ಶಿವಮೊಗ್ಗ: ನಿವೃತ್ತ ಕೆಎಎಸ್ ಅಧಿಕಾರಿ, ರಾಜ್ಯ ಉಗ್ರಾಣ ನಿಗಮದ ಮಾಜಿ ಅಧ್ಯಕ್ಷ, ಬಿಜೆಪಿ ಮುಖಂಡ ಎಚ್.ಟಿ.ಬಳಿಗಾರ್ (62) ಗುರುವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಅನಾರೋಗ್ಯ ಹಿನ್ನೆಲೆ ಬೆಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ ಬಳಿಗಾರ್ ಅವರು ಅಲ್ಲಿಯೇ ನಿಧನರಾಗಿದ್ದಾರೆ.ಇತ್ತೀಚೆಗಷ್ಟೇ ತೆರೆದ ಹೃದಯ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಅವರು ಬೆಂಗಳೂರಿನ ರಾಮಮೂರ್ತಿ ನಗರದಲ್ಲಿದ್ದರು. ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ಹೋಗಿದ್ದ ಸಂದರ್ಭ ಅಲ್ಲಿಯೇ ಕೊನೆಯುಸಿರೆಳೆದರು. ಅವರಿಗೆ ಪತ್ನಿ, ಇಬ್ಬರು ಹೆಣ್ಣುಮಕ್ಕಳು ಇದ್ದಾರೆ.ವಾಲ್ಮೀಕಿ ಸಮುದಾಯದ ಮುಖಂಡರಾಗಿದ್ದ ಬಳಿಗಾರ್, ತಾಲೂಕಿನ ಮತ್ತಿಕೋಟೆ ಗ್ರಾಮದವರಾಗಿದ್ದಾರೆ. ಕೆಎಎಸ್ ಅಧಿಕಾರಿಯಾಗಿದ್ದ ಅವರು ಹುದ್ದೆಗೆ ರಾಜೀನಾಮೆ ನೀಡಿ ತಾಲೂಕಿಗೆ ಬಂದು ರಾಜಕೀಯ ಕ್ಷೇತ್ರದಲ್ಲಿ ತೊಡಗಿಕೊಂಡಿದ್ದರು.ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ಅವರ ಆಪ್ತರಾಗಿದ್ದ ಬಳಿಗಾರ್ ಕಾಂಗ್ರೆಸ್, ಜೆಡಿಎಸ್‌ನಲ್ಲಿ ಸಕ್ರಿಯವಾಗಿದ್ದರು. ಶಿಕಾರಿಪುರ ಕ್ಷೇತ್ರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಎರಡು ಬಾರಿ ಜೆಡಿಎಸ್‌ನಿಂದ ಕಣಕ್ಕಿಳಿದು ಪರಾಭವಗೊಂಡಿದ್ದರು. ಅಚ್ಚರಿಯ ಬೆಳವಣಿಗೆಯಲ್ಲಿ ೨೦೨೨ರ ನವೆಂಬರ್‌ನಲ್ಲಿ ಬಿಜೆಪಿಗೆ ಸೇರ್ಪಡೆಗೊಂಡು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿದ್ದರು.ಶಿಕಾರಿಪುರ ಏತ ನೀರಾವರಿ ಯೋಜನೆ ಜಾರಿ ಸೇರಿದಂತೆ, ತಾಲೂಕಿನ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ್ದರು. ತಾಲೂಕಿನಲ್ಲಿ ಪ್ರಭಾವ ಬೆಳೆಸಿಕೊಂಡಿದ್ದರು.ಗಣ್ಯರ ಸಂತಾಪ:
