27ರಂದು ರಾಮನಗರದಲ್ಲಿ ಉಪವಾಸ ಸತ್ಯಾಗ್ರಹ

KannadaprabhaNewsNetwork |  
Published : Jul 25, 2026, 01:15 AM IST
24ಕೆಆರ್ ಎಂಎನ್ 1.ಜೆಪಿಜಿರಾಮನಗರ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ರಾಮನಗರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಶಿಕ್ಷಣದಲ್ಲಿ ಸುಧಾರಣೆ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನೈತಿಕ ಬೆಂಬಲ ಸೂಚಿಸಿ ಜುಲೈ 27ರಂದು ನಗರದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷರು ಹಾಗೂ ಜನ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು

ರಾಮನಗರ: ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ, ಶಿಕ್ಷಣದಲ್ಲಿ ಸುಧಾರಣೆ ಹಾಗೂ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನೈತಿಕ ಬೆಂಬಲ ಸೂಚಿಸಿ ಜುಲೈ 27ರಂದು ನಗರದಲ್ಲಿ ಉಪವಾಸ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಅಧ್ಯಕ್ಷರು ಹಾಗೂ ಜನ ಜಾಗೃತಿ ವೇದಿಕೆ ಅಧ್ಯಕ್ಷ ಕೆ.ಶೇಷಾದ್ರಿ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನ ಜಾಗೃತಿ ವೇದಿಕೆ ನೇತೃತ್ವದಲ್ಲಿ ಪಕ್ಷಾತೀತವಾಗಿ ಉಪವಾಸ ಸತ್ಯಾಗ್ರಹ ನಡೆಯುತ್ತಿದೆ. ಇದರಲ್ಲಿ ಪ್ರಗತಿಪರ ಚಿಂತಕರು, ಸಾಹಿತಿಗಳು, ನಗರಸಭೆ ಸದಸ್ಯರು, ವಿದ್ಯಾರ್ಥಿಗಳು ಸಂಘಟನೆಗಳು,ರೈತ,ದಲಿತ,ಕನ್ನಡ ಪರ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಅಂದು ನಗರದ ಹಳೇ ಬಸ್ ನಿಲ್ದಾಣದಲ್ಲಿ ಬೆಳಗ್ಗೆ 9ರಿಂದ ಸಂಜೆ 7 ಗಂಟೆವರೆಗೆ ಸಾಂಕೇತಿಕ ಉಪವಾಸ ಸತ್ಯಾಗ್ರಹ ನಡೆಯಲಿದೆ. ಸಂಜೆ 7 ಗಂಟೆಗೆ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿಯಿಂದ ವಾಟರ್ ಟ್ಯಾಂಕ್ ವೃತ್ತದವರೆಗೆ ಪಂಜಿನ ಮೆರವಣಿಗೆ ನಡೆಸುವ ಮೂಲಕ ವಿದ್ಯಾರ್ಥಿಗಳ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿ ವಿದ್ಯಾರ್ಥಿಗಳೊಂದಿಗೆ ನಾವುಗಳೂ ಇದ್ದೇವೆಂಬ ಸಂದೇಶ ರವಾನಿಸುತ್ತೇವೆ ಎಂದು ಹೇಳಿದರು.

ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕು:

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾದ ಕಾರಣ ದೇಶದಲ್ಲಿ 21 ವಿದ್ಯಾರ್ಥಿಗಳು ತಮ್ಮದಲ್ಲದ ತಪ್ಪಿಗೆ ಆತ್ಮಹತ್ಯೆ ಮಾಡಿಕೊಂಡರು. ಇದರಿಂದ ಆ ಕುಟುಂಬಗಳಲ್ಲಿ ಅನಾಥ ಪ್ರಜ್ಞೆ ಕಾಡುತ್ತಿದೆ. ಕಷ್ಟಪಟ್ಟು ವ್ಯಾಸಂಗ ಮಾಡಿದ್ದ ಲಕ್ಷಾಂತರ ವಿದ್ಯಾರ್ಥಿಗಳ ಬದುಕು ಮೂರಾಬಟ್ಟೆಯಾಗಿದೆ. ಪೋಷಕರು ಸಾಲದ ಸುಳಿಯಲ್ಲಿ ಸಿಲುಕುವಂತಾಗಿದೆ. ಇದರ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಉದ್ಧಟತನ ತೋರುತ್ತಿದ್ದಾರೆ. ಈ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾರವರು ಮೌನ ವಹಿಸಿರುವುದು ವಿದ್ಯಾರ್ಥಿಗಳಿಗೆ ಎಸಗುತ್ತಿರುವ ದ್ರೋಹ ಎಂದು ಟೀಕಿಸಿದರು.

