ಕನ್ನಡಪ್ರಭ ವಾರ್ತೆ ಬೆಂಗಳೂರು ಕಾನೂನು ಬಾಹಿರವಾಗಿ ಯಾವುದೇ ರೀತಿಯ ಗಣಿಗಾರಿಕೆಗೆ ಅವಕಾಶ ನೀಡುವುದಿಲ್ಲ. ಆದರೆ ಉಡುಪಿ ಜಿಲ್ಲೆಯ ಜನರಿಗೆ ಮರಳು ಮತ್ತು ಕೆಂಪು ಕಲ್ಲಿನ ಕೊರತೆಯಿಂದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಉಡುಪಿ ಜಿಲ್ಲೆಯ ವ್ಯಾಪ್ತಿಯಲ್ಲಿ ಮರಳು, ಕೆಂಪುಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಉಂಟಾಗಿರುವ ಸಮಸ್ಯೆಗಳ ಬಗ್ಗೆ ಗುರುವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಪರಿಸರ ಪ್ರಭಾವ ಮೌಲ್ಯ ಮಾಪನ ಪ್ರಾಧಿಕಾರ ಅನುಮತಿ ನೀಡಿದ ಬಳಿಕವೇ ಮರಳು ತೆಗೆಯಲು ಬ್ಲಾಕ್‌ಗಳಿಗೆ ಅನುಮತಿ ಪತ್ರ ದೊರೆಯುತ್ತದೆ. ಪ್ರಾಧಿಕಾರದ ಸಭೆ ತಿಂಗಳಿಗೊಮ್ಮೆ ನಡೆಯುವುದರಿಂದ ವಿಳಂಬವಾಗುತ್ತಿದೆ. ಈ ಪ್ರಕ್ರಿಯೆಗೆ ವೇಗ ನೀಡಬೇಕು ಎಂದು ಮುಖ್ಯಮಂತ್ರಿ ಅವರು ಪ್ರಾಧಿಕಾರದ ಆಯುಕ್ತರಿಗೆ ಸೂಚಿಸಿದರು. ಜಿಲ್ಲೆಯ ನಾನ್ ಸಿಆರ್‌ಝಡ್ ಪ್ರದೇಶದಲ್ಲಿ 39 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದೆ. ಅದರಲ್ಲಿ 9 ಬ್ಲಾಕ್‌ಗಳ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಇನ್ನೂ 30 ಮರಳು ಬ್ಲಾಕ್‌ಗಳಿಗೆ ಮರು ಹರಾಜು ಮಾಡಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಮಾಹಿತಿ ನೀಡಿದರು. * ಅಧಿಕಾರ ಡಿಸಿಗೆ ನೀಡಿ ಮರಳು ಗಣಿಗಾರಿಕೆಗೆ ಪರವಾನಗಿಯನ್ನು ಜಿಲ್ಲಾಧಿಕಾರಿಗಳ ಮೂಲಕ ನೀಡಬೇಕು. ಮನೆ ನಿರ್ಮಾಣಕ್ಕೆ ಅಗತ್ಯವಿರುವ ಸೈಜುಗಲ್ಲು ಗಣಿಗಾರಿಕೆ ಮಾಡಲು ಕಾಯ್ದೆಯ ಸರಳೀಕರಣ ಮಾಡಿ ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಬೇಕು ಎಂದು ಸಭೆಯಲ್ಲಿ ಜಿಲ್ಲೆಯ ಶಾಸಕರು ಮನವಿ ಮಾಡಿದರು. ಮನೆ ಕಟ್ಟಲು ಬಳಸುವ ಕೆಂಪುಕಲ್ಲಿ (ಲ್ಯಾಟರೈಟ್)ನ ಗಣಿಗಾರಿಕೆಗೆ 71 ಕಾರ್ಯಾದೇಶಗಳನ್ನು ಒಂದು ವರ್ಷದ ಅವಧಿಗೆ ನೀಡಲಾಗಿದೆ. ಕೆಂಪುಕಲ್ಲನ್ನು ಬಾಕ್ಸೈಟ್ ಖನಿಜ ಎಂದು ವಿಂಗಡಿಸಿರುವುದರಿಂದ, ಕರ್ನಾಟಕ ಉಪಖನಿಜ ರಿಯಾಯಿತಿ ತಿದ್ದುಪಡಿ ನಿಯಮದಂತೆ ಹೊಸತಾಗಿ ಕೆಂಪುಕಲ್ಲು ಗಣಿಗಾರಿಕೆಗೆ ಕಾರ್ಯಾದೇಶ ನಿಲ್ಲಿಸಲಾಗಿದೆ. ಆದ್ದರಿಂದ ಜಿಲ್ಲೆಯಲ್ಲಿ ಅಗತ್ಯವಿರುವ ಕೆಂಪುಕಲ್ಲು ಗಣಿಗಾರಿಕೆಗೆ ಕಾಯ್ದೆಗೆ ಪುನಃ ತಿದ್ದುಪಡಿ ಮಾಡಿ, ಅನುಮತಿ ನೀಡಬೇಕು ಎಂದೂ ಒತ್ತಾಯಿಸಿದರು. ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕಾರ್, ವಿಧಾನ ಪರಿಷತ್ ಸದಸ್ಯರಾದ ಕೋಟ ಶ್ರೀನಿವಾಸ ಪೂಜಾರಿ, ಮಂಜುನಾಥ ಭಂಡಾರಿ, ಶಾಸಕರಾದ ಸುರೇಶ್ ಶೆಟ್ಟಿ ಗುರ್ಮೆ, ಯಶ್ಪಾಲ್ ಸುವರ್ಣ, ಗುರುರಾಜ ಗಂಟಿಹೊಳೆ, ಕಿರಣ್ ಕುಮಾರ ಕೊಡ್ಗಿ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಡಿಸಿ ಡಾ.ವಿದ್ಯಾಕುಮಾರಿ, ಎಸ್ಪಿ ಡಾ.ಅರುಣ್, ಜಿಪಂ ಸಿಓಇ ಪ್ರಸನ್ನ ಎಚ್. ಮತ್ತು ರಾಜ್ಯಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಬಾಕ್ಸ್ ಜಿಲ್ಲಾಸ್ಪತ್ರೆ ಸಿಬ್ಬಂದಿಗೆ ವೇತನಕ್ಕೆ ಸಿಎಂ ಸೂಚನೆ ಉಡುಪಿ ಜಿಲ್ಲಾ ಆಸ್ಪತ್ರೆಯಲ್ಲಿ 9 ಡಯಾಲಿಸಿಸ್ ಯಂತ್ರಗಳು ಕೆಟ್ಟಿದೆ. ಒಂದೇ ಯಂತ್ರ ಕಾರ್ಯನಿರ್ವಹಿಸುತ್ತಿದೆ. ಅಲ್ಲಿನ ಸಿಬ್ಬಂದಿಗೆ 6 ತಿಂಗಳಿನಿಂದ ವೇತನ ಪಾವತಿಯಾಗಿಲ್ಲ ಎಂದು ಶಾಸಕರು ಗಮನ ಸೆಳೆದಾಗ, ಕೂಡಲೇ ವೇತನ ನೀಡುವಂತೆ ಸಿಎಂ ಅಧಿಕಾರಿಗಳಿಗೆ ಸೂಚಿಸಿದರು. ಫೋಟೋ ಃ ಸಿಎಂ ಸಭೆ ಉಡುಪಿ ಜಿಲ್ಲೆಯ ಮರಳು, ಕೆಂಪುಕಲ್ಲು ಸಮಸ್ಯೆಯ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ ನಡೆಯಿತು.