ಬಿಜೆಪಿ ಮುಖಂಡ ಎಚ್.ಟಿ ಬಳಿಗಾರ್ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಹಾಗೂ ಸಂಸದ ಬಿ.ವೈ.ರಾಘವೇಂದ್ರ ತೀವ್ರ ಸಂತಾಪ ಸೂಚಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿರುವ ಸಚಿವ ಮಧುಬಂಗಾರಪ್ಪ ಅವರು, ಬಳಿಗಾರ್ ರವರು ತಂದೆ ಬಂಗಾರಪ್ಪ ಜಿಯವರ ಅಭಿಮಾನಿಯಾಗಿದ್ದರು. ಕೆಎಎಸ್ ಅಧಿಕಾರಿ ಹುದ್ದೆಗೆ ರಾಜೀನಾಮೆ ನೀಡಿ ನಮ್ಮ ತಂದೆಯವರೊಂದಿಗೆ ರಾಜಕೀಯ ಕ್ಷೇತ್ರಕ್ಕೆ ಪ್ರವೇಶಿಸಿ ನಂತರ ನನ್ನೊಂದಿಗೆ ಹಲವಾರು ವರ್ಷ ಅತ್ಯಂತ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿ ಅಪಾರ ಅಭಿಮಾನಿಗಳು, ಕಾರ್ಯಕರ್ತರನ್ನು ಗಳಿಸಿದ್ದರು.ವಾಲ್ಮೀಕಿ ಸಮಾಜದ ಅಧ್ಯಕ್ಷರಾಗಿ ಸಹಕಾರಿ ಸಂಸ್ಥೆಯ ಅಧ್ಯಕ್ಷರಾಗಿ, ಕರ್ನಾಟಕ ಉಗ್ರಣ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಅವರು ಸಲ್ಲಿಸಿರುವ ಸೇವೆ ಅನನ್ಯವಾದುದು. ಇವರ ನಿಧನದಿಂದ ಸಾರ್ವಜನಿಕ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದ್ದು, ಇವರ ಅಗಲಿಕೆ ನೋವನ್ನು ಭರಿಸುವ ಶಕ್ತಿ ಅವರ ಕುಟುಂಬ ವರ್ಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.
ಸಂಸದ ಬಿ.ವೈ ರಾಘವೇಂದ್ರ ಪತ್ರಿಕೆ ಹೇಳಿ ನೀಡಿ, ಎಚ್.ಟಿ.ಬಳಿಗಾರ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿದು ತುಂಬಾ ದು:ಖವಾಯಿತು. ಇವರು ಸರ್ಕಾರಿ ಅಧಿಕಾರಿಯಾಗಿ ಸೇವೆಗೆ ಸಲ್ಲಿಸಿ, ಕಾರಣಾಂತರದಿಂದ ಸ್ವಯಂ ನಿವೃತ್ತಿ ಪಡೆದು ಜನಸೇವೆ ಮಾಡುವ ಉದ್ದೇಶದಿಂದ ರಾಜಕೀಯ ಪ್ರವೇಶಿಸಿ, ಪರಿಶಿಷ್ಟ ವರ್ಗದವರ ಸಮುದಾಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಇವರು ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿಯೂ ಕೂಡ ಕಾರ್ಯ ನಿರ್ವಹಿಸಿದ್ದಾರೆ. ಪರಿಶಿಷ್ಟ ವರ್ಗದವರ ಏಳಿಗೆಗಾಗಿ ಸಮುದಾಯದ ಸಹಕಾರ ಬ್ಯಾಂಕ್‌ನ್ನು ತೆರೆದು ಸೇವೆ ಸಲ್ಲಿಸಿದ್ದಾರೆ. ಭಾರತೀಯ ಜನತಾ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿದ್ದು, ಸರಳ, ಸಜ್ಜನಿಕೆಯ ರಾಜಕಾರಣಿಯಾಗಿದ್ದರು. ಅವರ ನಿಧನ ಜಿಲ್ಲೆಗೆ ಮತ್ತು ನಾಡಿಗೆ ತುಂಬಲಾರದ ನಷ್ಟವಾಗಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬದವರಿಗೆ, ಬಂಧು ಬಳಗಕ್ಕೆ ಹಾಗೂ ಅವರ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಹೇಳಿದ್ದಾರೆ.