ಹುಬ್ಬಳ್ಳಿ: ರಾಜ್ಯದಲ್ಲಿ ಸೆ.22ರಿಂದ ಅಕ್ಟೋಬರ್ 7ರ ವರೆಗೆ ನಡೆಯಲಿರುವ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಹಿನ್ನೆಲೆಯಲ್ಲಿ "ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ " ವತಿಯಿಂದ ಹುಬ್ಬಳ್ಳಿಯಲ್ಲಿ ಸೆ. 19ರಂದು ಮಧ್ಯಾಹ್ನ 3ಗಂಟೆಗೆ ನಡೆಯಲಿರುವ‘ವೀರಶೈವ ಲಿಂಗಾಯತ ಏಕತಾ ಸಮಾವೇಶ’ಕ್ಕೆ ಇಲ್ಲಿಯ ನೆಹರೂ ಮೈದಾನ ಸಜ್ಜುಗೊಂಡಿದೆ.
ಈ ಸಮಾವೇಶದಲ್ಲಿ 1 ಸಾವಿರಕ್ಕೂ ಹೆಚ್ಚು ಮಠಾಧೀಶರು, ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆ ಇದೆ. ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಜಗದೀಶ ಶೆಟ್ಟರ್, ಸಚಿವರಾದ ಈಶ್ವರ ಖಂಡ್ರೆ, ಶಿವಾನಂದ ಪಾಟೀಲ, ವಿವಿಧ ಪಕ್ಷಗಳ ಮಾಜಿ ಮಂತ್ರಿಗಳು, ಶಾಸಕರು, ಸಂಸದರು ಸೇರಿದಂತೆ ವಿವಿಧ ಪಕ್ಷಗಳ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಮಹರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ತಮಿಳನಾಡಿನ ಅನೇಕ ಮಠಾಧೀಶರು ಮತ್ತು ಧಾರವಾಡ, ಬಾಗಲಕೋಟೆ, ಗದಗ, ಹಾವೇರಿ, ಬೆಳಗಾವಿ, ವಿಜಯಪುರ, ದಾವಣಗೆರೆ ಸೇರಿದಂತೆ ರಾಜ್ಯದ ನಾನಾ ಜಿಲ್ಲೆಗಳಿಂದ ಅಪಾರ ಸಂಖ್ಯೆಯಲ್ಲಿ ಜನರು ಬರುವ ನಿರೀಕ್ಷೆ ಇದ್ದು, 25 ಸಾವಿರ ಆಸನಗಳ ವ್ಯವಸ್ಥೆ ಮಾಡಿದ್ದು, ಜನದಟ್ಟಣೆ ನೋಡಿಕೊಂಡು ಆಸನಗಳನ್ನು ಹೆಚ್ಚಿಸಲು ಯೋಜಿಸಲಾಗಿದೆ.ಆಯೋಜಕರೊಂದಿಗೆ ಸಭೆ ನಡೆಸಿರುವ ಹು-ಧಾ ಪೊಲೀಸ್ ಕಮಿಷನರೇಟ್‌ನ ಡಿಸಿಪಿ ಮಹಾನಿಂಗ ನಂದಗಾವಿ, ರವೀಶ ಸಿ.ಆರ್., ಮುಂಜಾಗ್ರತಾ ಕ್ರಮ, ವಾಹನಗಳ ಸಂಚಾರ, ಪಾರ್ಕಿಂಗ್ ಬಗ್ಗೆ ಸುದೀರ್ಘ ಚರ್ಚೆ ನಡೆಸಿ ಕೆಲವೊಂದಿಷ್ಟು ಪರಿಹಾರೋಪಾಯಗಳನ್ನು ತಿಳಿಸಿದ್ದಾರೆ.
200ಕ್ಕೂ ಹೆಚ್ಚು ಸ್ವಯಂ ಸೇವಕರು: ಏಕಕಾಲದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜನರು ಮೈದಾನದಲ್ಲಿ ಸೇರ್ಪಡೆಗೊಳ್ಳಲಿದ್ದಾರೆ. ಈ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಮುಂಜಾಗ್ರತಾ ಕ್ರಮವಹಿಸಲು ಮತ್ತು ವೇದಿಕೆ ನಿರ್ಹವಣೆ, ಊಟ, ಮೇಲ್ವಿಚಾರಣೆ ಹಿತದೃಷ್ಟಿಯಿಂದ 200 ಸ್ವಯಂ ಸೇವಕರನ್ನು ನೇಮಿಸಲಾಗಿದೆ.
ಸಮಾವೇಶದಲ್ಲಿ ಲಕ್ಷಾಂತರ ಜನರು ಪಾಲ್ಗೊಳ್ಳುವ ನಿರೀಕ್ಷೆ ಹೊಂದಿದ್ದು, ಊಟ, ಪಾರ್ಕಿಂಗ್‌ಗೆ ಪೂರಕ ವ್ಯವಸ್ಥೆಯನ್ನು ಮಾಡಲಾಗಿದೆ. ಸಮಾವೇಶದಲ್ಲಿ ಪಾಲ್ಗೊಳ್ಳುವ ಜನರ ಹಿತದೃಷ್ಟಿಯಿಂದ 200ಕ್ಕೂ ಹೆಚ್ಚು ಸ್ವಯಂ ಸೇವಕರನ್ನು ಸಹ ನೇಮಿಸಲಾಗಿದೆ ಎಂದು ಆಯೋಜಕರಾದ ಮಲ್ಲಿಕಾರ್ಜುನ ಸಾವಕಾರ ಹೇಳಿದರು.