ಕನ್ನಡಪ್ರಭ ವಾರ್ತೆ ಮದ್ದೂರು
ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ, ಗೊರವನಹಳ್ಳಿ, ಚಾಮನಹಳ್ಳಿ ಹಾಗೂ ಸೋಮನಹಳ್ಳಿ ಗ್ರಾಮಗಳನ್ನು ಸೇರ್ಪಡೆ ಮಾಡಿರುವುದನ್ನು ವಿರೋಧಿಸಿ ಗ್ರಾಪಂ ಎದುರು ಕಳೆದ 50 ದಿನಗಳಿಂದ ನಿರಂತರವಾಗಿ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಜನಪ್ರತಿನಿಧಿಗಳು, ರೈತರು ಹಾಗೂ ಗ್ರಾಮಸ್ಥರಿಗೆ ರೈತ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ್, ರೈತ ಹಿತ ರಕ್ಷಣಾ ಸಮಿತಿ ಉಪಾಧ್ಯಕ್ಷ ಕೆ.ಬೋರಯ್ಯ, ಖಜಾಂಚಿ ಮುದ್ದೇಗೌಡ ಸೇರಿದಂತೆ ಹಲವು ಮುಖಂಡರು ಬೆಂಬಲ ಸೂಚಿಸಿ ಮಾತನಾಡಿದರು.
ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳನ್ನು ಸೇರ್ಪಡೆ ಮಾಡುವ ವಿಚಾರದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರಿಂದ ಸಾಧಕ-ಬಾಧಕಗಳ ಕುರಿತು ಚರ್ಚೆ ನಡೆಸದೆ ಏಕಪಕ್ಷಿಯ ನಿರ್ಧಾರ ಕೈಗೊಂಡಿರುವ ಈ ಜನಪ್ರತಿನಿಧಿಗಳಿಗೆ ಗ್ರಾಮದ ಜನರು ಕೊರಳಪಟ್ಟಿ ಹಿಡಿದು ಪ್ರಶ್ನಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.ನಂತರ ತಹಸೀಲ್ದಾರ್ ಪರಶುರಾಮ ಸತ್ತಿಗೇರಿ ಧರಣಿ ನಿರತರೊಂದಿಗೆ ಮಾತುಕತೆ ನಡೆಸಿದರು. ಈ ವೇಳೆ ಗ್ರಾಮಸ್ಥರು ಮದ್ದೂರು ನಗರಸಭೆ ವ್ಯಾಪ್ತಿಗೆ ಗೆಜ್ಜಲಗೆರೆ ಗ್ರಾಮ ಸೇರ್ಪಡೆಗೊಂಡ ನಂತರ ಯಾವುದೇ ಮೂಲಭೂತ ಸೌಲಭ್ಯ ದೊರಕುತ್ತಿಲ್ಲ. ಇ-ಸ್ವತ್ತು ಪಡೆಯಲು ತೊಂದರೆಯಾಗಿದೆ. ಹೀಗಾಗಿ ಗ್ರಾಪಂನಲ್ಲಿ ಎಲ್ಲಾ ಸೌಲಭ್ಯ ದೊರಕುವಂತೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಅಹವಾಲು ಸಲ್ಲಿಸಿದರು.
ಜಿಲ್ಲಾ ಪೊಲೀಸ್ ಹೆಚ್ಚುವರಿ ವರಿಷ್ಟಾಧಿಕಾರಿ ತಿಮ್ಮಯ್ಯ, ಡಿವೈಎಸ್ಪಿ ಯಶವಂತ ಕುಮಾರ್, ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.