ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದಲ್ಲಿ ಮಂಗಳವಾರ ಸುದ್ದಿಗಾರರ ಜತೆಗೆ ಮಾತನಾಡಿ, ನಾನು ಎಲ್ಲರನ್ನೂ ವಿಶ್ವಾಸಕ್ಕೆ ಪಡೆದೇ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಆದರೂ ಪಕ್ಷದ ಕೆಲ ನಾಯಕರು ನನ್ನ ವಿರುದ್ಧ ಬಹಿರಂಗವಾಗಿ ಮಾತನಾಡಿದ್ದಾರೆ. ಪಕ್ಷದ ಹಿರಿಯ ಮುಖಂಡರನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಆರೋಪ ಕೇಳಿಬಂದಿದೆ. ಆದರೆ ನಾನು ಅದನ್ನು ಒಪ್ಪುವುದಿಲ್ಲ. ಆ ಆರೋಪಗಳೆಲ್ಲ ಸುಳ್ಳು. ಎಲ್ಲರ ಅಭಿಪ್ರಾಯವನ್ನು ಆಲಿಸಿಯೇ ನಾನು ಕೆಲಸ ಮಾಡುತ್ತಿದ್ದೇನೆ ಎಂದರು.
ಪಕ್ಷದ ವರಿಷ್ಠರು ಎಲ್ಲರ ಜೊತೆ ಚರ್ಚಿಸಿ ಮತ್ತು ನನಗೆ ಕೆಲಸ ಮಾಡುವ ಸಾಮರ್ಥ್ಯವಿದೆ ಎಂಬುದನ್ನು ಅರಿತು ನನ್ನನ್ನು ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಿಯೋಜಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಎಂಬ ಕಾರಣಕ್ಕೆ ನನ್ನನ್ನು ಬಿಜೆಪಿ ರಾಜ್ಯಾಧ್ಯಕ್ಷನನ್ನಾಗಿ ಮಾಡಿಲ್ಲ. ಯಡಿಯೂರಪ್ಪ ಪುತ್ರ ಎಂಬುದಕ್ಕೆ ನನಗೆ ಹೆಮ್ಮೆಯಿದೆಯೇ ಹೊರತು, ಅಹಂಕಾರವಿಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದರು.ಕರ್ನಾಟಕವು ಬಿಜೆಪಿ ಪಾಲಿಗೆ ದಕ್ಷಿಣ ಭಾರತದ ಹೆಬ್ಬಾಗಿಲು. ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವುದೇ ನನ್ನ ಮುಂದಿರುವ ಏಕೈಕ ಗುರಿ. ಆ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದರು.