ನಿಮ್ಮ ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ: ಡಿಕೆಶಿ

KannadaprabhaNewsNetwork |  
Published : Nov 01, 2026, 02:30 AM IST
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ | Kannada Prabha

ಸಾರಾಂಶ

ರೈತರ ಜಮೀನುಗಳು ಪೌತಿ ಖಾತೆ ಆಗಿಲ್ಲ. ಇ-ಸ್ವತ್ತು ಸೇರಿದಂತೆ ಹಲವು ಸಮಸ್ಯೆಗಳನ್ನು ನಾನೂ ಸ್ವತಃ ರೈತನಾಗಿ ಅರಿತಿದ್ದೇನೆ. ಹಾಗಾಗಿ ಪೋಡಿ, ಇ-ಸ್ವತ್ತು, ಇ-ಖಾತೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಮಾಡಿ ರೈತರ ಜಮೀನುಗಳನ್ನು ಸಂರಕ್ಷಿಸುವ ಮೂಲಕ ಅವರ ಕುಟುಂಬಕ್ಕೆ ಆಧಾರವಾಗಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ.

ಕನ್ನಡಪ್ರಭ ವಾರ್ತೆ ಮಂಡ್ಯ

ರೈತರ ಜಮೀನನ್ನು ರಕ್ಷಿಸಲು ಭೂಮಿ ಯೋಜನೆ ಮೂಲಕ ಆರನೇ ಗ್ಯಾರಂಟಿ ಯೋಜನೆಯನ್ನು ಜಾರಿಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭರವಸೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯ್ತಿ ವತಿಯಿಂದ ನಗರದ ಮಂಡ್ಯ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಡೆದ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮತ್ತು ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ರೈತರ ಜಮೀನುಗಳು ಪೌತಿ ಖಾತೆ ಆಗಿಲ್ಲ. ಇ-ಸ್ವತ್ತು ಸೇರಿದಂತೆ ಹಲವು ಸಮಸ್ಯೆಗಳನ್ನು ನಾನೂ ಸ್ವತಃ ರೈತನಾಗಿ ಅರಿತಿದ್ದೇನೆ. ಹಾಗಾಗಿ ಪೋಡಿ, ಇ-ಸ್ವತ್ತು, ಇ-ಖಾತೆ ಸೇರಿದಂತೆ ಅಗತ್ಯ ದಾಖಲೆಗಳನ್ನು ಮಾಡಿ ರೈತರ ಜಮೀನುಗಳನ್ನು ಸಂರಕ್ಷಿಸುವ ಮೂಲಕ ಅವರ ಕುಟುಂಬಕ್ಕೆ ಆಧಾರವಾಗಬೇಕು ಎಂದು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದರು.

ಜಿಲ್ಲೆಯ ಮಗ ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾದ ನಂತರ ಕರ್ನಾಟಕ ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಪಡೆಯಿತು. ಅಂತಹ ನಾಯಕನನ್ನು ಕೊಟ್ಟಿರುವ ಜಿಲ್ಲೆಯ ಜನರ ಹೃದಯ ಮೃದು ಎಂದು ತಿಳಿದಿದೆ. ಇಲ್ಲಿ ನಮಗೆ ಆರು ಶಾಸಕರನ್ನು ಕೊಡುವ ಮೂಲಕ ನಮಗೆ ಆಶೀರ್ವಾದ ಮಾಡಿದ್ದೀರಿ. ನಿಮ್ಮ ಪ್ರೀತಿಯನ್ನು ನಾನು ಎಂದಿಗೂ ಮರೆಯುವುದಿಲ್ಲ ಎಂದರು.

ಇಂದಿರಾಗಾಂಧಿ ಪುಣ್ಯಸ್ಮರಣೆ ದಿನದಂದೇ ನಾವು ಕಾಂಗ್ರೆಸ್ ಭವನಕ್ಕೆ ಶಂಕುಸ್ಥಾಪನೆ ಮಾಡಿದ್ದೇವೆ. ಅದೇ ರೀತಿ ೧೬೦೦ ಕೋಟಿಗೂ ಹೆಚ್ಚು ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ನಾನು ಹಿಂದೆ ಜಲ ಸಂಪನ್ಮೂಲ ಸಚಿವನಾಗಿದ್ದಾಗಲೇ ಕೆಆರ್‌ಎಸ್‌ನ ನಾಲಾ ಆಧುನೀಕರಣಕ್ಕೆ ಒತ್ತು ನೀಡಿದ್ದೆ. ನಿಮ್ಮ ಜಿಲ್ಲೆಯ ನಾಯಕರಿಗೆ ಜಲಸಂಪನ್ಮೂಲ ಖಾತೆ ನೀಡಿ ಅಭಿವೃದ್ಧಿಗೆ ಸಹಕಾರ ನೀಡಿದ್ದೇವೆ ಎಂದರು.

ಮೇಕೆದಾಟು ಯೋಜನೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ. ಶೀಘ್ರ ನಾವು ಅಗತ್ಯ ಕ್ರಮ ಕೈಗೊಳ್ಳುವ ಮೂಲಕ ನಮ್ಮ ನೀರು ನಮ್ಮ ಹಕ್ಕನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತೇವೆ. ಆ ಜವಾಬ್ದಾರಿಯನ್ನು ಚಲುವರಾಯಸ್ವಾಮಿ ಅವರಿಗೆ ವಹಿಸಿದ್ದೇವೆ ಎಂದರು.

ಸಮಾರಂಭದಲ್ಲಿ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್, ಕೃಷಿ ಸಚಿವ ಪಿ.ಎಂ.ನರೇಂದ್ರಸ್ವಾಮಿ, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಶಾಸಕರಾದ ಪಿ.ರವಿಕುಮಾರ್, ಕೆ.ಎಂ.ಉದಯ್, ರಮೇಶ್ ಬಂಡಿಸಿದ್ದೇಗೌಡ, ದಿನೇಶ್ ಗೂಳಿಗೌಡ, ಮೂಡಾ ಅಧ್ಯಕ್ಷ ಬಿ.ಪಿ.ಪ್ರಕಾಶ್ ಸೇರಿದಂತೆ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬು ಬೆಳೆಗಾರರ ಕಿಚ್ಚು ತೀವ್ರ
ಕರ್ನಾಟಕ ಬಂದ್‌ ಕರೆಗೆ ಜಮಖಂಡಿ ಸ್ತಬ್ಧ