ಅಲ್ಪಸಂಖ್ಯಾತರಿಗೆ ಅನ್ಯಾಯವಾದರೆ ಆಯೋಗಕ್ಕೆ ದೂರು ನೀಡಿ: ಯು.ನಿಸಾರ್ ಅಹಮದ್

KannadaprabhaNewsNetwork |  
Published : Jul 05, 2026, 02:30 AM IST
ಬಳ್ಳಾರಿಯ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಜರುಗಿದ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅವರು ಅಧಿಕಾರಿಗಳ ಜೊತೆ ಚರ್ಚಿಸಿ, ಸೂಕ್ತ ಸೂಚನೆಗಳನ್ನು ನೀಡಿದರು.  | Kannada Prabha

ಸಾರಾಂಶ

ಆಯೋಗ ಸಿವಿಲ್ ನ್ಯಾಯಾಲಯದ ಅಧಿಕಾರವನ್ನು ಹೊಂದಿದೆ.

ಬಳ್ಳಾರಿ: ಶಿಕ್ಷಣ, ಮಹಿಳಾ ಸಬಲೀಕರಣ, ಯುವ ಸಬಲೀಕರಣ ಮತ್ತು ಸಾಮಾಜಿಕ ಪಿಡುಗುಗಳ ನಿರ್ಮೂಲನೆಗಾಗಿ ಆಯೋಗದಲ್ಲಿ ವಿಶೇಷ ಉಪಸಮಿತಿಗಳನ್ನು ರಚಿಸಲಾಗಿದ್ದು, ಇವುಗಳು ರಾಜ್ಯಾದ್ಯಂತ ಅಧ್ಯಯನ ನಡೆಸಿ ಸರ್ಕಾರಕ್ಕೆ ಸೂಕ್ತ ಶಿಫಾರಸುಗಳನ್ನು ಸಲ್ಲಿಸಲಿವೆ ಎಂದು ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಯು.ನಿಸಾರ್ ಅಹಮದ್ ಅವರು ಹೇಳಿದರು.

ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಯ್ದಿರಿಸಲು ಮತ್ತು ಅವರ ಹಿತಾಸಕ್ತಿಗಳನ್ನು ಕಾಪಾಡಲು ಆಯೋಗವು ಬದ್ಧವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಜನರಿಗೆ ಯಾವುದೇ ಇಲಾಖೆ ಅಥವಾ ಅಧಿಕಾರಿಗಳಿಂದ ಅನ್ಯಾಯವಾಗುತ್ತಿದ್ದರೆ ಅಥವಾ ನ್ಯಾಯಸಮ್ಮತವಾದ ಕೆಲಸಗಳು ಆಗದಿದ್ದರೆ ನೇರವಾಗಿ ಆಯೋಗಕ್ಕೆ ದೂರು ನೀಡಬಹುದು. ಆಯೋಗ ಸಿವಿಲ್ ನ್ಯಾಯಾಲಯದ ಅಧಿಕಾರವನ್ನು ಹೊಂದಿದೆ. ಸ್ವೀಕೃತವಾದ ದೂರುಗಳ ಆಧಾರದ ಮೇಲೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಮನ್ಸ್ ಜಾರಿ ಮಾಡುವ ಅಧಿಕಾರ ಆಯೋಗಕ್ಕಿದೆ. ಪ್ರತಿ ತಿಂಗಳು ಆಯೋಗದ ಕಚೇರಿಯಲ್ಲಿ ಇಂತಹ ಪ್ರಕರಣಗಳ ವಿಚಾರಣೆ ನಡೆಸಿ ಇತ್ಯರ್ಥಪಡಿಸಲಾಗುತ್ತಿದೆ ಎಂದರು.

ಬಳ್ಳಾರಿ ಜಿಲ್ಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಆಯೋಗಕ್ಕೆ ಯಾವುದೇ ದೂರುಗಳು ಸಲ್ಲಿಕೆಯಾಗದಿರುವ ಬಗ್ಗೆ ಅಧ್ಯಕ್ಷರು ಅಚ್ಚರಿ ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಯಾವುದೇ ಸಮಸ್ಯೆಗಳಿಲ್ಲ ಎಂದಲ್ಲ, ಬದಲಿಗೆ ಆಯೋಗದ ಅಧಿಕಾರ ಮತ್ತು ಕಾರ್ಯವೈಖರಿಯ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯ ಕೊರತೆಯಿರುವುದೇ ಇದಕ್ಕೆ ಕಾರಣ ಇರಬಹುದು ಎಂದು ಅವರು ಅಭಿಪ್ರಾಯಪಟ್ಟರು.

ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಅಧಿಕಾರಿಗಳು ಶಿಕ್ಷಣ, ವಸತಿ, ಆರೋಗ್ಯ ಸೇರಿದಂತೆ ಎಲ್ಲ ರಂಗಗಳಲ್ಲಿ ಅಲ್ಪಸಂಖ್ಯಾತರಿಗೆ ಸಿಗಬೇಕಾದ ಸೌಲಭ್ಯಗಳ ಪ್ರಗತಿಯನ್ನು ಪರಿಶೀಲಿಸಿ, ನ್ಯೂನತೆಗಳಿದ್ದರೆ ನೇರವಾಗಿ ಮುಖ್ಯಮಂತ್ರಿ ಹಾಗೂ ಮುಖ್ಯ ಕಾರ್ಯದರ್ಶಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಎಚ್ಚರಿಸಿದರು.

