ಉಡುಪಿ: ಹಿರಿಯ ನಾಗರಿಕರ ಕಲ್ಯಾಣಕ್ಕಾಗಿ ಸರ್ಕಾರವು ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪ್ರೇಮಮೂರ್ತಿ ಕೆ. ಹೇಳಿದರು.ಅವರು ಶನಿವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಎನ್.ಐ.ಸಿ ಹಾಲ್‌ನಲ್ಲಿ ಕೇಂದ್ರ ಸರ್ಕಾರದ ಸ್ಟೇಟ್ ಆಕ್ಷನ್ ಪ್ಲಾನ್ ಫಾರ್ ಸೀನಿಯರ್ ಸಿಟಿಜನ್ ಯೋಜನೆಯಡಿ ಹಿರಿಯ ನಾಗರಿಕರಿಗೆ ವಿವಿಧ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಹಿರಿಯ ನಾಗರಿಕರ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ವಯೋಮಾನಕ್ಕೆ ಅನುಗುಣವಾದ ಸುರಕ್ಷಿತ ಚಟುವಟಿಕೆಗಳನ್ನು ಆಯೋಜಿಸಬೇಕು. ಕಾರ್ಯಕ್ರಮ ನಡೆಯುವ ಸ್ಥಳಗಳಲ್ಲಿ ಕುಡಿಯುವ ನೀರು, ಶೌಚಾಲಯ, ಪ್ರಥಮ ಚಿಕಿತ್ಸೆ ಸೇರಿದಂತೆ ಅಗತ್ಯ ಸುರಕ್ಷತಾ ವ್ಯವಸ್ಥೆಗಳನ್ನು ಕಲ್ಪಿಸಬೇಕು ಎಂದರು.
ಹಿರಿಯ ನಾಗರಿಕರು ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ವೃದ್ಧಾಶ್ರಮಗಳಲ್ಲಿ ಕ್ರಿಯಾಶೀಲರಾಗಿರುವ ಹಿರಿಯ ನಾಗರಿಕರನ್ನು ಸಹ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಮಾಡಬೇಕು ಎಂದ ಅವರು, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು, ಹಿರಿಯ ನಾಗರಿಕರ ಸಂಘಗಳು, ಸ್ವಯಂಸೇವಾ ಸಂಸ್ಥೆಗಳು ಕಾರ್ಯಕ್ರಮಗಳ ಕುರಿತು ಹೆಚ್ಚಿನ ಪ್ರಚಾರ ಕೈಗೊಳ್ಳುವುದರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನೋಂದಣಿ ಮಾಡಿಕೊಳ್ಳುವಂತೆ ನೋಡಿಕೊಳ್ಳಬೇಕು ಎಂದರು.ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ರೆಡ್‌ಕ್ರಾಸ್ ಕಾರ್ಯದರ್ಶಿ ಗಣನಾಥ ಶೆಟ್ಟಿ ಎಕ್ಕಾರು, ಲೀಡ್ ಕಾಲೇಜು ಪ್ರಾಂಶುಪಾಲೆ ಡಾ. ನಿಕೇತನಾ, ಹಿರಿಯ ನಾಗರಿಕರ ಜಿಲ್ಲಾ ಒಕ್ಕೂಟದ ಅಧ್ಯಕ್ಷ ವಿಶ್ವನಾಥ ಹೆಗಡೆ, ಹಿರಿಯ ನಾಗರಿಕರ ಸಹಾಯವಾಣಿ ಕೇಂದ್ರದ ಕಾರ್ಯದರ್ಶಿ ಮಮತಾ ಶೆಟ್ಟಿ, ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.