ಜೀತದಾಳುಗಳ ಗುರುತಿಸಿ ಸೌಲಭ್ಯ ಕಲ್ಪಿಸಿ: ನ್ಯಾಯಾಧೀಶ ರಾಜೇಶ್

KannadaprabhaNewsNetwork | Updated : Feb 12 2024, 03:44 PM IST
ಬಳ್ಳಾರಿ ಡಿಸಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಗೆ ಚಾಲನೆ ನೀಡಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಮಾತನಾಡಿದರು.  | Kannada Prabha

ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಹಾಗೂ ಸರ್ಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಅಧಿಕಾರಿಗಳ ಮತ್ತು ನಮ್ಮೆಲ್ಲರದ್ದಾಗಿದೆ.

ಬಳ್ಳಾರಿ: ಜೀತಕ್ಕಾಗಿ ವ್ಯಕ್ತಿ ಹಾಗೂ ಮಕ್ಕಳನ್ನು ದುಡಿಸಿಕೊಳ್ಳುವುದು ಅಮಾನವೀಯ ಮತ್ತು ಕ್ರಿಮಿನಲ್ ಅಪರಾಧವಾಗಿದ್ದು, ಜೀತ ಪದ್ಧತಿ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಮೂಲಕ ನಿರ್ಮೂಲನೆ ಅಗತ್ಯವಾಗಿದೆ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್. ಹೊಸಮನಿ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕಾರ್ಮಿಕ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಬಾಲಕಾರ್ಮಿಕ ಯೋಜನೆಯ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆ ಕಾರ್ಯಕ್ರಮವನ್ನು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

ಜೀತದಾಳುಗಳನ್ನು ಗುರುತಿಸಿ ಅವರಿಗೆ ಪುನರ್ವಸತಿ ಹಾಗೂ ಸರ್ಕಾರದ ಇತರ ಸೌಲಭ್ಯ ಒದಗಿಸುವ ಮೂಲಕ ಮುಖ್ಯವಾಹಿನಿಗೆ ತರುವ ಜವಾಬ್ದಾರಿ ಅಧಿಕಾರಿಗಳ ಮತ್ತು ನಮ್ಮೆಲ್ಲರದ್ದಾಗಿದೆ. 

ರಾಜ್ಯದಲ್ಲಿ ಈಗಲೂ ಜೀತಕಾರ್ಮಿಕ ಪದ್ಧತಿ ಪ್ರಕರಣಗಳು ಕಂಡುಬರುತ್ತಿವೆ. ಸಾರ್ವಜನಿಕರಲ್ಲಿ ಈ ಪದ್ಧತಿ ಕುರಿತು ಹೆಚ್ಚು ಅರಿವು ಮೂಡಿಸುವ ಕೆಲಸವಾಗಬೇಕಿದೆ. ಈ ನಿಟ್ಟಿನಲ್ಲಿ ಪ್ರತಿವರ್ಷ ಫೆ. 9ರಂದು ಜೀತ ಪದ್ಧತಿ ನಿರ್ಮೂಲನಾ ದಿನವನ್ನು ಆಚರಿಸಲಾಗುತ್ತದೆ ಎಂದರು.

ಎಡಿಸಿ ಮೊಹಮ್ಮದ್ ಝುಬೇರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾವಾರು ಜೀತ ಕಾರ್ಮಿಕರ ಮಾಹಿತಿಯನ್ನೊಳಗೊಂಡ ವರದಿಯನ್ನು ಬಿಡುಗಡೆ ಮಾಡಲಾಯಿತು.

ಜನಜಾಗೃತಿ ಜಾಥಾ: ಜೀತ ಪದ್ಧತಿ ದಿನಾಚರಣೆ ಅಂಗವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣದಿಂದ ಹಮ್ಮಿಕೊಂಡಿದ್ದ ಜನಜಾಗೃತಿ ಜಾಥಾಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್. ಹೊಸಮನಿ ಮತ್ತು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ಜತೆಗೂಡಿ ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.

ಜಾಥಾವು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಮರಳಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ತಲುಪಿತು. ಜಾಥಾದಲ್ಲಿ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ಜೀತ ಪದ್ಧತಿಯ ಕುರಿತು ಘೋಷವಾಕ್ಯಗಳನ್ನು ಕೂಗಿದರು.

ಕಾರ್ಮಿಕ ನಿರೀಕ್ಷಕರಾದ ಎಂ. ರವಿದಾಸ್, ಬಾಲಾ ಕಾರ್ಮಿಕ ಯೋಜನಾ ನಿರ್ದೇಶಕ ಮೌನೇಶ್ ಸೇರಿದಂತೆ ಜಿಲ್ಲಾಧಿಕಾರಿ ಕಚೇರಿಯ ಅಧಿಕಾರಿಗಳು, ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ, ಶಾಲಾ ಮಕ್ಕಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.