ಬಳ್ಳಾರಿ ಜಿಲ್ಲೆಯಲ್ಲಿ ಅಲ್ಪಸಂಖ್ಯಾತ ಸಮುದಾಯದ ಜನಸಂಖ್ಯೆ ಹೆಚ್ಚಿರುವ ಪ್ರದೇಶಗಳ ಮ್ಯಾಪಿಂಗ್ ಮತ್ತು ಜನಗಣತಿ ಸಮೀಕ್ಷೆ ನಡೆಸಬೇಕು. ಯಾವುದೇ ಒಂದು ಕುಟುಂಬವೂ ಈ ಸಮೀಕ್ಷೆಯಿಂದ ಹೊರಗುಳಿಯದಂತೆ ಕ್ರಮ ವಹಿಸಬೇಕು. ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಜಿಲ್ಲೆಯಲ್ಲಿರುವ 3 ರಿಂದ 6 ವರ್ಷದೊಳಗಿನ ಮಕ್ಕಳ ನಿಖರ ಮಾಹಿತಿ ಹಾಗೂ ಕಳೆದ ವರ್ಷ 6 ವರ್ಷ ಪೂರೈಸಿರುವ ಮಕ್ಕಳ ವಿವರಗಳನ್ನು ಪಡೆದುಕೊಳ್ಳಬೇಕು. ಶಾಲೆ ಮತ್ತು ಅಂಗನವಾಡಿಗಳಿಂದ ಹೊರಗುಳಿದಿರುವ ಮಕ್ಕಳನ್ನು ಪತ್ತೆ ಹಚ್ಚಿ, ಅವರನ್ನು ಮರಳಿ ಶಿಕ್ಷಣದ ಮುಖ್ಯವಾಹಿನಿಗೆ ತರಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಕ್ಷಣ ಇಲಾಖೆಗಳ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಪಸಂಖ್ಯಾತ ಕೊಳಗೇರಿಗಳ ಮ್ಯಾಪಿಂಗ್‌ಗೆ ಸೂಚನೆ:

ಜಿಲ್ಲೆಯಲ್ಲಿ ಅಲ್ಪಸಂಖ್ಯಾತರು ಹಾಗೂ ಹಿಂದುಳಿದ ವರ್ಗದವರು ವಾಸಿಸುವ ಕೊಳಗೇರಿ (ಸ್ಲಂ) ಪ್ರದೇಶಗಳಲ್ಲಿ ಮೂಲಭೂತ ಆರೋಗ್ಯ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಅಲ್ಪಸಂಖ್ಯಾತ ಕೊಳಗೇರಿಗಳನ್ನು ಗುರುತಿಸಿ, ಅಲ್ಲಿನ ಜನಸಂಖ್ಯೆಗೆ ಅನುಗುಣವಾಗಿ ನಮ್ಮ ಕ್ಲಿನಿಕ್, ಪ್ರಾಥಮಿಕ ಆರೋಗ್ಯ ಕೇಂದ್ರ ಅಥವಾ ಹೆರಿಗೆ ಆಸ್ಪತ್ರೆಗಳನ್ನು ಸ್ಥಾಪಿಸಲು ವರದಿ ಸಿದ್ಧಪಡಿಸುವಂತೆ ಆರೋಗ್ಯ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು.

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಬ್ಯಾಂಕ್ ಲೋನ್ ಗಳನ್ನು ನೀಡಬೇಕು. ಬೀದಿ ಬದಿ ವ್ಯಾಪಾರಸ್ಥರಿಗೆ ನೆರವು ನೀಡಬೇಕು. ಉದ್ಯೋಗಾಧಾರಿತ ಕೌಶಲ್ಯ ತರಬೇತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಡಿ. ಪೆನ್ನೇಕರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಮಹಾನಗರ ಪಾಲಿಕೆಯ ಆಯುಕ್ತ ಪಿ.ಎಸ್. ಮಂಜುನಾಥ್, ಆಯೋಗದ ಅಧ್ಯಕ್ಷರ ವಿಶೇಷ ಕರ್ತವ್ಯಾಧಿಕಾರಿ ಮುಜಿಬುಲ್ಲಾ ಜಫಾರಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ರಾಜು ಸೇರಿದಂತೆ ಜಿಲ್ಲಾ ಮಟ್ಟದ ಸಮಿತಿಯ ಸದಸ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಇದಕ್ಕೂ ಮುನ್ನ ಅಧ್ಯಕ್ಷರು, ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಅಲ್ಪಸಂಖ್ಯಾತರ ಕುಂದು ಕೊರತೆಗಳ ವಿಚಾರಣಾ ಸಭೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಕ್ತದಾನ ಶಿಬಿರ, ಶಿಕ್ಷಣ ಧನ ಸಹಾಯ ವಿತರಣೆ
ವಿಶ್ವಾಸಾರ್ಹ ಮುದ್ರಣ ಮಾಧ್ಯಮ: ಅಮ್ಮಾಟಂಡ ಎ. ಜೋಯಪ್ಪ