ಇನ್ನು ಪರಿಸರ ವಾದಿ ಮತ್ತು ಶಿಕ್ಷಣ ತಜ್ಞರಾದ ಸೋನಂ ವಾಂಗ್ಚುಕ್ ದೇಶದ ಶಿಕ್ಷಣ ವ್ಯವಸ್ಥೆ ಸುಧಾರಣೆ ಆಗಬೇಕೆಂದು ಕೇಂದ್ರ ಸರ್ಕಾರದ ಗಮನ ಸೆಳೆಯಲು 26 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರ ಸತ್ಯಾಗ್ರಹಿಯ ಮನವೊಲಿಸುವ ಬದಲು ಬಲವಂತವಾಗಿ ಹೊತ್ತೊಯ್ದಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕು ಎಂದು ವಾಗ್ದಾಳಿ ನಡೆಸಿದರು.

ವಿದ್ಯಾರ್ಥಿಗಳ ಮೇಲಿನ ಹಲ್ಲೆ ಬರ್ಬರ ಕೃತ್ಯ :

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಹಾಗೂ ಶಿಕ್ಷಣ ವ್ಯವಸ್ಥೆ ಸುಧಾರಣೆ ಆಗಬೇಕೆಂಬ ಬೇಡಿಕೆ ಮುಂದಿಟ್ಟುಕೊಂಡು ವಿದ್ಯಾರ್ಥಿಗಳು ಒಂದು ತಿಂಗಳಿಂದ ಜಂತರ್ ಮಂತರ್ ನಲ್ಲಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದಾರೆ. ದೆಹಲಿ ಪೊಲೀಸರು ವಿದ್ಯಾರ್ಥಿ - ವಿದ್ಯಾರ್ಥಿನಿಯರ ಮೇಲೆ ಲಾಠಿ ಪ್ರಹಾರ ನಡೆಸಿ ಅನಾಗರಿಕರಂತೆ ವರ್ತಿಸಿದ್ದಾರೆ. ಹೆಲ್ಮೆಟ್ ಧರಿಸಿದ್ದ ಅನಧಿಕೃತ ಜನರು ಲಾಠಿ ಹಿಡಿದು ವಿದ್ಯಾರ್ಥಿಗಳ ಮೇಲೆ ಮನಬಂದಂತೆ ಹಲ್ಲೆ ನಡೆಸಿರುವುದು ಬರ್ಬರ ಕೃತ್ಯ ಎಂದು ಟೀಕಿಸಿದರು.

ಈ ಘಟನೆಯನ್ನು ದೇಶದ ಚಿಂತಕರು, ಸಿನಿಮಾ, ಕ್ರೀಡೆ, ಕಲಾ ರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರು, ವಿಪಕ್ಷ ನಾಯಕ ರಾಹುಲ್ ಗಾಂಧಿ, ತಮಿಳುನಾಡು ಮುಖ್ಯಮಂತ್ರಿ ವಿಜಯ್, ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಸಾಕ್ಷಿಪ್ರಜ್ಞೆ ಉಳ್ಳ ವರ್ಗದವರು ಖಂಡಿಸಿ, ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ಕೊಡುತ್ತಿದ್ದಾರೆ.

ಮಕ್ಕಳ ಭವಿಷ್ಯಕ್ಕಾಗಿ ನಡೆಯುತ್ತಿರುವ ಹೋರಾಟವನ್ನು ಬೆಂಬಲಿಸಿ ರಾಮನಗರದಲ್ಲಿಯೂ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಪ್ರಜಾಪ್ರಭುತ್ವ ವಾದಿಗಳು, ಪ್ರಗತಿಪರ ಸಂಘಟನೆಗಳು, ರೈತ,ದಲಿತ,ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಹೋರಾಟಕ್ಕೆ ನೈತಿಕ ಬೆಂಬಲ ವ್ಯಕ್ತಪಡಿಸುವಂತೆ ಕೆ.ಶೇಷಾದ್ರಿ ಮನವಿ ಮಾಡಿದರು.

ಸುದ್ದಿಗೋಷ್ಠಿಯಲ್ಲಿ ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ, ಸದಸ್ಯರಾದ ಫೈರೋಜ್ ಪಾಷ, ಅಜ್ಮತ್ ಉಲ್ಲಾ ಖಾನ್, ದೌಲತ್ ಷರೀಫ್, ನಿಜಾಮುದ್ದೀನ್ , ಮೋಯಿನ್ , ಮುತ್ತುರಾಜ್, ಸಮದ್ , ಗ್ಯಾಬ್ರಿಯಲ್ , ಪಾರ್ವತಮ್ಮ, ಆಯಿಷಾ ಬಾನು, ವಿಜಯ ಕುಮಾರಿ ಮತ್ತಿತರರು ಇದ್ದರು.

24ಕೆಆರ್ ಎಂಎನ್ 1.ಜೆಪಿಜಿ

ರಾಮನಗರ ನಗರಸಭೆ ಅಧ್ಯಕ್ಷ ಕೆ.ಶೇಷಾದ್ರಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊರಟಗೆರೆ ತಾಲೂಕಿಗೆ ಜಿಪಂ ಸಿಇಒ ದಿಢೀರ್ ಭೇಟಿ
ವೈದ್ಯಕೀಯ ಶಿಕ್ಷಣದಲ್ಲಿ ಸಂವಹನ ಕುರಿತ ಕಾರ್ಯಾಗಾರ