ಮೈಕ್ರೋ ಫೈನಾನ್ಸ್‌ನವರು ಆರ್‌ಬಿಐ ನಿಯಮ ಮೀರಿದರೆ ಕ್ರಮ: ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಎಚ್ಚರಿಕೆ

KannadaprabhaNewsNetwork |  
Published : Feb 05, 2025, 12:32 AM IST
ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಸಭೆ ನಡೆಯಿತು. | Kannada Prabha

ಸಾರಾಂಶ

ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರ ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50ರಷ್ಟು ಮಾತ್ರ ಸಾಲ ನೀಡಬೇಕು ಎಂದು ಡಿಸಿ ಕೆ. ಲಕ್ಷ್ಮೀಪ್ರಿಯಾ ತಿಳಿಸಿದರು.

ಕಾರವಾರ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೈಕ್ರೋ ಫೈನಾನ್ಸ್‌ಗಳು, ಲೇವಾದೇವಿ ವ್ಯವಹಾರಸ್ಥರು, ಫೈನಾನ್ಸ್ ಹಣಕಾಸು ಸಂಸ್ಥೆಗಳು ಭಾರತೀಯ ರಿಸರ್ವ್ ಬ್ಯಾಂಕ್‌ನ ಮಾರ್ಗಸೂಚಿ ಹಾಗೂ ನಿಯಮಗಳನ್ನು ಉಲ್ಲಂಘಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಎಚ್ಚರಿಕೆ ನೀಡಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ನಿಯಂತ್ರಣದ ಕುರಿತು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್‌ಗಳಲ್ಲಿ ಸಾಲ ಪಡೆದ ಗ್ರಾಹಕರಿಗೆ ಕಿರುಕುಳದಂಥ ಪ್ರಕರಣಗಳು ಅಧಿಕವಾಗಿವೆ. ಇದಕ್ಕೆಲ್ಲ ಕಾರಣ ಆರ್‌ಬಿಐ ಮಾರ್ಗಸೂಚಿಗಳು ಹಾಗೂ ನಿಯಮಗಳ ಪಾಲಿಸದೇ ಇರುವುದು ಮೇಲ್ನೋಟಕ್ಕೆ ಕಂಡುಬರುತ್ತದೆ ಎಂದರು.

ಸಾಲ ಕೊಡುವ ಮುನ್ನ ಸಾಲಗಾರರ ಕುಟುಂಬದ ಆದಾಯ ಸೇರಿದಂತೆ ಮತ್ತಿತರ ಪೂರ್ವಾಪರ ಪರಿಶೀಲನೆಯನ್ನು ಮಾಡಿ, ಅವರ ಆದಾಯದ ಶೇ. 50ರಷ್ಟು ಮಾತ್ರ ಸಾಲ ನೀಡಬೇಕು. ಆದರೆ ಅವರು ಸಾಲ ತೆಗೆದುಕೊಳ್ಳುವ ಸಾಮರ್ಥ್ಯ ನೋಡದೇ ಸಾಲವನ್ನು ನೀಡುತ್ತಿರುವುದು ಕಂಡುಬರುತ್ತಿದ್ದು , ಇದಕ್ಕೆ ಆಸ್ಪದ ನೀಡಬಾರದು. ಸಾಲ ನೀಡುವವರು ಹಾಗೂ ತೆಗೆದುಕೊಳ್ಳುವವರು ಇಬ್ಬರೂ ಆರ್ಥಿಕ ಶಿಸ್ತನ್ನು ಪಾಲಿಸಬೇಕು ಎಂದರು.

