ಕನ್ನಡಪ್ರಭ ವಾರ್ತೆ ಚಾಮರಾಜನಗರ
ಭಾರತದ ಸಂವಿಧಾನದಲ್ಲಿ ಮಕ್ಕಳಿಗೆ ಶಿಕ್ಷಣದ ಹಕ್ಕು ನೀಡಿದ್ದು ಬಾಲ ನ್ಯಾಯ ಪಾಲನೆಯ ಕಾಯ್ದೆ ಪ್ರಕಾರ ಮಕ್ಕಳಿಗೆ ಬದುಕುವ, ರಕ್ಷಣೆ ಹೊಂದುವ, ಭಾಗವಹಿಸುವ, ವಿಕಾಸ ಹೊಂದುವ ಹಕ್ಕು ನೀಡಲಾಗಿದೆ. ಇದರ ಬಗ್ಗೆ ಪ್ರತಿಯೊಬ್ಬರು ಜಾಗೃತಿ ಹೊಂದಬೇಕು. ಮಕ್ಕಳ ಹಕ್ಕುಗಳ ಉಲ್ಲಂಘನೆಯಾದರೆ ತಕ್ಷಣ ಮಕ್ಕಳ ಸಹಾಯವಾಣಿ ೧೦೯೮ ಕರೆ ಮಾಡಿ ಮಕ್ಕಳ ರಕ್ಷಣೆಗೆ ಎಲ್ಲರೂ ಸಹಕರಿಸಬೇಕು ಎಂದರು.
ವಿದ್ಯಾರ್ಥಿಗಳು ಓದಿನ ಸಮಯದಲ್ಲಿ ವ್ಯಾಸಂಗಕ್ಕೆ ಹೆಚ್ಚು ಒತ್ತು ನೀಡಬೇಕು. ಭವಿಷ್ಯದಲ್ಲಿ ಉತ್ತಮ ಪ್ರಜೆಗಳಾಗಿ ಪೋಷಕರಿಗೆ, ಗುರು ಹಿರಿಯರಿಗೆ ಒಳ್ಳೆಯ ಹೆಸರು ತರಬೇಕು. ಮಕ್ಕಳ ರಕ್ಷಣೆಗಾಗಿ ಪೋಕ್ಸೋ ಕಾಯ್ದೆ ಜಾರಿಯಲ್ಲಿದ್ದು ಈ ಪ್ರಕಾರ ಮಕ್ಕಳನ್ನು ಲೈಂಗಿಕವಾಗಿ ಬಳಸಿ ಕೊಳ್ಳುವವರ ದೌರ್ಜನ್ಯ ಎಸಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದರು. ಬಾಲಕಾರ್ಮಿಕ ಪದ್ಧತಿ ಕಾಯ್ದೆ ಜಾರಿಯಲ್ಲಿದ್ದು ೧೮ ವರ್ಷದೊಳಗಿನ ಮಕ್ಕಳನ್ನು ಯಾವುದೇ ಕೆಲಸಕ್ಕೆ ಸೇರಿಸಿಕೊಳ್ಳಬಾರದೆಂದು ಕಾಯ್ದೆ ಹೇಳುತ್ತದೆ. ಬಾಲ್ಯವಿವಾಹ ಕಾಯ್ದೆ ಬಗ್ಗೆಯೂ ಸಹ ಪ್ರತಿಯೊಬ್ಬರು ಮಾಹಿತಿಯನ್ನು ಪಡೆಯಬೇಕು ಎಂದು ಅವರು ತಿಳಿಸಿದರು.ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿಯ ಯೋಜನಾ ನಿರ್ದೇಶಕ ಮಹೇಶ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ೨೦೧೬ರಲ್ಲಿ ತಿದ್ದುಪಡಿಯಾಗಿದೆ. ೧೮ ವರ್ಷದೊಳಗಿನ ಯಾವುದೇ ಮಕ್ಕಳನ್ನು ಅಪಾಯಕಾರಿ ದುಡಿಮೆಗೆ ಬಳಸಿಕೊಳ್ಳುವಂತಿಲ್ಲ. ಮಕ್ಕಳನ್ನು ನೇಮಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದ್ದು ೨೦,೦೦೦ ದಿಂದ ೫೦,೦೦೦ ರು.ವರೆಗೆ ದಂಡ ಹಾಗೂ ಜೈಲುವಾಸ ವಿಧಿಸಲು ಅವಕಾಶವಿದೆ ಎಂದರು.
ಆಸರೆ ಚಾರಿಟಬಲ್ ಟ್ರಸ್ಟ್ ಕಾರ್ಯದರ್ಶಿ ಟಿ.ಜೆ.ಸುರೇಶ್ ಮಾತನಾಡಿ, ಹೆಣ್ಣು ಮಕ್ಕಳು ಶಿಕ್ಷಣದ ಬಗ್ಗೆ ಹೆಚ್ಚು ಕಾಳಜಿ ನೀಡುವ ಮೂಲಕ ಪೋಷಕರು ತಮ್ಮ ಮೇಲೆ ಇಟ್ಟಿರುವ ನಂಬಿಕೆಯನ್ನು ಉಳಿಸಿಕೊಳ್ಳಬೇಕು. ಹೆಣ್ಣುಮಕ್ಕಳು ವಿದ್ಯಾವಂತರಾದರೆ ಅವರಲ್ಲಿ ಆತ್ಮವಿಶ್ವಾಸವೂ ಹೆಚ್ಚಾಗುತ್ತದೆ. ಹೆಣ್ಣು ಮಕ್ಕಳು ವಿದ್ಯಾವಂತರಾದರೆ ಇಡೀ ಕುಟುಂಬ ಶಿಕ್ಷಣ ಪಡೆಯುತ್ತದೆ. ಜೊತೆಗೆ ಕಾನೂನು ತಿಳಿದುಕೊಳ್ಳುವುದರಿಂದ ದೌರ್ಜನ್ಯಗಳನ್ನು ತಡೆಗಟ್ಟಬಹುದು ಎಂದರು.