ಕನ್ನಡಪ್ರಭ ವಾರ್ತೆ ಬಸವನಬಾಗೇವಾಡಿ
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪ್ರಮುಖ ಬೇಡಿಕೆಗಳಾದ ಏಳನೇ ವೇತನ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದು, ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರುಜಾರಿಗೊಳಿಸುವುದು, ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಎಂದು ಆಗ್ರಹಿಸಿ ತಾಲೂಕು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ನೇತೃತ್ವದಲ್ಲಿ ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಮುಖಾಂತರ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಿವಾನಂದ ಮಂಗಾನವರ ಮಾತನಾಡಿ, ರಾಜ್ಯದಲ್ಲಿ ೨.೬೦ ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸರ್ಕಾರವು ಜನಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯ ಮಾಡಿದೆ. ರಾಜ್ಯದ ಅಭಿವೃದ್ಧಿ ಸೂಚ್ಯಂಕದ ಬೆಳವಣಿಗೆಯಲ್ಲಿ ಹಾಗೂ ಜಿಎಸ್‌ಟಿ ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ ಎಂದರು.ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳಾದ ರಾಜ್ಯ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಸರ್ಕಾರ ಆದೇಶ ಹೊರಡಿಸಬೇಕು. ನೂತನ ಪಿಂಚಣಿ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆಯನ್ನು ಮರುಸ್ಥಾಪಿಸುವ ಸಲುವಾಗಿ ಹಿಂದಿನ ಸರ್ಕಾರ ಇತರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿ ವರದಿ ನೀಡಲು ಸರ್ಕಾರ ಸಮಿತಿ ರಚಿಸಿತ್ತು. ಇದುವರೆಗೂ ಸಮಿತಿ ಒಂದು ಸಭೆಯನ್ನೂ ನಡೆಸಿಲ್ಲ ಎಂದು ದೂರಿದರು.ರಾಜ್ಯದ ಎನ್‌ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟಕರವಾಗಿದೆ. ಎನ್‌ಪಿಎಸ್ ನೌಕರರನ್ನು ಒಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರ ಜವಾಬ್ದಾರಿಯಾಗಿದೆ. ಈಗಾಗಲೇ ಪಂಜಾಬ್, ರಾಜಸ್ಥಾನ, ಛತ್ತಿಸಘಡ್, ಜಾರ್ಖಂಡ್, ಹಿಮಾಚಲ ಪ್ರದೇಶಗಳಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗೆ ಬಂದಿದೆ. ಅದರಂತೆ ನಮ್ಮ ರಾಜ್ಯದಲ್ಲಿಯೂ ಜಾರಿಗೆ ತರಬೇಕೆಂದ ಅವರು, ನಮ್ಮ ಸಂಘದ ನ್ಯಾಯಯುತ ಮೂರು ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಿ ನೌಕರರ ಹಿತವನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ ವಿವಿಧ ಇಲಾಖೆಯ ನೌಕರರಾದ ಎಂ.ಎಂ.ಬಳಗಾನೂರ, ಮನೋಜ ಪಾಟೀಲ, ಎಂ.ವೈ.ಒಳಸಂಗ, ಎಂ.ವಿ.ಗಬ್ಬೂರ, ಶಂಕರ ತಳವಾರ, ಮಂಜುನಾಥ ಹಳ್ಳೂರ, ಅನಿತಾ ಪಾಟೀಲ, ಎಸ್.ಆರ್.ಇಬ್ರಾಹಿಂಪೂರ, ಜಗದೀಶ ಹಾರಿವಾಳ ಇತರರು ಇದ್ದರು.