ಪೋಶ್ ಕಾಯ್ದೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ

KannadaprabhaNewsNetwork |  
Published : Nov 07, 2026, 02:30 AM IST
ಫೋಟೋವಿವರ- (5ಎಚ್‌ಪಿಟಿ1) ಹೊಸಪೇಟೆ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ತರಬೇತಿ ಕಾರ್ಯಕ್ರಮದಲ್ಲಿ ರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮಾತನಾಡಿದರು | Kannada Prabha

ಸಾರಾಂಶ

ಪ್ರತಿಯೊಂದು ಅರ್ಹ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು

ಹೊಸಪೇಟೆ: ಕೆಲಸದ ಸ್ಥಳಗಳಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಮಾನಸಿಕ ಕಿರುಕುಳ ತಡೆಗಟ್ಟಲು ಪೋಶ್ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು. ಈ ನಿಟ್ಟಿನಲ್ಲಿ ಹತ್ತು ಅಥವಾ ಅದಕ್ಕಿಂತ ಹೆಚ್ಚು ಸಿಬ್ಬಂದಿ ಕಾರ್ಯ ನಿರ್ವಹಿಸುವ ಪ್ರತಿಯೊಂದು ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳಲ್ಲಿ ಆಂತರಿಕ ದೂರು ಸಮಿತಿ ಕಡ್ಡಾಯವಾಗಿ ರಚಿಸಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಹೇಳಿದರು.

ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಗುರುವಾರ ರಾಜ್ಯ ಮಹಿಳಾ ಆಯೋಗ, ಜಿಲ್ಲಾಡಳಿತ, ಜಿಪಂ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಕೆಲಸದ ಸ್ಥಳದಲ್ಲಿ ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ ಕುರಿತ ತರಬೇತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪೋಶ್ ಕಾಯ್ದೆ ಕೇವಲ ದಾಖಲೆಗಳಿಗೆ ಸೀಮಿತವಾಗದೆ, ಪ್ರತಿಯೊಂದು ಅರ್ಹ ಸರ್ಕಾರಿ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳ್ಳಬೇಕು. ಮಹಿಳೆಯರಿಗೆ ಸುರಕ್ಷಿತ ಹಾಗೂ ಗೌರವಯುತ ಕೆಲಸದ ವಾತಾವರಣ ಕಲ್ಪಿಸುವುದು ಈ ಕಾಯ್ದೆಯ ಮುಖ್ಯ ಉದ್ದೇಶವಾಗಿದೆ. ಆಂತರಿಕ ದೂರು ಸಮಿತಿಗೆ ಹಿರಿಯ ಮಹಿಳಾ ಅಧಿಕಾರಿ ಅಧ್ಯಕ್ಷರನ್ನಾಗಿ ನೇಮಿಸಬೇಕು. ಸಮಿತಿಯಲ್ಲಿ ಮಹಿಳಾ ಸದಸ್ಯರೊಂದಿಗೆ ಮಹಿಳಾ ಹಕ್ಕುಗಳಿಗಾಗಿ ಶ್ರಮಿಸುವ ಸ್ವಯಂಸೇವಾ ಸಂಸ್ಥೆಗಳು ಅಥವಾ ಸ್ಥಳೀಯ ಸಂಘಟನೆಗಳ ಪ್ರತಿನಿಧಿಗಳಿಗೂ ಅವಕಾಶ ಕಲ್ಪಿಸಬೇಕು ಎಂದು ತಿಳಿಸಿದರು.

ಕೆಲಸದ ಸ್ಥಳದಲ್ಲಿ ಮಹಿಳೆಯರು ಮಾನಸಿಕ ಅಥವಾ ದೈಹಿಕವಾಗಿ ದೌರ್ಜನ್ಯಕ್ಕೆ ಒಳಗಾದಾಗ ಎದೆಗುಂದದೆ ಧೈರ್ಯದಿಂದ ಎದುರಿಸಬೇಕು. ಸಮಾಜದಲ್ಲಿ ಎದುರಾಗುವ ಸವಾಲು ಸಮರ್ಥವಾಗಿ ಎದುರಿಸುವ ಮೂಲಕ ಗಟ್ಟಿಗಿತ್ತಿಯರಾಗಿ ಹೊರಹೊಮ್ಮಬೇಕು. ಯಾವುದೇ ಕಚೇರಿ ಅಥವಾ ಸಂಸ್ಥೆಯಲ್ಲಿ ಮಹಿಳೆಯರು ಕಾರ್ಯನಿರ್ವಹಿಸುತ್ತಿದ್ದರೆ ಅವರ ಸುರಕ್ಷತೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಹಿಳೆಯರ ಮೇಲೆ ಅನ್ಯಾಯ, ಅಕ್ರಮ ಅಥವಾ ದೌರ್ಜನ್ಯ ನಡೆದಾಗ ಮೌನವಾಗಿರದೆ ಪ್ರತಿಭಟಿಸಿ, ಅದರ ವಿರುದ್ಧ ಧ್ವನಿ ಎತ್ತಬೇಕು. ಕಾಯ್ದೆಯ ಅನುಷ್ಠಾನವು ಕೇವಲ ಕಾಗದದ ಮೇಲಿನ ಕ್ರಮವಾಗಬಾರದು ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗರಿಮಾ ಪನ್ವಾರ್, ಎಸ್ಪಿ ಎಸ್.ಜಾಹ್ನವಿ, ಸಖಿ ಟ್ರಸ್ಟ್ ಸಂಸ್ಥೆಯ ಸಂಸ್ಥಾಪಕಿ ಭಾಗ್ಯಲಕ್ಷ್ಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