2028ರ ಮದ್ದೂರು ವಿಧಾನಸಭಾ ಕ್ಷೇತ್ರದಿಂದ ನಾನೇ ಸ್ಪರ್ಧಿಸುವೆ : ಮಾಜಿ ಸಚಿವ ಡಿ.ಸಿ.ತಮ್ಮಣ್ಣ

KannadaprabhaNewsNetwork | Updated : Jan 20 2025, 01:09 PM IST

ಸಾರಾಂಶ

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರಿಗೆ 94 ವರ್ಷ ವಯಸ್ಸಾಗಿದೆ. ಆದರೂ ಸಹ ಅವರು ಮುಂದಿನ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಿಸಿಕೊಳ್ಳುತ್ತೇನೆ ಎಂದಿದ್ದಾರೆ. ಹೀಗಾಗಿ ನಾನು ಮತ್ತೆ ಏಕೆ ಚುನಾವಣೆಯಲ್ಲಿ ಸ್ಪರ್ಧಿಸಬಾರದು..?

 ಮದ್ದೂರು : ಮುಂದಿನ 2028ರ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ನಾನೇ ಸ್ಪರ್ಧೆ ಆಗುತ್ತೇನೆ ಎಂದು ಮಾಜಿ ಸಚಿವ ಡಿ.ಸಿ.ತಮ್ಮಣ್ಣ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ಹಲವರು ಡಿ.ಸಿ.ತಮ್ಮಣ್ಣವರಿಗೆ ವಯಸ್ಸಾಗಿದೆ. ಮುಂದೆ ಅವರು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಹೇಳಿಕೊಂಡು ಓಡಾಡುತ್ತಿದ್ದಾರೆ. ಚುನಾವಣೆಯಲ್ಲಿ ನಾನೇ ಎನ್​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತೇನೆ ಎಂದು ಓಡಾಡುತ್ತಿದ್ದಾರೆ ಎನ್ನುವ ಮೂಲಕ ಮನ್ಮುಲ್‌ ಮಾಜಿ ನಿರ್ದೇಶಕ ಎಸ್‌.ಪಿ.ಸ್ವಾಮಿ ವಿರುದ್ಧ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದರು.

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರಿಗೆ 94 ವರ್ಷ ವಯಸ್ಸಾಗಿದೆ. ಆದರೂ ಸಹ ಅವರು ಮುಂದಿನ ಚುನಾವಣೆಯಲ್ಲಿ ಸಕ್ರಿಯವಾಗಿ ತೊಡಿಸಿಕೊಳ್ಳುತ್ತೇನೆ ಎಂದಿದ್ದಾರೆ. ಹೀಗಾಗಿ ನಾನು ಮತ್ತೆ ಏಕೆ ಚುನಾವಣೆಯಲ್ಲಿ ಸ್ಪರ್ಧಿಸಬಾರದು ಎಂದು ಪ್ರಶ್ನಿಸಿದರು.

ನಾನು ಅಥವಾ ನನ್ನ ಕುಟುಂಬದಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಇಬ್ಬರು ವ್ಯಕ್ತಿಗಳಿದ್ದಾರೆ ಎನ್ನುವ ಮೂಲಕ ತಮ್ಮ ಮಕ್ಕಳನ್ನು ರಾಜಕೀಯಕ್ಕೆ ತಂದು ಚುನಾವಣೆಗೆ ಇಳಿಸುವ ಬಗ್ಗೆ ಸುಳಿವು ನೀಡಿದರು.

ನನ್ನ ಶಾಸಕ ಸ್ಥಾನದ ಮೂರು ಅವಧಿಯಲ್ಲಿ ಮದ್ದೂರು ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ದುಡಿದಿದ್ದೇನೆ. ಹೀಗಾಗಿ ನಾನು ರಾಜಕೀಯ ಬಿಟ್ಟು ಹೋಗುವುದಿಲ್ಲ, ದೇವರು ಉತ್ತಮ ಆರೋಗ್ಯ ಮತ್ತು ಆಯಸ್ಸನ್ನು ನೀಡಿದರೆ 2028ರ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವುದು ಖಚಿತ ಎಂದು ಸ್ಪಷ್ಟಪಡಿಸಿದರು.

ಈ ವೇಳೆ ಮಾಜಿ ಶಾಸಕ ಸುರೇಶ್ ಗೌಡ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿಳಿಯಪ್ಪ, ತಾಲೂಕು ಘಟಕದ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ಯುವ ಘಟಕದ ನಗರಕೆರೆ ಸಂದೀಪ, ಮುಖಂಡರಾದ ಕೆ.ಟಿ.ರಾಜಣ್ಣ, ಕೂಳಗೆರೆ ಶೇಖರ್ ಮತ್ತಿತರರು ಇದ್ದರು.

ಕ್ರೀಡಾ ಸಾಮಗ್ರಿಗಳ ವಿತರಣೆ

ಮದ್ದೂರು:  ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘ ಹಾಗೂ ಮನುಜ ಮತ ಸೇವಾ ಟ್ರಸ್ಟ್ ವತಿಯಿಂದ ಪಟ್ಟಣದ ಕಚೇರಿ ಆವರಣದಲ್ಲಿ ತಾಲೂಕಿನ ನವಿಲೇ ಸರ್ಕಾರಿ ಪ್ರೌಢಶಾಲೆಗೆ ಕ್ರೀಡಾ ಸಾಮಗ್ರಿಗಳನ್ನು ಮನುಜ ಮತ ಸೇವಾ ಟ್ರಸ್ಟ್ ಅಧ್ಯಕ್ಷರಾದ ಡಾ.ನಿಚ್ಚಲಾನಂದನಾಥ ಸ್ವಾಮೀಜಿ ವಿತರಣೆ ಮಾಡಿದರು.

ಬಳಿಕ ಮಾತನಾಡಿದ ಅವರು, ದಾನಿಗಳಿಂದ ಪಡೆದ ವಸ್ತುಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಂತೆ ಕಿವಿಮಾತು ತಿಳಿಸಿದರು.

ಈ ವೇಳೆ ಸ್ವಾಮಿ ವಿವೇಕಾನಂದ ಯುವ ಸಾಂಸ್ಕೃತಿಕ ಮತ್ತು ಕ್ರೀಡಾ ಸಂಘದ ಕಾರ್ಯದರ್ಶಿ ಲಾರ ಪ್ರಸನ್ನ, ಹೊಸಗಾವಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಶಿವರಾಂ, ನವಿಲೇ ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕ ಫಕ್ರುದ್ದೀನ್, ಶಿಕ್ಷಕರಾದ ಪ್ರಸನ್ನ ಸೇರಿದಂತೆ ಇತರರು ಹಾಜರಿದ್ದರು.

Share this article