ಧಮ್ ಇದ್ರೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಬನ್ನಿ: ಸಿಎಂ ಸವಾಲ್‌

KannadaprabhaNewsNetwork |  
Published : Mar 04, 2024, 01:15 AM IST
ಚಿಕ್ಕಮಗಳೂರಿನಲ್ಲಿ ನಡೆದ ಗ್ಯಾರಂಟಿ ಸಮಾವೇಶ | Kannada Prabha

ಸಾರಾಂಶ

‘ನಿಮಗೆ ತಾಕತ್ತು, ಧಮ್ ಇದ್ರೆ ಒಂದೇ ವೇದಿಕೆಗೆ ಬನ್ನಿ, ನಾವು ಕೊಡ್ತಾ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡೋಣ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್‌ಗೆ ಸವಾಲ್ ಹಾಕಿದ್ದಾರೆ.

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

‘ನಿಮಗೆ ತಾಕತ್ತು, ಧಮ್ ಇದ್ರೆ ಒಂದೇ ವೇದಿಕೆಗೆ ಬನ್ನಿ, ನಾವು ಕೊಡ್ತಾ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡೋಣ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್‌ಗೆ ಸವಾಲ್ ಹಾಕಿದ್ದಾರೆ.

ಜಿಲ್ಲಾ ಆಟದ ಮೈದಾನದಲ್ಲಿ ಭಾನುವಾರ ನಡೆದ ಗ್ಯಾರಂಟಿ ಫಲಾನುಭವಿಗಳ ಸಮಾವೇಶದಲ್ಲಿ ಮಾತನಾಡಿ, ಅವರು ಹಿಂಬಾಗಿಲಿನಿಂದ ಅಧಿಕಾರಕ್ಕೆ ಬಂದವರು, ಹಾಗಾಗಿ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ ಎಂದು ಬಿಜೆಪಿಯನ್ನು ಛೇಡಿಸಿದರು.

ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವಲ್ಲಿ ನಾವು ವಿಫಲವಾಗಿದ್ದೇವೆ ಎಂದು ಸುಳ್ಳು ಹೇಳುವ ಬಿಜೆಪಿಗೆ ನಾಚಿಕೆಯಾಗಬೇಕು. ಸುಳ್ಳೇ ಬಿಜೆಪಿಯ ಮನೆ ದೇವರು ಎಂದು ಆಕ್ರೋಶ ವ್ಯಕ್ತಪಡಿಸಿದರು.

2008 ಹಾಗೂ 2018ರಲ್ಲಿ ರಾಜ್ಯದಲ್ಲಿ ಬಿಜೆಪಿ ಜನರ ಆಶೀರ್ವಾದದಿಂದ ಅಧಿಕಾರಕ್ಕೆ ಬಂದಿಲ್ಲ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸಿ ಅಧಿಕಾರಕ್ಕೆ ಬಂದಿತ್ತು. ರಾಜ್ಯದಲ್ಲಿ ಮೊದಲ ಬಾರಿಗೆ ‘ಆಪರೇಷನ್ ಕಮಲ’ ಜಾರಿಗೆ ತಂದಿದ್ದು ಬಿಜೆಪಿ ಎಂದು ಹೇಳಿದರು.

ನಮ್ಮ ಪಕ್ಷ ಘೋಷಣೆ ಮಾಡಿದ್ದ ಗ್ಯಾರಂಟಿ ಯೋಜನೆಗಳ ಬಗ್ಗೆ ಪ್ರಧಾನಿಯವರು ರಾಜಸ್ಥಾನದಲ್ಲಿ ಪ್ರಸ್ತಾಪ ಮಾಡಿ, ಇದು, ಸಾಧ್ಯವಿಲ್ಲ. ಅನುಷ್ಟಾನಕ್ಕೆ ಬಂದರೆ ರಾಜ್ಯ ದಿವಾಳಿಯಾಗಲಿದೆ ಎಂದಿದ್ದರು. ‘ಮಿಸ್ಟರ್ ಮೋದಿಜೀ, ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಐದೂ ಗ್ಯಾರಂಟಿಗಳನ್ನು ಅನುಷ್ಟಾನಕ್ಕೆ ತಂದಿದ್ದೇವೆ’ ಎಂದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ನಾಲ್ಕೂವರೆ ಕೋಟಿ ಫಲಾನುಭವಿಗಳನ್ನು ಬಿಜೆಪಿ ನಿರಂತರವಾಗಿ ಅವಮಾನಿಸುತ್ತಿದೆ. ಒಂದು ಕಡೆ ಅವಮಾನಿಸುತ್ತಲೇ ಮತ್ತೊಂದು ಕಡೆ ವಿಪರೀತ ಸುಳ್ಳುಗಳನ್ನು ಹೇಳುತ್ತಿದೆ ಎಂದರು.

ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಬಿಜೆಪಿ ಬೆಂಬಲಿಗರು ಇಲ್ಲವೇ ಸಿ.ಟಿ.ರವಿ?. ಈ ಪ್ರಶ್ನೆಗೆ ಬಹಿರಂಗವಾಗಿ ಉತ್ತರಿಸಿ. ಗ್ಯಾರಂಟಿ ಯೋಜನೆಗಳು ರಾಜ್ಯದ ಜನರ ಹಕ್ಕು. ಫಲಾನುಭವಿಗಳನ್ನು ಅವಮಾನಿಸುವುದನ್ನು ತಕ್ಷಣ ನಿಲ್ಲಿಸಿ ಎಂದು ಎಚ್ಚರಿಸಿದರು.

ಬಿಜೆಪಿ ಯಾವಾಗಲೂ ಕಾಂಗ್ರೆಸ್ ಮುಕ್ತ ಭಾರತ ಎನ್ನುತ್ತದೆ. ಆದರೆ, ಕಾಂಗ್ರೆಸ್, ಹಸಿವು ಮುಕ್ತ ಭಾರತ ನಿರ್ಮಿಸಲು ನಿರಂತರವಾಗಿ ಕೆಲಸ ಮಾಡುತ್ತಿದೆ. ನೀವು ಸ್ವತಂತ್ರ ಭಾರತದ ಇತಿಹಾಸ ನೋಡಿದರೆ ಹಸಿವು ಮುಕ್ತ ಭಾರತಕ್ಕಾಗಿ ಕಾಂಗ್ರೆಸ್ ಏನೆಲ್ಲಾ ಕಾರ್ಯಕ್ರಮಗಳನ್ನು ಜಾರಿ ಮಾಡಿತು ಎನ್ನುವ ಪಟ್ಟಿಯೇ ಸಿಗುತ್ತದೆ ಎಂದರು.

ಗ್ಯಾರಂಟಿ ನಿರಂತರ:

ಸರ್ಕಾರದ ಗ್ಯಾರಂಟಿಗಳು ಈ ಐದು ವರ್ಷದ ಅವಧಿ ಮಾತ್ರವಲ್ಲ, ಮುಂದಿನ ಬಾರಿಯೂ ನಮ್ಮ ಪಕ್ಷ ಮತ್ತೆ ಅಧಿಕಾರಕ್ಕೆ ಬರುತ್ತದೆ. ನಂತರದ ಅವಧಿಯಲ್ಲೂ ಅಧಿಕಾರದಲ್ಲಿರುತ್ತದೆ. ಹಾಗಾಗಿ ಈ ಗ್ಯಾರಂಟಿಗಳು ನಿರಂತರವಾಗಿ ಜಾರಿಯಲ್ಲಿರುತ್ತವೆ. ರಾಜ್ಯದಲ್ಲಿ ಬಡತನ ಇರುವವರೆಗೆ ಈ ಗ್ಯಾರಂಟಿಗಳು ಜಾರಿಯಲ್ಲಿರುತ್ತವೆ. ಮುಂದೆ ರಾಜ್ಯದಲ್ಲಿ ಯಾವತ್ತೂ ಕೂಡ ಬೇರೆ ಪಕ್ಷದವರು ಅಧಿಕಾರಕ್ಕೆ ಬರುವುದಿಲ್ಲ ಎಂದು ಭವಿಷ್ಯ ನುಡಿದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