ಜೀತಪದ್ಧತಿ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ

KannadaprabhaNewsNetwork |  
Published : Feb 13, 2025, 12:45 AM IST
ಜೀತ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಬಳ್ಳಾರಿಯ ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಾಗಾರವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಕೆ.ಜಿ.ಶಾಂತಿ ಅವರು ಉದ್ಘಾಟಿಸಿದರು.  | Kannada Prabha

ಸಾರಾಂಶ

ಜೀತಪದ್ಧತಿ ಹೋಗಲಾಡಿಸಲು ಸಮುದಾಯದ ಸಹಕಾರ ನೀಡಬೇಕು

ಬಳ್ಳಾರಿ: ಜೀತ ಪದ್ಧತಿ ಕಂಡುಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು. ಜೀತಪದ್ಧತಿ ಹೋಗಲಾಡಿಸಲು ಸಮುದಾಯದ ಸಹಕಾರ ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಕೆ.ಜಿ.ಶಾಂತಿ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕಾರ್ಮಿಕ ಇಲಾಖೆ ವತಿಯಿಂದ ಜೀತ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಸಮಾಜದಲ್ಲಿ ಜೀತ ಪದ್ಧತಿ, ಮಾನವ ಕಳ್ಳ ಸಾಗಾಣಿಕೆ ಶಿಕ್ಷಾರ್ಹ ಅಪರಾಧವಾಗಿದ್ದು, ಇವುಗಳನ್ನು ಬುಡ ಸಮೇತ ಕಿತ್ತೊಗೆಯಲು ಇಲಾಖೆಗಳೊಂದಿಗೆ ಎಲ್ಲರ ಸಹಕಾರ ಅಗತ್ಯವಾಗಿದೆ. ಆರ್ಥಿಕ ಸ್ಥಿತಿ ಕಡಿಮೆಯಾದಾಗ ಜೀತ ಪದ್ಧತಿಯು ಉಲ್ಬಣಗೊಳ್ಳುತ್ತದೆ. ಪೂರ್ವಜರ ಕಾಲದಲ್ಲಿ ಜೀತ ಪದ್ದತಿಯು ಆಳವಾಗಿ ಬೇರೂರಿತ್ತು. ಸ್ವಾತಂತ್ರ್ಯ ನಂತರ ಗಣನೀಯವಾಗಿ ಕಡಿಮೆಯಾಗಿದೆ ಎಂದರು.

14 ವರ್ಷದೊಳಗಿನ ಮಕ್ಕಳನ್ನು ದುಡಿಮೆಗೆ ಬಳಸಿಕೊಳ್ಳುವುದು ಕಾನೂನುಬಾಹಿರವಾಗಿದೆ. ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಜೀತ ಪದ್ಧತಿ ಸಂಪೂರ್ಣ ನಿರ್ಮೂಲನೆ ಮಾಡಲು ಸಾಧ್ಯ. ಸಂವಿಧಾನವು ಪ್ರತಿಯೊಬ್ಬರಿಗೂ ಘನತೆಯಿಂದ ಬದುಕುವ ಹಕ್ಕು ನೀಡಿದೆ. ಸರ್ಕಾರವು ಶಿಕ್ಷಣ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡುತ್ತಿದೆ. ಇವುಗಳ ಸದ್ಬಳಕೆಯಾಗಬೇಕು ಎಂದು ಹೇಳಿದರು.

ಜೀತಪದ್ಧತಿ ನಿರ್ಮೂಲನೆಗಾಗಿಯೇ ವಿವಿಧ ಇಲಾಖೆಗಳ ಜೊತೆಗೂಡಿ ಟಾಸ್ಕ್ ಫೋರ್ಸ್ ರಚಿಸಲಾಗಿದೆ. ವಿದ್ಯಾರ್ಥಿಗಳು ಜೀತ ಪದ್ಧತಿಯ ನಿಷೇಧದ ಬಗ್ಗೆ ನಿಮ್ಮ ಸ್ನೇಹಿತರಿಗೂ ತಿಳಿಸಬೇಕು. ಮನೆಯ ಅಕ್ಕ-ಪಕ್ಕದ ನೆರೆಹೊರೆಯವರಿಗೂ ಮಾಹಿತಿ ಹಂಚಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಪ್ರಶಾಂತಕುಮಾರ್ ಮಿಶ್ರಾ ಅಧ್ಯಕ್ಷತೆ ವಹಿಸಿ ಮಾತನಾಡಿ, 14 ವರ್ಷದೊಳಗಿನ ಎಲ್ಲ ಮಕ್ಕಳು ಉಚಿತ ಮತ್ತು ಕಡ್ಡಾಯ ಶಿಕ್ಷಣ ಪಡೆಯಬೇಕು. ಜಿಲ್ಲೆಯಲ್ಲಿ ಜೀತ ಪದ್ಧತಿ ಇಲ್ಲ. ಅನಿರ್ದಿಷ್ಟ ವಲಯ ಹಾಗೂ ಇತರೆ ಕೈಗಾರಿಕಾ ವಲಯಗಳಲ್ಲಿ ಜೀತಪದ್ಧತಿ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಆಯೋಜಿಸಬೇಕು ಎಂದು ತಿಳಿಸಿದರು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ನಿಕಟಪೂರ್ವ ಸದಸ್ಯರಾದ ಎಚ್.ಸಿ. ರಾಘವೇಂದ್ರ ಜೀತ ಕಾರ್ಮಿಕ ಪದ್ಧತಿ ವಿರೋಧಿ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಜೇಶ್ ಎನ್.ಹೊಸಮನೆ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನಕುಮಾರ್, ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್, ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಮಕ್ಕಳು, ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಯಶವಂತಪುರದಿಂದ ಹೊರಡೋ ಈ ರೈಲಿನ ಮಾರ್ಗ ಬದಲಾವಣೆ
ಬೆಂಗಳೂರಿಗರೆ ಎಚ್ಚರ : ಇಲ್ಲಿನ ತರಕಾರಿಗಳು ಸೇಫ್ ಅಲ್ಲ..!