ಕಾನೂನನ್ನು ಉಲ್ಲಂಘಿಸಿ, ಸಾಲಗಾರರ ಮೇಲೆ ದೌರ್ಜನ್ಯ, ಅವರ ಗೌರವಕ್ಕೆ ಧಕ್ಕೆಯಾಗುವಂತೆ ಕೆಟ್ಟ ಪದಗಳಲ್ಲಿ ಬೈಯುವುದು, ಕರೆ ಮಾಡಿ ಬೆದರಿಸುವುದು, ದಬ್ಬಾಳಿಕೆ, ಕಿರುಕುಳ ನೀಡುವುದು ಮಾಡಿದ್ದಲ್ಲಿ ಅಂಥವರ ವಿರುದ್ಧ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಎಂ. ಮಾತನಾಡಿ, ಜಿಲ್ಲೆಯಲ್ಲಿ 201 ಮೈಕ್ರೋ ಫೈನಾನ್ಸ್ ಸಂಸ್ಥೆಗಳಿದ್ದು, ಹಳಿಯಾಳ, ಜೋಯಿಡಾ, ಮುಂಡಗೋಡ, ಸಿದ್ದಾಪುರ, ಬನವಾಸಿ ಭಾಗದಲ್ಲಿ ಮೀಟರ್ ಬಡ್ಡಿ ನಡೆಯುತ್ತಿದೆ. ಸಾಲ ನೀಡುವ ಮತ್ತು ವಸೂಲಿ ಮಾಡುವ ಕ್ರಮಗಳು ಸರಳವಾಗಿ ಆಗಬೇಕು. ಸಾಲ ವಸೂಲಾತಿಗಾಗಿ ಫೈನಾನ್ಸ್ ಕಂಪನಿಗಳು ಬೆಳಗ್ಗೆ 9 ಗಂಟೆಗೂ ಮುನ್ನ ಸಂಜೆ 6 ಗಂಟೆ ನಂತರ ಸಾಲಗಾರರ ಮನೆಗೆ ಹೋಗಬಾರದು.

ಯಾವುದೇ ರೀತಿಯ ದೌರ್ಜನ್ಯಗಳನ್ನು ನಡೆಸಬಾರದು. ಜಿಲ್ಲೆಯಲ್ಲಿ ಇದುವರೆಗೂ 7 ಪ್ರಕರಣ ದಾಖಲಿಸಿ ₹37 ಲಕ್ಷ ವಶಪಡಿಸಿಕೊಳ್ಳಲಾಗಿದ್ದು, ಸಾಲ ವಸೂಲಿಗಾಗಿ ಕ್ರಿಮಿನಲ್‌ಗಳನ್ನು ಬಳಸಿಕೊಂಡಲ್ಲಿ ಕಾನೂನು ಉಲ್ಲಂಘಿಸಿದ್ದಲ್ಲಿ ಅಂಥವರ ಮೇಲೆ ನಿರ್ದಾಕ್ಷಿಣ್ಯವಾಗಿ ಕಾನೂನಿನ ಕ್ರಮ ಕೈಗೊಳ್ಳಲಾಗುವುದು ಎಂದರು.ಹೆಚ್ಚುವರಿ ಪೊಲೀಸ್ ವರಿಷ್ಠ ಜಗದೀಶ್, ಲೀಡ್ ಬ್ಯಾಂಕ್ ಮೆನೇಜರ್ ಭಾರತಿ ವಸಂತ್, ಸಹಕಾರ ಇಲಾಖೆ ಸಹಾಯಕ ನಿಬಂಧಕ ಶ್ರೀನಿವಾಸ್ ಸಜ್ಜನ, ವಿವಿಧ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಮತ್ತಿತರರು ಇದ್ದರು.

PREV

Recommended Stories

ಖಾಸಗಿ ಸಂಘಟನೆಗಳಿಗೆ ನಿಷೇಧ ಹೇರಿದ್ದು ಜಗದೀಶ್‌ ಶೆಟ್ಟರ್‌ : ಪರಂ
ಕರ್ನಾಟಕಕ್ಕೆ ₹385 ಕೋಟಿ ಕೇಂದ್ರೀಯ ನೆರೆ ಪರಿಹಾರ