ಪರಿಸರ ನಾಶವಾದರೆ ಮನುಷ್ಯನಿಗೆ ಉಳಿಗಾಲವಿಲ್ಲ: ನ್ಯಾ. ಎಲ್. ನಾರಾಯಣಸ್ವಾಮಿ

KannadaprabhaNewsNetwork |  
Published : Jun 29, 2025, 01:33 AM IST
ವನಮಹೋತ್ಸವ | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ವೃದ್ಧಿಸುವ ನಿಟ್ಟಿನಲ್ಲಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಅರಣ್ಯ ಇಲಾಖೆಯಿಂದ ಪ್ರತಿ ವರ್ಷ ಸುಮಾರು 5 ಲಕ್ಷ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ.

ಕನ್ನಡಪ್ರಭ ವಾರ್ತೆ ತುಮಕೂರು

ಪರಿಸರ ನಾಶವಾದರೆ ನಮಗೆ ಉಳಿಗಾಲವಿಲ್ಲ. ಈ ನಿಟ್ಟಿನಲ್ಲಿ ಪರಿಸರ ಸಂರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಭಾರತದ ಲೋಕಪಾಲ್ ನ್ಯಾಯಾಂಗ ಸದಸ್ಯ, ಗೌರವಾನ್ವಿತ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಬೆಂಗಳೂರಿನ ಕರ್ನಾಟಕ ಲೋಕಾಯುಕ್ತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆಯ ಸಹಯೋಗದಲ್ಲಿ ಶನಿವಾರ ತುಮಕೂರು ತಾಲೂಕು ಬೆಳ್ಳಾವಿ ಹೋಬಳಿ ಬಳ್ಳಾಪುರ ಮೀಸಲು ಅರಣ್ಯ ಪ್ರದೇಶದಲ್ಲಿ ಏರ್ಪಡಿಸಿದ್ದ ‘ತಾಯಿಯ ಹೆಸರಿನಲ್ಲಿ ಒಂದು ಗಿಡ- ವನ ಮಹೋತ್ಸವ ಹಾಗೂ ಪರಿಸರ ಅರಿವು ಕಾರ್ಯಕ್ರಮ’ಕ್ಕೆ ಗಿಡ ನೆಡುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಹಳೆಯ ತಲೆಮಾರಿನವರು ನೆಟ್ಟ ಮರಗಳ ನೆರಳಿನಲ್ಲಿ ನಾವಿಂದು ಪ್ರಕೃತಿಯ ಸೌಂದರ್ಯವನ್ನು ಸವಿಯುತ್ತಿದ್ದೇವೆ. ಈ ಗಿಡ- ಮರಗಳಿಂದ ಪ್ರಾಣಿ- ಪಕ್ಷಿಗಳಿಗೆ ಆಹಾರ ದೊರೆಯುತ್ತಿದೆ. ಜನವಸತಿ ಪ್ರದೇಶಗಳ ವಿಸ್ತರಣೆಗಾಗಿ ಸಕಲ ಜೀವರಾಶಿಗಳ ಬದುಕಿಗೆ ಆಸರೆಯಾಗಿರುವ ಮರಗಳನ್ನು ಕಡಿದು ಹಾಕುತ್ತಿರುವುದು ಶೋಚನೀಯ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ವಿಜ್ಞಾನಿಗಳ ಅಭಿಪ್ರಾಯದಂತೆ ಒಂದು ದೊಡ್ಡ ಮರವು ಒಂದು ಚಿಕ್ಕ ಚೆಕ್ ಡ್ಯಾಂಗೆ ಸಮಾನ. ಮರದ ಬೇರುಗಳು ನೀರನ್ನು ಹಿಡಿದಿಟ್ಟುಕೊಳ್ಳುವುದರಿಂದ ಭೂಮಿ ತಂಪಾಗಿರುತ್ತದೆ ಎಂದ ಅವರು, ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಅರಣ್ಯ ಇಲಾಖೆಯಿಂದ ಪ್ರತಿ ವರ್ಷ ಲಕ್ಷಾಂತರ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ. ಈ ಗಿಡಗಳನ್ನು ಮರವಾಗಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಕರ್ನಾಟಕ ಉಪ ಲೋಕಾಯುಕ್ತ ಕೆ.ಎನ್. ಫಣೀಂದ್ರ ಅಧ್ಯಕ್ಷತೆ ವಹಿಸಿ ಮಾತನಾಡಿ, ಗಿಡ- ಮರಗಳನ್ನು ತಾಯಿಯಂತೆ ಪೋಷಿಸಿ ರಕ್ಷಿಸಬೇಕು. ಪ್ರತಿಯೊಬ್ಬರೂ ತಮ್ಮ ತಾಯಿಯ ಹೆಸರಿನಲ್ಲಿ ಒಂದೊಂದು ಗಿಡ ನೆಟ್ಟು ಪೋಷಿಸಬೇಕೆಂದು ಕರೆ ನೀಡಿದರು.

