ಅನವಶ್ಯಕವಾಗಿ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ, ಮುಂದೆಯೂ ಬಿಡುವುದಿಲ್ಲ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಮಾಜಿ ಸಚಿವ ಮುರುಗೇಶ್ ನಿರಾಣಿಗೆ ಎಚ್ಚರಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೆಂಗಳೂರು/ವಿಜಯಪುರ ‘ಅನವಶ್ಯಕವಾಗಿ ತಂಟೆಗೆ ಬಂದವರಿಗೆ ಹಿಂದೆಯೂ ಬಿಟ್ಟಿಲ್ಲ, ಮುಂದೆಯೂ ಬಿಡುವುದಿಲ್ಲ. ಅದರ ಕಹಿ ಅನುಭವ ಈ ಹಿಂದೆ ನಿನಗೆ ಆಗಿದೆ ಎನ್ನುವುದನ್ನು ನೆನಪಿಸುತ್ತೇನೆ’ ಎನ್ನುವ ಮೂಲಕ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಅವರು ಮಾಜಿ ಸಚಿವ ಮುರುಗೇಶ ನಿರಾಣಿ ಅವರಿಗೆ ಏಕವಚನದಲ್ಲಿಯೇ ಎಚ್ಚರಿಕೆ ನೀಡಿದ್ದಾರೆ.
‘ಬಾಗಲಕೋಟೆಯಲ್ಲಿ ಮುರುಗೇಶ ನಿರಾಣಿ ಮಾಡಿರುವ ಪತ್ರಿಕಾಗೋಷ್ಠಿ ಗಮನಿಸಿದ್ದೇನೆ. ಸಿದ್ದಾರ್ಥ ಟ್ರಸ್ಟ್ ಗೆ ಯಾವುದೇ ರಿಯಾಯಿತಿ ಇಲ್ಲದೆ ಸಿಎ ನಿವೇಶನ ನೀಡಿದ್ದರೂ, ಅನವಶ್ಯಕವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೆಸರನ್ನು ಎಳೆದು ತಂದು ಹಗರಣವಾಗಿದೆ ಎಂದು ಬಿಜೆಪಿ ಬಿಂಬಿಸುತ್ತಿರುವುದಕ್ಕೆ ಪ್ರತಿಯಾಗಿ ಪತ್ರಿಕಾಗೋಷ್ಠಿ ನಡೆಸಿದ್ದೇನೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಿಜೆಪಿ ನಾಯಕರು ಎಷ್ಟೆಷ್ಟು ಲಾಭ ಪಡೆದಿದ್ದಾರೆ ಎಂಬುದು ತಿಳಿಸುವದು ಮಾತ್ರ ನನ್ನ ಉದ್ದೇಶವಾಗಿತ್ತು. ಈ ವೇಳೆ ನಿರಾಣಿ ಅವರು ತಮ್ಮ ಶಿಕ್ಷಣ ಸಂಸ್ಥೆ ಮತ್ತು ಸಕ್ಕರೆ ಕಾರ್ಖಾನೆಗೆ ಪಡೆದಿರುವ ಲಾಭದ ಬಗ್ಗೆಯೂ ಮಾಹಿತಿ ನೀಡಿದ್ದೇನೆ’ ಎಂದು ಪಾಟೀಲ್ ಹೇಳಿದ್ದಾರೆ.‘ಈ ವೇಳೆ ‘ದನಕಾಯುವವನು’ ಎಂಬ ಶಬ್ದವನ್ನು ನಾನು ಎಲ್ಲಿಯೂ ಬಳಸಿಲ್ಲ ಮತ್ತು ಏಕವಚನದಲ್ಲೂ ಮಾತನಾಡಿಲ್ಲ. ಅಷ್ಟಕ್ಕೂ, ದನಕಾಯುವುದು ಗೌರವದ ಕಾಯಕ. ದನಕಾಯುವವರನ್ನು ನಾನು ಗೌರವಿಸುತ್ತೇನೆ. ನಿರಾಣಿ ತಾನಾಗಿಯೇ ‘ದನಕಾಯುವವ’ ಎಂದು ತಿಳಿದುಕೊಂಡು, ನನ್ನ ಹಾಗೂ ನನ್ನ ಸಂಸ್ಥೆ ಕುರಿತು ಏಕವಚನದಲ್ಲಿ ಕೆಟ್ಟ ಭಾಷೆ ಬಳಸಲಾಗಿದೆ. ನಾನು ವಿಜಯಪುರ ಜಿಲ್ಲೆಯವ. ಇಂಥಹ ಎಲ್ಲ ಭಾಷೆಗಳು ನನಗೂ ಬರುತ್ತವೆ. ಬಾಗಲಕೋಟೆಗೆ ಬಂದು ನಿನ್ನ ಭಾಷೆಯಲ್ಲಿಯೇ ನಿನ್ನ ಸತ್ಯಾಂಶವನ್ನು ಬಿಚ್ಚಿಡುತ್ತೇನೆ’ ಎಂದು ತಮ್ಮ ‘ಎಕ್ಸ್’ ಖಾತೆಯಲ್ಲಿ ಸಚಿವ ಪಾಟೀಲ್ ಹೇಳಿಕೊಂಡಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.