಿಸಲು ಮುಂದಾಗುತ್ತಿದ್ದಾರೆ. ಆದ್ದರಿಂದ ನಾವೆಲ್ಲರೂ ನಮ್ಮ ಸಂಸ್ಕೃತಿಯನ್ನು ಪಾಲಿಸಬೇಕು ಎಂದರು.ಸೋಮೇನಹಳ್ಳಿ ಗ್ರಾಪಂ ಅಧ್ಯಕ್ಷೆ ಸುಮಂಗಳಮ್ಮ, ಗಣ್ಯರಾದ ಜನಾರ್ಧನ್, ಮುನಿರಾಯಪ್ಪ, ವೆಂಕಟೇಶ್, ಶ್ರೀ ಲಕ್ಷ್ಮೀ ವೆಂಕಟರಮಣಸ್ವಾಮಿ ದೇವಸ್ಥಾನ ಸಮಿತಿಯ ಸದಸ್ಯ ವೆಂಕಟೇಶ್, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಧನಂಜಯ್, ವಲಯ ಮೇಲ್ವಿಚಾರಕಿ ಮಂಜುಳಾ ಸೇರಿ ಹಲವರು ಇದ್ದರು.