ಜಿಲ್ಲೆಯ 23,565 ವಿದ್ಯಾರ್ಥಿನಿಯರಿಗೆ ಎಚ್‍ಪಿವಿ ಲಸಿಕೆ

KannadaprabhaNewsNetwork |  
Published : May 17, 2026, 01:15 AM IST
ಚಿತ್ರದುರ್ಗ ಎರಡನೇ ಪುಟದಲೀಡ್    | Kannada Prabha

ಸಾರಾಂಶ

ಚಿತ್ರದುರ್ಗ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಪ್ರೌಢಾಶಾಲೆಗಳ ಮುಖ್ಯ ಶಿಕ್ಷಕರಿಗಾಗಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಎಚ್‍ಪಿವಿ ಲಸಿಕಾ ತರಬೇತಿ ಕಾರ್ಯಕ್ರಮವನ್ನು ಡಿಡಿಪಿಐ ಮಂಜುನಾಥ್ ಉದ್ಘಾಟಿಸಿದರು.

ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಶಿಕ್ಷಕರು, ಪೋಷಕರು ಕೈಜೋಡಿಸಿ: ಡಿಡಿಪಿಐ ಮಂಜುನಾಥ ಕನ್ನಡಪ್ರಭ ವಾರ್ತೆ ಚಿತ್ರದುರ್ಗ

ಹೆಣ್ಣು ಮಕ್ಕಳ ಆರೋಗ್ಯ ರಕ್ಷಣೆಗಾಗಿ ಸರ್ಕಾರ ಜಾರಿಗೆ ತಂದಿರುವ ಎಚ್‍ಪಿವಿ (ಹ್ಯೂಮನ್ ಪ್ಯಾಪಿಲೋಮ ವೈರಸ್) ಲಸಿಕೆಯನ್ನು ಜಿಲ್ಲೆಯ 23,565 ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿದ್ದು ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಲು ಶಿಕ್ಷಕರು ಮತ್ತು ಪೋಷಕರು ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಂ.ಆರ್.ಮಂಜುನಾಥ ಮನವಿ ಮಾಡಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಶನಿವಾರ ಪ್ರೌಢಾಶಾಲೆಗಳ ಮುಖ್ಯ ಶಿಕ್ಷಕರಿಗಾಗಿ ಆಯೋಜಿಸಲಾಗಿದ್ದ ಜಿಲ್ಲಾಮಟ್ಟದ ಎಚ್‍ಪಿವಿ ಲಸಿಕಾ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಜಿಲ್ಲೆಯಾದ್ಯಂತ 8ನೇ ತರಗತಿಯಲ್ಲಿ 11,103 ಹಾಗೂ 9ನೇ ತರಗತಿಯಲ್ಲಿ 12,462 ಹೆಣ್ಣುಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಈ ವಿದ್ಯಾರ್ಥಿನಿಯರಿಗೆ ಲಸಿಕೆ ನೀಡಲು ಸರ್ಕಾರ ಕಾರ್ಯಕ್ರಮ ರೂಪಿಸಿದೆ. ಸರ್ಕಾರಿ, ಅನುದಾನಿತ, ಅನುದಾನ ರಹಿತ, ನವೋದಯ ಹಾಗೂ ಸಿಬಿಎಸ್‍ಇ, ಐಸಿಎಸ್‍ಇ ಶಾಲೆಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಓದುತ್ತಿರುವ ಹೆಣ್ಣುಮಕ್ಕಳಿಗೆ ಈ ಲಸಿಕೆ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದರು.

ಮೇ 25ರಿಂದ 30 ರವರೆಗೆ ಒಂದು ವಾರದ ಅವಧಿಯಲ್ಲಿ ಎಲ್ಲಾ ಶಾಲೆಗಳಲ್ಲಿ ಕಡ್ಡಾಯವಾಗಿ ಪೋಷಕರ ಮತ್ತು ಶಿಕ್ಷಕರ ವಿಶೇಷ ಸಭೆಯನ್ನು ಕರೆಯಬೇಕು ಎಂದು ಸೂಚಿಸಿದ ಅವರು, ಸಭೆಯಲ್ಲಿ ಲಸಿಕೆಯಿಂದಾಗುವ ಪ್ರಯೋಜನಗಳು ಮತ್ತು ಅದರ ಮಹತ್ವವನ್ನು ಪೋಷಕರಿಗೆ ಮನವರಿಕೆ ಮಾಡಿಕೊಟ್ಟು, ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಪ್ರೇರೇಪಿಸಬೇಕು ಎಂದರು.

ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಡಿ.ಎಂ.ಅಭಿನವ ಮಾತನಾಡಿ, ಪೋಲಿಯೋ ಮತ್ತು ಸ್ಮಾಲ್‍ಪಾಕ್ಸ್‍ನಂತಹ ಮಾರಕ ಕಾಯಿಲೆಗಳನ್ನು ದೇಶದಿಂದ ನಿರ್ಮೂಲನೆ ಮಾಡಲು ಲಸಿಕಾ ಅಭಿಯಾನಗಳು ಹೇಗೆ ಯಶಸ್ವಿಯಾದವೋ, ಅದೇ ರೀತಿ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಎಚ್ ಪಿವಿ ಲಸಿಕಾ ಅಭಿಯಾನವನ್ನು ಯಶಸ್ವಿಗೊಳಿಸಲು ಶಿಕ್ಷಕರ ಪಾತ್ರ ಅತ್ಯಂತ ಪ್ರಮುಖವಾಗಿದೆ ಎಂದು ಹೇಳಿದರು.

ಜಾಗತಿಕ ಮಟ್ಟದಲ್ಲಿ ಗರ್ಭಕಂಠದ ಕ್ಯಾನ್ಸರ್ ಮಹಿಳೆಯರನ್ನು ಕಾಡುವ ನಾಲ್ಕನೇ ಅತ್ಯಂತ ಸಾಮಾನ್ಯ ಕ್ಯಾನ್ಸರ್ ಆಗಿದೆ. ಪ್ರತಿವರ್ಷ ವಿಶ್ವದಾದ್ಯಂತ ಸುಮಾರು 6.5 ಲಕ್ಷ ಹೊಸ ಪ್ರಕರಣಗಳು ಪತ್ತೆಯಾಗುತ್ತಿದ್ದು, 3 ಲಕ್ಷಕ್ಕೂ ಅಧಿಕ ಮಹಿಳೆಯರು ಇದರಿಂದ ಮೃತಪಡುತ್ತಿದ್ದಾರೆ. ಭಾರತದಲ್ಲಿಯೂ ಪ್ರತಿ 1 ಲಕ್ಷ ಮಹಿಳೆಯರಲ್ಲಿ ಸರಾಸರಿ 11ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗುತ್ತಿದ್ದು, ಸಾವಿನ ಪ್ರಮಾಣವೂ ಹೆಚ್ಚಾಗಿದೆ. ಕಾಯಿಲೆ ಪತ್ತೆಯಾದವರಲ್ಲಿ ಶೇ.50ರಷ್ಟು ಜನ ಸಾವನ್ನಪ್ಪುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ.

ಎಚ್‍ಪಿವಿ ಲಸಿಕೆಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ನಕಾರಾತ್ಮಕ ವಿಡಿಯೋ ಹಾಗೂ ಸುಳ್ಳು ವದಂತಿಗಳನ್ನು ಸಾರ್ವಜನಿಕರು ಮತ್ತು ಶಿಕ್ಷಕರು ನಂಬಬಾರದು ಎಂದು ಡಾ.ಡಿ.ಎಂ.ಅಭಿನವ ತಿಳಿಸಿದರು. ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ದಿವಾಕರ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯ ಡಿವೈಪಿಸಿ ಹನುಮಂತಪ್ಪ, ಚಿತ್ರದುರ್ಗ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಭಾಗ್ಯಜ್ಯೋತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿಗಳಾದ ಗೋವಿಂದರೆಡ್ಡಿ, ಗೌರಮ್ಮ ಸೇರಿದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಜಿಲ್ಲೆಯ ಶಾಲಾ ಶಿಕ್ಷಣ ಇಲಾಖೆ ಮುಖ್ಯ ಶಿಕ್ಷಕರು, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಯ ಪ್ರಾಂಶುಪಾಲರು, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯದ ಹಿರಿಯ ಮೇಲ್ವಿಚಾರಕರು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆರೋಗ್ಯ ನಿರೀಕ್ಷಕರು, ಯುವಜನ ಸೇವೆ ಹಾಗೂ ಕ್ರೀಡಾ ಇಲಾಖೆಯ ಎನ್‍ಎಸ್‍ಎಸ್ ಹಾಗೂ ನೆಹರು ಯುವ ಕೇಂದ್ರದ ಸಂಯೋಜಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಠ್ಯೇತರ ಚಟುವಟಿಕೆಗಳು ನಾಯಕತ್ವ ಗುಣ ಬೆಳೆಸುತ್ತದೆ
ರೈತರಲ್ಲಿ ಸಂತಸ ತಂದ ಬೀನ್ಸ್, ಸೌತೆಕಾಯಿ