ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ । ತಂಡವಾಗಿ ಧಾವಿಸಿದ ವಿದ್ಯಾರ್ಥಿಗಳು, ಜನರು । 55 ಕಿ.ಮೀ. ನಿರ್ಮಾಣ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ಕೋಲಾರ ಜಿಲ್ಲೆಯಲ್ಲಿ ನಡೆದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮವು ಹೊಸ ಇತಿಹಾಸ ಸೃಷ್ಟಿಸಿತು.
ಪೂರ್ವನಿಗದಿಯಂತೆ ಬೆಳಗಿನ ಅವಧಿಯಲ್ಲಿ ಮಾನವ ಸರಪಳಿ ಕಾರ್ಯವು ಮಾರ್ಗದುದ್ದಕ್ಕೂ ಯಶಸ್ವಿಯಾಗಿ ನೆರವೇರಿತು.ಶಾಲಾ ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು ತಂಡೋಪತಂಡವಾಗಿ ಆಗಮಿಸಿ ಪ್ರಜಾಪ್ರಭುತ್ವ ದಿನದ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗಿಯಾದರು. ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸುವ ಕಾರ್ಯಕ್ರಮಕ್ಕೆ ಕೈಜೋಡಿಸಿದರು.
ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಅಪರ ಜಿಲ್ಲಾಧಿಕಾರಿ ನಿರಂತರ ಸಭೆ ನಡೆಸಿ ಅಧಿಕಾರಿಗಳ ತಂಡ ರಚಿಸಿ ಅಚ್ಚುಕಟ್ಟಾಗಿ ಆಯೋಜನೆ ಮಾಡಿದ್ದ ಐತಿಹಾಸಿಕ ಮಾನವ ಸರಪಳಿಯಲ್ಲಿ ಜಿಲ್ಲೆಯ ಜನ ಪ್ರತಿನಿಧಿಗಳು, ಗಣ್ಯರು, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಎಲ್ಲಾ ಸಂಘ ಸಂಸ್ಥೆಗಳು ಪ್ರತಿನಿಧಿಗಳು, ಕಾರ್ಮಿಕರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಿದರು.
ಕೋಲಾರದ ಗಡಿ ಪ್ರಾರಂಭವಾಗುವ ಚೊಕ್ಕಂಡ ಹಳ್ಳಿ ಗ್ರಾಮದ ಬಳಿ ವೇದಿಕೆ ಕಾರ್ಯಕ್ರಮ ನಡೆಯಿತು.
ಈ ವೇಳೆ ಮಾತನಾಡಿ, ಜನಾಡಳಿತ ಜಾರಿಗೊಳಿಸಿದ ಪ್ರಜಾಪ್ರಭುತ್ವವು ಅತ್ಯಂತ ದೊಡ್ಡ ಶಕ್ತಿಯಾಗಿದೆ. ಎಲ್ಲರಿಗೂ ಸಮಾನವಾಗಿ ಬದುಕುವ ಸ್ವಾತಂತ್ರ್ಯದ ಹಕ್ಕನ್ನು ಸಂವಿಧಾನ ನೀಡಿದೆ ಎಂದು ಹೇಳಿದರು.
೨೫೦೦ ಕಿ.ಮೀ ಉದ್ದದ ಬೃಹತ್ ಮಾನವ ಸರಪಳಿ ಕಾರ್ಯಕ್ರಮಕ್ಕಾಗಿ ಲಕ್ಷಾಂತರ ಜನರು ಹೆಸರು ನೋಂದಾಯಿಸಿಕೊಂಡಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಸಹ ಸಾವಿರಾರು ಸಂಖ್ಯೆಯಲ್ಲಿ ಜನರು ನೋಂದಣಿ ಮಾಡಿಕೊಂಡಿದ್ದಾರೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಯಿತು.
ಗಮನ ಸೆಳೆದ ಕಲಾ ತಂಡಗಳು:
ಕೋಲಾರ ನಗರದ ಮೇಕ್ರಿ ವೃತ್ತದಲ್ಲಿ ನಂದಿ ಕೋಲು, ವಿರಾಗಾಸೆ ,ಗಾರುಡಿ ಗೊಂಬೆ, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾತಂಡಗಳು ಪಾಲ್ಗೊಂಡು ಹಬ್ಬದ ವಾತಾವರಣ ಸೃಷ್ಟಿಸಿದ್ದವು. ಸಂವಿಧಾನದ ಪೀಠಿಕೆ ಓದುವ ಕಾರ್ಯಕ್ರಮದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳು, ಸಾರ್ವಜನಿಕರು, ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಭಾಗಿಯಾಗಿದ್ದರು.