ಕನ್ನಡಪ್ರಭ ವಾರ್ತೆ ಬೆಂಗಳೂರು
ಕಾಲಹರಣ ಮಾಡದೆ ರಾಜ್ಯ ಸರ್ಕಾರ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕು. ಇಲ್ಲದಿದ್ದರೆ ನೀವು ರಸ್ತೆಯಲ್ಲಿ ಓಡಾಡಲು ಕಠಿಣವಾದೀತು ಎಂದು ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಹೇಳಿದ್ದಾರೆ.ಮಂಗಳವಾರ ನಗರದ ಪುರಭವನದಲ್ಲಿ ಕರ್ನಾಟಕ ಮಾದಿಗ ಸಂಘಟನೆಗಳ ಒಕ್ಕೂಟದಿಂದ ಆಯೋಜಿಸಿದ್ದ ನ್ಯಾ. ನಾಗಮೋಹನ ದಾಸ್ ವರದಿ ಅನುಷ್ಠಾನ ಕುರಿತು ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ನ್ಯಾ. ನಾಗಮೋಹನ್ ದಾಸ್ ವರದಿಯಾಗಲಿ ಅಥವಾ ಮಾಜಿ ಸಚಿವ ಮಾಧುಸ್ವಾಮಿ ಅವರ ವರದಿಯಾದರೂ ಸರಿ, ಕೂಡಲೇ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಚುನಾವಣೆ ವೇಳೆ ಬಿಜೆಪಿ ವಿರುದ್ಧ ಕಾಂಗ್ರೆಸ್ ಅಪಪ್ರಚಾರ ಮಾಡಿತ್ತು. ಒಳ ಮೀಸಲಾತಿ ವಿಷಯದಲ್ಲಿ ಕೇಂದ್ರ ಸರ್ಕಾರ ಕಳೆದ ಸಾಲಿನಲ್ಲಿ ನ್ಯಾಯ ಕೊಡಿಸುವ ಕೆಲಸ ಮಾಡಿದೆ. ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡು, ಪಂಜಾಬ್ ಮುಂತಾದ ರಾಜ್ಯಗಳಲ್ಲಿ ಜಾರಿ ಆಗಿದೆ. ಆದರೆ, ಕರ್ನಾಟಕದಲ್ಲಿ ಜಾರಿಯಾಗಿಲ್ಲ ಎಂದು ಗೋವಿಂದ ಕಾರಜೋಳ ಹೇಳಿದರು.ಕಟ್ಟಕಡೆಯ ವ್ಯಕ್ತಿಗೂ ನ್ಯಾಯ: ಬಿವೈವಿ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮಾತನಾಡಿ, ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗಬೇಕು ಎಂಬ ನಿಲವು ಬಿಜೆಪಿಯದು. ದೀನ ದಯಾಳ್ ಉಪಾಧ್ಯಾಯರ ಅಂತ್ಯೋದಯದ ಚಿಂತನೆಯೂ ಇದೇ ಆಗಿದೆ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಶಕ್ತಿ ಸಿಗಬೇಕು. ನಮ್ಮ ಸಮಾಜದ ಮಕ್ಕಳಿಗೂ ನ್ಯಾಯ ಲಭಿಸಿ ಸಮಾಜದ ಮುಖ್ಯವಾಹಿನಿಗೆ ಬರಬೇಕು ಎಂಬ ಇಚ್ಛಾಶಕ್ತಿಯೊಂದಿಗೆ ಕಳೆದ 30 ವರ್ಷಗಳಿಂದ ಈ ಸಮುದಾಯ ಹೋರಾಟ ಮಾಡುತ್ತಿದೆ ಎಂದರು.ಸದಾಶಿವ ಆಯೋಗದ ಕಾರ್ಯನಿರ್ವಹಣೆಗೆ ಕಾಂಗ್ರೆಸ್ ಸರ್ಕಾರ ಹಣ ಕೊಟ್ಟಿರಲಿಲ್ಲ. ಅಗತ್ಯ ಮೊತ್ತವನ್ನು ನೀಡಿದ ಬಿ.ಎಸ್. ಯಡಿಯೂರಪ್ಪ ಅವರು, ಆಯೋಗ ಸರಿಯಾದ ದಿಕ್ಕಿನಲ್ಲಿ ಸಾಗಲು ಕಾರಣರಾದರು. ಹಿಂದಿನ ಬಿಜೆಪಿ ಸರ್ಕಾರ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾಳಜಿ ಇಟ್ಟುಕೊಂಡು ಈ ಸಮಾಜಕ್ಕೆ ನ್ಯಾಯ ಕೊಡಿಸಲು ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ ಎಂದು ವಿಜಯೇಂದ್ರ ವಿವರಿಸಿದರು.
ಕೇಂದ್ರದ ಮಾಜಿ ಸಚಿವ ಎ. ನಾರಾಯಣಸ್ವಾಮಿ, ಸಂಸದ ರಮೇಶ್ ಜಿಗಜಿಣಗಿ, ಶಾಸಕರಾದ ಬಸವರಾಜ ಮತ್ತಿಮಡು, ದುರ್ಯೋಧನ ಐಹೊಳೆ, ಎಸ್.ಆರ್.ವಿಶ್ವನಾಥ ಸೇರಿದಂತೆ ಇನ್ನಿತರರು ಕಾರ್ಯಾಗಾರದಲ್ಲಿ ಉಪಸ್ಥಿತರಿದ್ದರು.