ಮುದ್ದೇಬಿಹಾಳ : ರಾಜ್ಯದ ಎಲ್ಲ ಸರ್ಕಾರಿ ನೌಕರರಿಗೆ 7ನೇ ವೇತನ ಜಾರಿಗೊಳಿಸುವುದು ಸೇರಿದಂತೆ ಇತರೇ ಮೂಲಸೌಲಭ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ತಾಲೂಕು ಘಟಕದಿಂದ ಶಾಸಕ ಹಾಗೂ ಕರ್ನಾಟಕ ರಾಜ್ಯದ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಹಾಗೂ ತಹಸೀಲ್ದಾರ್ ಬಲರಾಮ ಕಟ್ಟಿಮನಿ ಮೂಲಕ ಮುಖ್ಯಮಂತ್ರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.
ಸಂಘವು ರಾಜ್ಯದ ಎಲ್ಲ 31 ಕಂದಾಯ ಜಿಲ್ಲೆ ಹಾಗೂ 183 ತಾಲೂಕುಗಳಲ್ಲಿ ಶಾಖೆಗಳನ್ನು ಹೊಂದಿದೆ.6 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿದೆ. ಸಂಘವು ರಾಷ್ಟ್ರ ಹಾಗೂ ರಾಜ್ಯದಲ್ಲಿ ಸಂಭವಿಸುವ ಪ್ರಕೃತಿ ವಿಕೋಪ, ಉತ್ತರ ಕರ್ನಾಟಕದ ಪ್ರವಾಹ, ಕೋವಿಡ್ ವೇಳೆ ಸರ್ಕಾರದ ಪರವಾಗಿ ಉತ್ತಮ ಸೇವೆ ನೀಡಿದೆ ಎಂದು ತಿಳಿಸಿದ್ದಾರೆ.ರಾಜ್ಯದಲ್ಲಿ ೨.೬೦ ಲಕ್ಷ ಹುದ್ದೆಗಳು ಖಾಲಿಯಿದ್ದರೂ ಜನ ಸಾಮಾನ್ಯರ ಕಲ್ಯಾಣ ಕಾರ್ಯಕ್ರಮ ಜಾರಿಯಲ್ಲಿ ಹಿಂದೆ ಬಿದ್ದಿಲ್ಲ. ಅಲ್ಲದೆ, ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಎಲ್ಲ ಸಾಮಾನ್ಯರಿಗೂ ತಲುಪಿಸಲಾಗಿದ್ದು, ಅಭಿವೃದ್ಧಿ ಸೂಚ್ಯಂಕದ ಬೆಳವಣಿಗೆಯಲ್ಲಿ ಜಿಎಸ್‌ಟಿ ತೆರಿಗೆ ಸಂಗ್ರಹದಲ್ಲಿ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಚಟುವಟಿಕೆ ಹೊಂದಿದ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದಿದ್ದಾರೆ.
ಹೀಗಾಗಿ 7ನೇ ವೇತನ ಆಯೋಗವು ಸರ್ಕಾರಕ್ಕೆ ಸಲ್ಲಿಸಿರುವ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಿ ಆದೇಶ ಹೊರಡಿಸಬೇಕು. ಸಂಘದ ಒತ್ತಡದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರವು 19 .11 .2022 ರಂದು ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಕೆ.ಸುಧಾಕರ್‌ರಾವ್ ಅಧ್ಯಕ್ಷತೆಯಲ್ಲಿ ರಾಜ್ಯ 7ನೇ ವೇತನ ಆಯೋಗ ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು. ಬಳಿಕ ವೇತನ ಆಯೋಗವು 16 -3 -2024 ರಂದು ಸರ್ಕಾರಕ್ಕೆ ವರದಿ ಸಲ್ಲಿಸಿದೆ. ಇದರ ನಡುವೆ ಬೆಂಗಳೂರು ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 7ನೇ ವೇತನ ಆಯೋಗವು ವರದಿ ನೀಡಿದ ನಂತರ ಅನುಷ್ಠಾನಗೊಳಿಸುವ ಸ್ಪಷ್ಟ ಭರವಸೆಯನ್ನು ನೀಡಿದ್ದಾರೆ. ಆದರೆ, ಇಲ್ಲಿಯವರೆಗೂ ನಮ್ಮ ಬೇಡಿಕೆ ಈಡೇರಿಸಿಲ್ಲ ಎಂದು ಆರೋಪಿಸಿದ ನೌಕರರು, ಎನ್‌ಪಿಎಸ್ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿಗೊಳಿಸಿ ಆದೇಶ ಹೊರಡಿಸಬೇಕು. ಜೊತೆಗೆ ಕರ್ನಾಟಕ ರಾಜ್ಯ ಆರೋಗ್ಯ ಸಂಜೀವಿನಿ ಯೋಜನೆ (ಕೆಎಎಸ್ಎಸ್) ಅನುಷ್ಠಾನಗೊಳಿಸುವ ಮೂಲಕ ನಮ್ಮ ಬೇಡಿಕೆ ಈಡೇರಿಸುವ ಮೂಲಕ ನಮಗೆ ಸಾಮಾಜಿಕ ನ್ಯಾಯ ನೀಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.ಈ ವೇಳೆ ನೌಕರರ ಸಂಘದ ಅಧ್ಯಕ್ಷ ಎಸ್.ಆರ್.ಕಟ್ಟಿಮನಿ, ಕಾರ್ಯದರ್ಶಿ ಬಿ.ಎಸ್.ಹೊಳಿ, ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಚ್. ಮುದ್ನೂರ, ಎನ್.ಎಸ್.ತುರಡಗಿ, ಅರವಿಂದ ಹೂಗಾರ, ವೆಂಕಟೇಶ ಅಂಬಿಗೇರ, ಸಿ.ಜಿ.ನಾಗರಬೆಟ್ಟ, ಎಸ್.ಆರ್.ಕಟ್ಟಿಮನಿ, ಐ.ಎ.ಹಿರೇಮಠ, ಆನಂದ ಬಿರಾದಾರ, ಸುಮಿತ್ರಾ ಹಗರಗೊಂಡ, ಸಂಗಮೇಶ ಹಿರೇಮಠ, ಎಸ್.ಜಿ.ಹಂದ್ರಾಳ, ಬಿ.ಎಚ್.ಭಗವತಿ, ಬಿ.ವಿ.ಕಂಠಿ, ವಿಠ್ಠಲ, ಕಿಲಾರಟ್ಟಿ, ಕೆ.ಎಸ್ ಕಶಿನಕುಂಟಿ, ಎಂ.ಎಸ್.ಗೌಡರ, ಎಂ.ಬಿ.ಪಾಟೀಲ, ಎಸ್.ಎಸ್.ಕುಂಬಾರ ಇತರರಿದ್ದರು.