ಕರ್ನಾಟಕ ಉಪಲೋಕಾಯುಕ್ತ ನ್ಯಾ.ಬಿ. ವೀರಪ್ಪ ಮಾತನಾಡಿ, ಮನುಷ್ಯ ತನ್ನ ಸ್ವಾರ್ಥಕ್ಕಾಗಿ ಪರಿಸರವನ್ನು ನಾಶ ಮಾಡುತ್ತಿದ್ದಾನೆ. ಅಭಿವೃದ್ಧಿಯ ಹೆಸರಿನಲ್ಲಿ ಮರಗಳ ಮಾರಣ ಹೋಮವಾಗುತ್ತಿದೆ. ಇದರಿಂದ ಪ್ರಕೃತಿ ವಿಕೋಪಗಳು ಸಂಭವಿಸುತ್ತಿವೆ. ಪರಿಸರವನ್ನು ಉಳಿಸಿ- ಬೆಳೆಸುವಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾದುದು. ಪ್ರತಿಯೊಬ್ಬ ವಿದ್ಯಾರ್ಥಿಯೂ ಒಂದೊಂದು ಗಿಡ ನೆಡುವ ಮೂಲಕ ಪರಿಸರವನ್ನು ಸಂರಕ್ಷಿಸಲು ಮುಂದಾಗಬೇಕು ಎಂದು ಕಿವಿ ಮಾತು ಹೇಳಿದರು.

ಮಾಜಿ ಅಡ್ವೊಕೇಟ್ ಜನರಲ್ ಪ್ರೊ. ರವಿವರ್ಮ ಕುಮಾರ್ ಮಾತನಾಡಿ, ಶಾಲಾ ಮಕ್ಕಳು ಈಗಿನಿಂದಲೇ ತಮ್ಮ ಶಾಲೆಗಳಲ್ಲಿರುವ ಖಾಲಿ ಜಾಗದಲ್ಲಿ ಗಿಡ ನೆಟ್ಟು ಪ್ರತಿ ದಿನ ನೀರೆರೆದು ಮಗುವಂತೆ ಪೋಷಿಸಬೇಕು ಎಂದು ಅವರು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಹಿರಿಯೂರಿನ ವಾಣಿ ವಿಲಾಸ ಸಾಗರದ ಬಳಿ ಸಾವಿರಕ್ಕೂ ಹೆಚ್ಚು ಗಿಡ ನೆಟ್ಟು ಪ್ರಥಮ ಬಹುಮಾನ ಪಡೆದಿದ್ದ ನೆನಪುಗಳನ್ನು ಮೆಲುಕು ಹಾಕಿದರು.

ಜಿಲ್ಲಾಧಿಕಾರಿ ಶುಭಾ ಕಲ್ಯಾಣ್ ಮಾತನಾಡಿ, ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆ ಹಾಗೂ ಹಸಿರು ವಾತಾವರಣ ವೃದ್ಧಿಸುವ ನಿಟ್ಟಿನಲ್ಲಿ ಹಲವಾರು ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದ್ದು, ಅರಣ್ಯ ಇಲಾಖೆಯಿಂದ ಪ್ರತಿ ವರ್ಷ ಸುಮಾರು 5 ಲಕ್ಷ ಗಿಡಗಳನ್ನು ನೆಟ್ಟು ಪೋಷಿಸಲಾಗುತ್ತಿದೆ ಎಂದು ಹೇಳಿದರಲ್ಲದೆ ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಗಿಡ- ಮರಗಳನ್ನು ಬೆಳೆಸುವ ಮೂಲಕ ತುಮಕೂರನ್ನು ‘ಹಸಿರು ತುಮಕೂರ’ ನ್ನಾಗಿ ರೂಪಿಸಬೇಕೆಂಬ ಸಂಕಲ್ಪ ನಮ್ಮದಾಗಿದೆ ಎಂದು ಅವರು ತಿಳಿಸಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಎಚ್. ಅನುಪಮ ಪ್ರಾಸ್ತಾವಿಕವಾಗಿ ಮಾತನಾಡಿದರು. ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆಯ ಅಧ್ಯಕ್ಷ ಮೊಹಮ್ಮದ್ ತಬ್ರೇಜ್ ಆಲಂ ಶರೀಫ್, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಿ. ಜಯಂತ ಕುಮಾರ, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನೂರುನ್ನೀಸಾ, ಅಪರ ಜಿಲ್ಲಾಧಿಕಾರಿ ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜ಼ಮ್ ಜ಼ಮ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಗೋಪಾಲ್ ಹಾಗೂ ಎಂ.ಎಲ್.ಪುರುಷೋತ್ತಮ್, ತಹಸೀಲ್ದಾರ್ ರಾಜೇಶ್ವರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