ಕನ್ನಡಪ್ರಭ ವಾರ್ತೆ ಉಡುಪಿ
ವಿಧಾನ ಪರಿಷತ್ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಂಚಾಯತ್ ರಾಜ್ ವ್ಯವಸ್ಥೆಯ ಅನುಭವವಿರುವ, ಸರಳ ವ್ಯಕ್ತಿತ್ವದ ರಾಜು ಪೂಜಾರಿ ಅವರನ್ನು ಅಭ್ಯರ್ಥಿಯಾಗಿ ಘೋಷಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಹಿನ್ನೆಲೆಯಲ್ಲಿ ಪಕ್ಷದ ಅಭ್ಯರ್ಥಿ ಜಯಗಳಿಸಿದ್ದಲ್ಲಿ ಅಭಿವೃದ್ಧಿಗೆ ಹೆಚ್ಚಿನ ಅನುದಾನವನ್ನು ತರುವ ಅವಕಾಶವಿದೆ. ಸ್ಥಳೀಯ ಸಂಸ್ಥೆಗಳಲ್ಲಿ ಶೇ.50ಕ್ಕಿಂತಲೂ ಹೆಚ್ಚು ಮಹಿಳಾ ಮತದಾರರಿದ್ದು ಸರ್ಕಾರದ ಸೌಲಭ್ಯಗಳನ್ನು ಪಡೆದಿದ್ದಾರೆ. ಈ ಹಿನ್ನಲೆಯಲ್ಲಿ ಮತದಾರರು ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುತ್ತಾರೆ ಎಂಬ ನಂಬಿಕೆಯಿದೆ ಎಂದು ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ್ ಭಂಡಾರಿ ಭರವಸೆ ವ್ಯಕ್ತಪಡಿಸಿದ್ದಾರೆ.ಅವರು ಗುರುವಾರ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಸಭೆಯಲ್ಲಿ ಮಾತನಾಡಿದರು.ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಮಾತನಾಡಿ, ಗ್ರಾಮ ಪಂಚಾಯಿತಿಗಳಲ್ಲಿ ಕಾಂಗ್ರೆಸ್ ಬೆಂಬಲಿಗರಿದ್ದು, ಕಾರ್ಯಕರ್ತರು ಪರಿಣಾಮಕಾರಿ ಕೆಲಸ ಮಾಡಿದಲ್ಲಿ ಬದಲಾವಣೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ಪಕ್ಷದ ವಿವಿಧ ಘಟಕಗಳು ಮತದಾರರನ್ನು ಸಂಪರ್ಕಿಸಿ ಸರ್ಕಾರದ ಸೌಲಭ್ಯಗಳ ಮಾಹಿತಿ ನೀಡಬೇಕು ಎಂದರು.
ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಪಕ್ಷದ ಮುಖಂಡರು ಮತದಾರರನ್ನು ನೇರವಾಗಿ ಸಂಪರ್ಕಿಸುತ್ತಿದ್ದಾರೆ. ಪಕ್ಷದ ಅಭ್ಯರ್ಥಿಪರ ಮತದಾರರಿಗೆ ಒಲವಿದೆ. ಈ ಹಿನ್ನೆಲೆಯಲ್ಲಿ ನಮ್ಮ ಅಭ್ಯರ್ಥಿ ಜಯಗಳಿಸುವ ಹೆಚ್ಚಿನ ಸಾಧ್ಯತೆಯಿದೆ ಎಂದು ಹೇಳಿದರು.ಸಭೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್, ಜಿಲ್ಲಾ ವಕ್ತಾರ ಭಾಸ್ಕರ್ ರಾವ್ ಕಿದಿಯೂರು, ವಿವಿಧ ಘಟಕಗಳ ಅಧ್ಯಕ್ಷ ಹರೀಶ್ ಕಿಣಿ, ಅಣ್ಣಯ್ಯ ಸೇರಿಗಾರ್, ಗೀತಾ ವಾಗ್ಳೆ, ಹರೀಶ್ ಶೆಟ್ಟಿ ಪಾಂಗಾಳ, ಸೌರಭ್ ಬಳ್ಳಾಲ್, ಸರ್ಪುದ್ದೀನ್ ಶೇಕ್, ಜಯರಾಮ್ ನಾಯ್ಕ, ಆನಂದ್ ಪೂಜಾರಿ, ಜಯಕುಮಾರ್, ನವೀನ್ ಶೆಟ್ಟಿ, ಶಶಿಧರ ಶೆಟ್ಟಿ ಎಳ್ಳೂರು, ರತ್ನಾಕರ್ ಪೂಜಾರಿ, ಕಿಶೋರ್ ಕುಮಾರ್ ಎರ್ಮಾಳ್, ರೋಶನ್ ಶೆಟ್ಟಿ ಉಪಸ್ಥಿತರಿದ್ದರು.