ಹಾವೇರಿ: ಕಬ್ಬು ಬೆಳೆಗಾರರು ಕೇಳುತ್ತಿರುವ ದರ ನೀಡಲು ಸಕ್ಕರೆ ಕಾರ್ಖಾನೆಗಳ ಮಾಲೀಕರು ಒಪ್ಪುತ್ತಿಲ್ಲ. ಹಾವೇರಿ ಮತ್ತು ಬೆಳಗಾವಿ ಜಿಲ್ಲೆಗಳ ಕಬ್ಬಿನ ಇಳುವರಿಯಲ್ಲಿ ವ್ಯತ್ಯಾಸವಿದ್ದು, ಅಲ್ಲಿನ ದರವನ್ನು ಇಲ್ಲಿನ ಕಾರ್ಖಾನೆಗಳು ನೀಡಲು ಸಾಧ್ಯವಿಲ್ಲ ಎನ್ನುತ್ತಿವೆ. ನಾನು ಸಕ್ಕರೆ ಸಚಿವನಷ್ಟೇ, ಕಬ್ಬಿನ ದರ ನಿಗದಿ ಮಾಡುವ ಅಧಿಕಾರ ನನ್ನ ಕೈಯಲ್ಲಿಲ್ಲ. ಈ ಕುರಿತು ಕೇಂದ್ರ ಸರ್ಕಾರವೇ ಸೂಕ್ತ ನಿರ್ಧಾರ ಕೈಗೊಳ್ಳಬೇಕಿದೆ ಎಂದು ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಹೇಳಿದರು.
ಕಬ್ಬಿನ ದರ ನಿಗದಿ ವಿಚಾರವಾಗಿ ಕೇಂದ್ರ ಸರ್ಕಾರದ ತಜ್ಞರ ತಂಡ ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ನಮ್ಮ ಅಭಿಪ್ರಾಯವನ್ನೂ ಪಡೆದುಕೊಂಡಿದೆ. ಆದರೆ, ಈವರೆಗೂ ತಜ್ಞರ ವರದಿ ಬಂದಿಲ್ಲ. ವರದಿ ನೀಡಲು ಇನ್ನೂ ಎಷ್ಟು ದಿನ ಬೇಕು ಎಂಬುದು ಗೊತ್ತಾಗುತ್ತಿಲ್ಲ. ಈಗಾಗಲೇ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು ಸಕ್ಕರೆ ಕಾರ್ಖಾನೆಗಳ ಮಾಲೀಕರ ಸಭೆ ನಡೆಸಿದ್ದಾರೆ. ಎಸ್‌ಎಪಿ ದರದ ಕುರಿತು ಮುಖ್ಯಮಂತ್ರಿಗಳು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದರು.
ರೈತರು ಮುತ್ತಿಗೆ ಹಾಕಬಹುದು ಎಂಬ ಭಯದಿಂದ ಸಕ್ಕರೆ ಕಾರ್ಖಾನೆಗಳ ಮಾಲೀಕರು ಸಭೆಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಮಾಲೀಕರು ಮುಂದೆ ಬರಬೇಕು. ದರ ನಿಗದಿ ವಿಚಾರದಲ್ಲಿ ಕೇಂದ್ರ ಸರ್ಕಾರದ ವರದಿ ಹಾಗೂ ಮುಖ್ಯಮಂತ್ರಿಗಳ ನಿರ್ಧಾರ ಮಹತ್ವದ್ದಾಗಿದೆ ಎಂದು ಹೇಳಿದರು.