ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಉಸ್ತುವಾರಿ ಸಮಿತಿ ಸಭೆಯಲ್ಲಿ ಅವರು ಮಾತನಾಡಿ, ಕೈಗಾರಿಕಾ ಪ್ರದೇಶದ ಅಭಿವೃದ್ಧಿಗಾಗಿ ಕಾಯ್ದಿರಿಸಿದ ಜಮೀನುಗಳನ್ನು ಖರೀದಿಸದಂತೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ತಿಳಿಸಿದರು.
ಆಟೋ ಕಾಂಪ್ಲೆಕ್ಸ್ ಪ್ರದೇಶದಲ್ಲಿ ಶುದ್ಧ ಕುಡಿಯುವ ನೀರನ್ನು ಪೂರೈಸಲು ಕೈಗಾರಿಕೋದ್ಯಮಿಗಳು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾಧಿಕಾರಿಗಳು ಈಗಾಗಲೇ ಮಹಾನಗರ ಪಾಲಿಕೆ ವತಿಯಿಂದ ಶುದ್ಧ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಅಗತ್ಯವಿದ್ದಲ್ಲಿ ಒಂದೆರೆಡು ನಲ್ಲಿಗಳನ್ನು ಅಳವಡಿಸಲು ಪಾಲಿಕೆಯ ಅಧಿಕಾರಿಗಳಿಗೆ ಸೂಚಿಸಲಾಗುವುದು. ಆದಾಗ್ಯೂ ಸರ್ಕಾರದ ವತಿಯಿಂದ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುತ್ತಿದ್ದು, ಅದರ ನಿರ್ವಹಣೆ ದೃಷ್ಟಿಯಿಂದ ಪಾಲಿಕೆಗೆ ನಿಯಮಾನುಸಾರ ಅಲ್ಪಮಟ್ಟಿನ ಹಣಪಾವತಿಸಿ ನೀರನ್ನು ಬಳಸಿಕೊಳ್ಳುವುದು ಸರಿಯಾದ ಕ್ರಮವಾಗಿದೆ ಎಂದರು.ಕೈಗಾರಿಕಾ ವಸಾಹತು ಪ್ರದೇಶದಲ್ಲಿ ನಿರ್ಮಿಸಲಾಗಿರುವ ಹಾಗೂ ನಿರ್ಮಾಣಗೊಂಡಿರುವ ಕಟ್ಟಡಗಳಲ್ಲಿ ಸಹಜವಾಗಿ ಮಳೆ ನೀರು ಸಂಗ್ರಹಿಸುವಂತೆ ಹಾಗೂ ಅಂತರ್ಜಲ ಹೆಚ್ಚಿಸುವಲ್ಲಿ ವಿಶೇಷ ಗಮನಹರಿಸಬೇಕು. ಅಗತ್ಯವಿದ್ದಲ್ಲಿ ಪರಿಣಿತ ಸಂಪನ್ಮೂಲ ವ್ಯಕ್ತಿಗಳನ್ನು ತರಬೇತಿಗಾಗಿ ಕಳುಹಿಸಬೇಕು ಎಂದು ಸೂಚನೆ ನೀಡಿದರು.
ಮಾಲಿನ್ಯ ನಿಯಂತ್ರಣಾಧಿಕಾರಿಗಳಿಗೆ ತಕ್ಷಣದ ನಿಯಂತ್ರಣ ಕ್ರಮಗಳನ್ನು ಕೈಗೊಂಡು ಮಾಹಿತಿ ನೀಡುವಂತೆ ಸೂಚಿಸಿದ ಅವರು, ಸ್ಥಳಕ್ಕೆ ಖುದ್ದು ಭೇಟಿ ನೀಡಿ, ಕಾರ್ಮಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಯಾರಿಗೂ ತೊಂದರೆಯಾಗದಂತೆ ಕ್ರಮವಹಿಸವಂತೆ ಜಿಲ್ಲಾಧಿಕಾರಿ ಸೂಚಿಸಿದರು.
ದೇವಕಾತಿಕೊಪ್ಪ ಕೈಗಾರಿಕಾ ಪ್ರದೇಶದಲ್ಲಿ 110 ಕೆ.ವಿ.ವಿದ್ಯುತ್ ಉಪಕೇಂದ್ರ ಸ್ಥಾಪಿಸುವ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದ ಅವರು, ಸೊರಬ ತಾಲೂಕು ಆನವಟ್ಟಿ ಸಮೀಪ ಬಾರಂಗಿಯಲ್ಲಿರುವ ಮೆ.ಬೆಸ್ಟಲರಿ ಇಂಡಸ್ಟ್ರೀಸ್‍ಗೆ ಸಮರ್ಪಕವಾಗಿ ವಿದ್ಯುತ್ ಸರಬರಾಜು ಮಾಡದಿರುವುದರಿಂದ ಘಟಕ ನಡೆಸುವುದು ಕಷ್ಟಸಾಧ್ಯವಾಗಿದೆ. ನಿರಂತರ ವಿದ್ಯುತ್ ಸರಬರಾಜು ಮಾಡಿಸುವಂತೆ ಮನವಿ ಸಲ್ಲಿಸಿರುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿ, ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಕ್ರಮವಹಿಸುವಂತೆ ಮೆಸ್ಕಾಂನ ಸೂಪರಿಂಟೆಂಡೆಂಟ್ ಇಂಜಿನಿಯರ್ ಅವರಿಗೆ ಸೂಚಿಸಿದರು.
ಭದ್ರಾವತಿ ನಗರಸಭೆ ವ್ಯಾಪ್ತಿಯ ಜೇಡಿಕಟ್ಟೆ ಕೈಗಾರಿಕಾ ಪ್ರದೇಶದಲ್ಲಿ ಸ್ಥಿರಾಸ್ತಿಗಳ ಮೌಲ್ಯ ನಿಗಧಿಪಡಿಸುವಲ್ಲಿ ನ್ಯೂನತೆಗಳಿದ್ದು, ಅದನ್ನು ಸರಿಪಡಿಸಿ, ಜನರಿಗೆ ಅನುಕೂಲವಾಗುವಂತೆ ಕ್ರಮ ಕೈಗೊಳ್ಳಲು ಜಿಲ್ಲಾ ನೋಂದಣಾಧಿಕಾರಿ ಗಿರೀಶ್ ಅವರಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಗಣೇಶ್, ಕೈಗಾರಿಕೆ ಮತ್ತು ವಾಣಿಜ್ಯ ಸಂಘದ ಅಧ್ಯಕ್ಷ ಗೋಪಿನಾಥ್, ರಮೇಶ್ ಹೆಗ್ಡೆ, ನೋಂದಣಾಧಿಕಾರಿ ಗಿರೀಶ್, ನಾರಾಯಣಪ್ಪ, ಸುರೇಶ್ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.