ಕೊಪ್ಪಳ: ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಗ್ರಾಪಂಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ನೌಕರರಿಗೆ ಕನಿಷ್ಠ ವೇತನ ಜಾರಿಗೊಳಿಸುವುದು ಸೇರಿದಂತೆ ವಿವಿಧ ಪ್ರಮುಖ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಗ್ರಾಪಂ ನೌಕರರ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಪ್ರತಿಭಟನೆ ಜರುಗಿತು.
ಗ್ರಾಪಂ ನೌಕರರ ಕೆಲಸದ ಸ್ವರೂಪ ಹಾಗೂ ಜವಾಬ್ದಾರಿಗಳಿಗೆ ಅನುಗುಣವಾಗಿ ವೇತನ ನೀಡಬೇಕು. ಬಾಕಿ ಇರುವ ವೇತನ ಹಾಗೂ ಇತರೆ ಸೌಲಭ್ಯ ಕೂಡಲೇ ಬಿಡುಗಡೆ ಮಾಡಬೇಕು. ನೌಕರರಿಗೆ ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಸೌಲಭ್ಯ ಕಲ್ಪಿಸಬೇಕು. ಕೆಲಸದ ಸ್ಥಳದಲ್ಲಿ ಮೂಲಭೂತ ಸೌಲಭ್ಯಗಳು ಮತ್ತು ಸುರಕ್ಷಿತ ವಾತಾವರಣ ಒದಗಿಸಬೇಕು ಎಂದು ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ನೌಕರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ತಮ್ಮ ಬೇಡಿಕೆ ಸರ್ಕಾರ ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ತೀವ್ರಗೊಳಿಸಲಾಗುವುದು ಎಂದು ಸಂಘದ ಮುಖಂಡರು ಎಚ್ಚರಿಕೆ ನೀಡಿದರು.ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿ, ವಿವಿಧ ಗ್ರಾಪಂ ನೌಕರರು ಹಾಗೂ ಕಾರ್ಮಿಕರಿದ್ದರು.