ಕನ್ನಡಪ್ರಭ ವಾರ್ತೆ ಮಂಗಳೂರು
ಬೆಂಗಳೂರಿಂದ ಕುಕ್ಕೆ ಸುಬ್ರಹ್ಯಣ್ಯಕ್ಕೆ ತೆರಳಲು ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಚನ್ನಪಟ್ಟಣಕ್ಕೆ ಏನೂ ಮಾಡಿಲ್ಲ ಎನ್ನುವ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿ, ಚನ್ನಪಟ್ಟಣಕ್ಕೆ ನಾನು ಏನು ಮಾಡಿದ್ದೇನೆ, ಏನು ಮಾಡಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿಗೇನು ಗೊತ್ತು? ನಾನು 1985ರಲ್ಲೇ ಅವರ ತಂದೆ ವಿರುದ್ಧ ಚುನಾವಣೆಗೆ ನಿಂತವನು. ಕುಮಾರಸ್ವಾಮಿ 1995ರ ಬಳಿಕ ಲೋಕಸಭಾ ಚುನಾವಣೆಗೆ ನಿಂತವರು. ದೊಡ್ಡವರು ಅಧಿಕಾರ ಅನುಭವಿಸಿದರೂ ಚನ್ನಪಟ್ಟಣದಲ್ಲಿ ಏನೂ ಅಭಿವೃದ್ಧಿ ಆಗಿಲ್ಲ ಎಂಬ ಭಾವನೆ ಅಲ್ಲಿನ ಜನರಲ್ಲಿದೆ. ಅಲ್ಲಿನ ಜನರಿಗೆ ಅಳಿಲು ಸೇವೆ ಮಾಡಬೇಕಿದೆ. ಹಿಂದೆ ಮಂತ್ರಿಯಾಗಿದ್ದಾಗ ಸೇವೆ ಮಾಡಿದ್ದೇನೆ. ಈಗ ಉತ್ತಮ ಸಮಯ ಒದಗಿ ಬಂದಿದೆ. ಸಣ್ಣ ಸಹಾಯ ಮಾಡೋಣ ಎಂದು ಕಾರ್ಯಪ್ರವೃತ್ತನಾಗಿದ್ದೇನೆ ಎಂದು ಹೇಳಿದರು.ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಡಿ.ಕೆ. ಸುರೇಶ್ ಅವರಿಗೆ ಆಸಕ್ತಿಯಿಲ್ಲ. ಜನರು ಸುರೇಶ್‌ಗೆ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೆ ಹೇಳಿದ್ದಾರೆ. ಆದರೆ ಅವರಿಗೆ ಪಕ್ಷದ ಕೆಲಸ ಮಾಡಬೇಕೆಂಬ ಆಸೆಯಿದೆ. ನಮ್ಮನ್ನು ನಂಬಿ ಚನ್ನಪಟ್ಟಣದ ಜನ 85 ಸಾವಿರ ಮತ ಕೊಟ್ಟಿದ್ದಾರೆ. ನಮ್ಮನ್ನು ನಂಬಿದ ಜನರ ಕೈ ಬಿಡುವುದಕ್ಕೆ ಆಗುವುದಿಲ್ಲ. ದೇವರಂಥ ಜನ ರಾಜ್ಯದಲ್ಲಿ ನಮಗೆ 136 ಸ್ಥಾನ ಗೆಲ್ಲಿಸಿ ಅಧಿಕಾರ ಕೊಟ್ಟಿದ್ದಾರೆ. ಅದನ್ನು ಜನರ ಅಭಿವೃದ್ಧಿಗೆ ವಿನಿಯೋಗಿಸಬೇಕಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಪಕ್ಷದಿಂದ ಉತ್ತರ ನೀಡುವ ಆಲೋಚನೆ ಇದೆಯೇ ಎಂದಾಗ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಜ್ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅವರನ್ನು ಭೇಟಿ ಮಾಡಿ ಅಥವಾ ಈ ಬಗ್ಗೆ ಮುಖ್ಯಮಂತ್ರಿಗಳನ್ನೇ ಕೇಳಿ ಎಂದು ಹೇಳಿದರು.
‘ತಮ್ಮ ಮೇಲಿನ ದ್ವೇಷದ ಕಾರಣಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಗಣಿಗಾರಿಕೆಗೆ ರಾಜ್ಯ ಸರ್ಕಾರ ಅನುಮತಿ ನೀಡುತ್ತಿಲ್ಲ’ ಎಂಬ ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ‘ಮೈನಿಂಗ್ ಬಗ್ಗೆ ಎಚ್‌ಡಿಕೆ ಅವರಿಗೆ ತಿಳುವಳಿಕೆ ಇದೆಯೋ ಇಲ್ಲವೋ ಗೊತ್ತಿಲ್ಲ. ನನಗಂತೂ ಆ ಬಗ್ಗೆ ಏನೂ ಗೊತ್ತಿಲ್ಲ’ ಎಂದರು.ಕುಕ್ಕೆ ಸುಬ್ರಹ್ನಣ್ಯ ಕ್ಷೇತ್ರಕ್ಕೆ ಭೇಟಿ ಬಗ್ಗೆ ಮಾತನಾಡಿ, ಬಹಳ ದಿನದಿಂದ ಸುಬ್ರಹ್ಮಣ್ಯಕ್ಕೆ ಹೋಗಬೇಕೆಂಬ ಆಸೆಯಿತ್ತು. ಆದ ಕಾರಣ ಕುಟುಂಬ ಸಮೇತ ಹೋಗುತ್ತಿದ್ದೇನೆ ಎಂದು ಹೇಳಿದರು.