ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಲಾದ ಕಾರ್ಯಾಗಾರದಲ್ಲಿ ಜಿಪಂ ಸಿಇಒ ಸೋಮಶೇಖರ್ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವಿವಿಧ ಕಾರ್ಯಕ್ರಮಗಳ ಕುರಿತು, ಜಿಲ್ಲೆಯ ಮಾಧ್ಯಮ ಪ್ರತಿನಿಧಿಗಳಿಗೆ ಏರ್ಪಡಿಸಲಾದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು. ದೇಶದ ಅಭಿವೃದ್ಧಿ ಸೂಚ್ಯಂಕದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಗುಣಮಟ್ಟದ ಆರೋಗ್ಯ ಪ್ರಧಾನ ಎನಿಸುತ್ತದೆ. ಇಂತಹ ಆರೋಗ್ಯ ವ್ಯವಸ್ಥೆ ಸುಧಾರಣೆಗೆ ಮಾಧ್ಯಮಗಳ ಸಹಕಾರ ಅಗತ್ಯ ಎಂದರು.
ಆಶಾ, ನರ್ಸ್, ಆರೋಗ್ಯ ಕಾರ್ಯಕರ್ತರು ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಜಿಲ್ಲಾಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಜನರ ಜೀವನಾಡಿಗಳಾಗಿವೆ. ಇವುಗಳ ಹೊರತಾಗಿಯೂ ಆರೋಗ್ಯ ಇಲಾಖೆ ವತಿಯಿಂದ ಬಹಳಷ್ಟು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಿಲ್ಲೆಯಲ್ಲಿ ಗರ್ಭಿಣಿ ಹಾಗೂ ಬಾಣಂತಿಯರ ಆರೈಕೆ, ತಾಯಿ ಹಾಗೂ ಶಿಶು ಮರಣ ತಗ್ಗಿಸುವುದು, ಲಸಿಕಾಕರಣ, ಸಾಂಕ್ರಮಿಕ ಹಾಗೂ ಮಾರಕ ರೋಗಗಳ ತಡೆ ಮತ್ತು ನಿಯಂತ್ರಣ, ಶಾಲಾ ಮಕ್ಕಳ ಬೆಳವಣಿಗೆ ಹಾಗೂ ಆರೋಗ್ಯ ಬಗ್ಗೆಯೂ ನಿಗಾ ಇರಿಸಲಾಗಿದೆ. ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ತಜ್ಞ ವೈದ್ಯರ ತಂಡ ಅವಿರತವಾಗಿ ಕರ್ತವ್ಯ ನಿರ್ವಹಿಸುತ್ತಿದೆ. ಸೂಕ್ತ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಕೊರತೆಯ ನಡುವೆಯೂ ಸಾಧ್ಯವಾದಷ್ಟು ಉತ್ತಮವಾಗಿ ಕಾರ್ಯನಿರ್ವಹಿಸಲಾಗುತ್ತಿದೆ ಎಂದು ಸಿಇಓ ಎಸ್.ಜೆ. ಸೋಮಶೇಖರ್ ತಿಳಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ಮಾತನಾಡಿ, ಜಿಲ್ಲೆಯ ಮಾಧ್ಯಮಗಳು ಆರೋಗ್ಯ ಇಲಾಖೆಯ ಬಗ್ಗೆ ಸಕಾರತ್ಮಕ ಹಾಗೂ ನಕಾರಾತ್ಮ ವರದಿಗಳನ್ನು ಪ್ರಕಟ ಮಾಡುತ್ತಿವೆ. ಆರೋಗ್ಯ ಇಲಾಖೆಯ ಕಾರ್ಯವೈಖರಿ ಮೆಚ್ಚಿ, ಸಕಾರಾತ್ಮ ವರದಿಗಳು ಪ್ರಕಟವಾದಾಗ ಹೆಚ್ಚಿನ ಕೆಲಸ ನಿರ್ವಹಿಸಲು ಸ್ಪೂರ್ತಿ ದೊರೆಯುತ್ತದೆ. ನಕಾರಾತ್ಮ ವರದಿಗಳು ಪ್ರಕಟವಾದ ಎಚ್ಚತ್ತು, ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮ ಸೇವೆ ಒದಗಿಸಲು ಅವಕಾಶ ದೊರಕುತ್ತದೆ. ಈ ನಿಟ್ಟಿನಲ್ಲಿ ಜಿಲ್ಲೆಯ ಮಾಧ್ಯಮಗಳು ಇಲಾಖೆಯೊಂದಿಗೆ ಉತ್ತಮ ಬಾಂಧವ್ಯದೊಂದಿಗೆ ಕಾರ್ಯನಿರ್ವಹಿಸಬೇಕು. ಇಲಾಖೆ ಬಗ್ಗೆ ತಟಸ್ಥ ಮನೋಭಾವ ತಾಳಬಾರದು ಎಂದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಿನೇಶ್ ಬಿ ಗೌಡಗೆರೆ ಜಿಲ್ಲಾ ಆರ್.ಸಿ.ಹೆಚ್ ಅಧಿಕಾರಿ ಡಾ.ಅಭಿನವ್, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳಾದ ಡಾ.ಕಾಶಿ, ಡಾ.ಚಂದ್ರಶೇಖರ್ ಕಂಬಾಳಿ ಮಠ್, ಡಾ.ನಾಗರಾಜ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣಾ ನಾಯಕ್, ಸಹಾಯಕ ಆರೋಗ್ಯ ಶಿಕ್ಷಣಾಧಿಕಾರಿ ಮಂಜುನಾಥ್, ಮೂಗಪ್ಪ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಮಾಧ್ಯಮ ಪ್ರತಿನಿಧಿಗಳು ಉಪಸ್ಥಿತರಿದ್ದರು