ಎಪಿಎಲ್‌ಗೆ ವರ್ಗಾ ಆಗಿದ್ದರೆ ಪುನಃ ಬಿಪಿಎಲ್ ಕಾರ್ಡ್

KannadaprabhaNewsNetwork |  
Published : Oct 26, 2025, 02:00 AM IST
KH Muniyappa

ಸಾರಾಂಶ

ರಾಜ್ಯದಲ್ಲಿ ಪಡಿತರ ಕಾರ್ಡ್‌ಗಳ ಪರಿಷ್ಕರಣೆ ನಡೆಸಲಾಗುತ್ತಿದ್ದು, ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

 ಮೈಸೂರು :  ರಾಜ್ಯದಲ್ಲಿ ಪಡಿತರ ಕಾರ್ಡ್‌ಗಳ ಪರಿಷ್ಕರಣೆ ನಡೆಸಲಾಗುತ್ತಿದ್ದು, ಪರಿಷ್ಕರಣೆಯಲ್ಲಿ ಅರ್ಹರ ಕಾರ್ಡ್ ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆ ಆಗಿದ್ದಲ್ಲಿ ಎರಡು ದಿನಗಳಲ್ಲಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಾಗುವುದು ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ.

ನಗರದ ದಸರಾ ವಸ್ತು ಪ್ರದರ್ಶನ ಆವರಣದಲ್ಲಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸ್ಥಾಪಿಸಿರುವ ಆಹಾರ ಮಳಿಗೆಯನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಪಡಿತರ ಕಾರ್ಡ್‌ಗಳ ಪರಿಷ್ಕರಣೆ ನಡೆಸಲಾಗುತ್ತಿದ್ದು, ಅರ್ಹರು ಒಂದು ವೇಳೆ ಬಿಪಿಎಲ್‌ನಿಂದ ಎಪಿಎಲ್‌ಗೆ ವರ್ಗಾವಣೆಯಾಗಿದ್ದರೆ ಸಂಬಂಧಿಸಿದ ತಾಲೂಕಿನಲ್ಲಿ ತಹಸೀಲ್ದಾರರಿಗೆ ಭೇಟಿ ಮಾಡಿ ಮನವಿ ಸಲ್ಲಿಸಬೇಕು. ಅವರು ಪರಿಶೀಲನೆ ನಡೆಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲು ಕ್ರಮ ವಹಿಸಲಿದ್ದಾರೆ ಎಂದರು.

ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10 ಕೆ.ಜಿ. ಅಕ್ಕಿ

ಅನ್ನಭಾಗ್ಯ ಯೋಜನೆಯಡಿ ಅರ್ಹ ಪ್ರತಿ ಫಲಾನುಭವಿಗೆ 10 ಕೆ.ಜಿ. ಅಕ್ಕಿಯನ್ನು ವಿತರಣೆ ಮಾಡಲಾಗುತ್ತಿದೆ. ಮುಂದಿನ ತಿಂಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.ವಸ್ತು ಪ್ರದರ್ಶನ:

ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಯಾದ ಅನ್ನಭಾಗ್ಯ ಯೋಜನೆ ಕುರಿತು ವಸ್ತು ಪ್ರದರ್ಶನ ಏರ್ಪಡಿಸಲಾಗಿದ್ದು, ಹಳ್ಳಿಯ ಜೀವನ ಶೈಲಿಯ ಕುರಿತು ಪ್ರದರ್ಶನ ಮಾಡಲಾಗಿದೆ. ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ, ಜೋಳ, ರಾಗಿ ಕುರಿತು ಹಾಗೂ ಕಾನೂನು ಮಾಪನ ಶಾಸ್ತ್ರದ ಇಲಾಖೆಯ ತೂಕದ ಸಾಮಗ್ರಿಗಳ ಕುರಿತು ಪ್ರದರ್ಶನ ಏರ್ಪಡಿಸಲಾಗಿದೆ. ‘ಹಸಿವು ಮುಕ್ತ ಕರ್ನಾಟಕ’ ಸಂಕಲ್ಪದೊಂದಿಗೆ ಸಮೃದ್ಧ ಹಳ್ಳಿಯ ಚಿತ್ರಣವನ್ನು ಪ್ರದರ್ಶಿಸಲಾಗಿದೆ.

ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಸಚಿವ ಮುನಿಯಪ್ಪ ಅವರ ಆಪ್ತ ಕಾರ್ಯದರ್ಶಿ ಡಾ। ಎಚ್.ನಟರಾಜ್, ಜಿಲ್ಲಾ ಜಂಟಿ ಉಪ ನಿರ್ದೇಶಕ ಮಂಟೇಸ್ವಾಮಿ, ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

ಸರ್ಕಾರ ಸುಭದ್ರ:

ಕಾರ್ಯಕ್ರಮದ ಬಳಿಕ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಸಿಎಂ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ಸರ್ಕಾರ ಸುಭದ್ರವಾಗಿದೆ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಯವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ. ನಮ್ಮ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಿದ್ದು, ನಮ್ಮ ಸರ್ಕಾರ ನುಡಿದಂತೆ ನಡೆಯುತ್ತಿದೆ. ಸಚಿವ ಸಂಪುಟ ಪುನರ್ ರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದು ಕೆ.ಎಚ್‌.ಮುನಿಯಪ್ಪ ತಿಳಿಸಿದರು.

PREV
Read more Articles on

Recommended Stories

ಸ್ವಸ್ಥ ಶರದ್ ಋತು ಪ್ರಕೃತಿಯ ಲಯದಲ್ಲಿ ಸ್ವಸ್ಥತೆ ! ಶರದ್ ಋತುವಿನ ಆಹಾರ ಮತ್ತು ದಿನಚರ್ಯೆ
ನಟ ದರ್ಶನ್‌ಗೆ ಜೈಲಿನಲ್ಲಿ ಹರಿದ ಚಾದರ : ವಕೀಲರ ವಾದ