ಗರ್ಭಕಂಠ ಕ್ಯಾನ್ಸರ್ ತಡೆಗೆ ‘ಎಚ್‌ಪಿವಿ’ ಸಹಕಾರಿ : ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌

KannadaprabhaNewsNetwork | Updated : Mar 27 2025, 07:54 AM IST

ಸಾರಾಂಶ

ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ಪ್ರಥಮ ಹಂತದಲ್ಲಿ ಗಣಿಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 14 ವರ್ಷದ ಹೆಣ್ಣು ಮಕ್ಕಳಿಗೆ ‘ಎಚ್‌ಪಿವಿ’ ಲಸಿಕೆ ವಿತರಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

 ಬೆಂಗಳೂರು : ಮಹಿಳೆಯರಲ್ಲಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟಲು ಸರ್ಕಾರ ಬದ್ಧವಾಗಿದ್ದು, ರಾಜ್ಯದಲ್ಲಿ ಪ್ರಥಮ ಹಂತದಲ್ಲಿ ಗಣಿಬಾಧಿತ ಮತ್ತು ಕಲ್ಯಾಣ ಕರ್ನಾಟಕ ಪ್ರದೇಶದ 14 ವರ್ಷದ ಹೆಣ್ಣು ಮಕ್ಕಳಿಗೆ ‘ಎಚ್‌ಪಿವಿ’ ಲಸಿಕೆ ವಿತರಿಸಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ನಗರದಲ್ಲಿ ಬುಧವಾರ ಆರ್ಟಿಸ್ಟ್ ಫಾರ್ ಹರ್ ಸಂಸ್ಥೆ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ‘ಗರ್ಭಕಂಠ ಕ್ಯಾನ್ಸರ್ ನಿರ್ಮೂಲನಾ ಅಭಿಯಾನ’ಕ್ಕೆ ಚಾಲನೆ ನೀಡಿ ಮಾತನಾಡಿ, ಎಚ್‌ಪಿವಿ ಲಸಿಕಾ ಪ್ರಾಯೋಗಿಕ ಅಭಿಯಾನವನ್ನು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಅನುಷ್ಠಾನಗೊಳಿಸುವ ಬಗ್ಗೆ ಶೀಘ್ರ ನಿರ್ಧಾರ ತೆಗೆದುಕೊಳ್ಳಲಾಗುವುದು. ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗೆ ಎಚ್‌ಪಿವಿ ಲಸಿಕೆ ಸಹಕಾರಿ. ರಾಷ್ಟ್ರೀಯ ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದಡಿ ಈ ಲಸಿಕೆ ಸೇರ್ಪಡೆ ಮಾಡುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲಾಗುತ್ತಿದೆ. ಕಳೆದ ವರ್ಷವೇ ಇದರ ಪ್ರಸ್ತಾಪವಾಗಿದ್ದರೂ ಕೇಂದ್ರ ಬಳಿಕ ಕೈಬಿಟ್ಟಿತು. ದೆಹಲಿ, ಪಂಜಾಬ್ ಮತ್ತು ಸಿಕ್ಕಿಂ ರಾಜ್ಯದಲ್ಲಿ ಶಾಲಾ ಹಂತದಲ್ಲಿಯೇ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಲಾಗುತ್ತಿದೆ. ನಮ್ಮ ರಾಜ್ಯದಲ್ಲೂ ಈ ಲಸಿಕೆ ವಿತರಣೆಗೆ ಸಂಬಂಧಿಸಿ ಮುಖ್ಯಮಂತ್ರಿ ಜತೆಗೆ ಚರ್ಚಿಸಿ, ಈ ಬಾರಿಯ ಬಜೆಟ್‌ನಲ್ಲಿ ಘೋಷಣೆ ಮಾಡಿದ್ದೇವೆ ಎಂದರು.

ಪ್ರಾಥಮಿಕ ಹಂತದಲ್ಲೇ ಕಾನ್ಸರ್ ಪತ್ತೆಯಾದರೆ ಸೂಕ್ತ ಚಿಕಿತ್ಸೆ ಮೂಲಕ ರೋಗವನ್ನು ಗುಣಪಡಿಸಬಹುದು. ಆದರೆ, ಹಿಂಜರಿಕೆ, ಭಯದ ಕಾರಣ ಸಾಕಷ್ಟು ಮಹಿಳೆಯರು ಇದರ ಪರೀಕ್ಷೆಗೆ ಮುಂದೆ ಬರಲ್ಲ. ಹೀಗಾಗಿ ‘ಗೃಹ ಆರೋಗ್ಯ’ ಯೋಜನೆಯಡಿ ಕ್ಯಾನ್ಸರ್‌ ಪತ್ತೆಗೆ ಆದ್ಯತೆ ನೀಡಲಾಗುತ್ತದೆ. ಸ್ತನ, ಗರ್ಭಕಂಠ ಮತ್ತು ಬಾಯಿ ಕ್ಯಾನ್ಸರ್‌ ಪ್ರಕರಣವನ್ನು ಆರಂಭಿಕ ಹಂತದಲ್ಲಿಯೇ ಪತ್ತೆ ಮಾಡಿ, ಚಿಕಿತ್ಸೆಗೂ ಕ್ರಮವಹಿಸಲಾಗುವುದು’ ಎಂದು ಹೇಳಿದರು.

ಆರ್ಟಿಸ್ಟ್ ಫಾರ್ ಹರ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಾ ದಿವಾಕರ್, ‘ವಿವಿಧ ಸಂಘಟನೆಗಳ ನೆರವಿನಿಂದ ಗರ್ಭಕಂಠ ಕ್ಯಾನ್ಸರ್ ನಿರ್ಮೂಲನೆಗೆ ಶ್ರಮಿಸಲಾಗುತ್ತಿದೆ. ಕಳೆದ ಮೂರು ತಿಂಗಳ ಅವಧಿಯಲ್ಲಿ ಎಚ್‌ಡಿಆರ್ ಫೌಂಡೇಷನ್ ವತಿಯಿಂದ ರಾಜ್ಯದ ವಿವಿಧೆಡೆ 4,560 ಹೆಣ್ಣು ಮಕ್ಕಳಿಗೆ ಉಚಿತವಾಗಿ ಲಸಿಕೆ ನೀಡಲಾಗಿದೆ’ ಎಂದು ತಿಳಿಸಿದರು. ಅಸೋಸಿಯೇಷನ್ ಆಫ್ ಹೆಲ್ತ್ ಕೇರ್ ಪ್ರೊವೈಡರ್ಸ್ ಇಂಡಿಯಾ (ಎಎಚ್‌ಪಿಐ) ಅಧ್ಯಕ್ಷ ಡಾ.ಅಲೆಕ್ಸ್ ಥಾಮಸ್, ಡಾ.ವಿಶಾಲ್ ಇದ್ದರು.

Share this article