ಸ್ಥಿರಾಸ್ತಿ ಅನುಕೂಲಕ್ಕಾಗಿ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ

KannadaprabhaNewsNetwork |  
Published : Sep 01, 2024, 01:51 AM IST
31ಕೆಆರ್ ಎಂಎನ್ 3.ಜೆಪಿಜಿರಾಮನಗರ ಜಿಲ್ಲಾಧಿಕಾರಿಗಳ ಕಚೇರಿ | Kannada Prabha

ಸಾರಾಂಶ

ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಕನ್ನಡಪ್ರಭ ವಾರ್ತೆ ರಾಮನಗರಜಿಲ್ಲೆಯಾದ್ಯಂತ ಸ್ಥಿರಾಸ್ತಿಯನ್ನು ಜಿಲ್ಲೆಯ ಯಾವುದೇ ಉಪ ನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಲು ಅನುಕೂಲವಾಗುವಂತೆ ಎನಿವೇರ್ ನೋಂದಣಿ ವ್ಯವಸ್ಥೆ ಜಾರಿಗೆ ತರಲಾಗಿದೆ.ರಾಜ್ಯ ಸರ್ಕಾರವು 2024- 25ನೇ ಸಾಲಿನ ಆಯವ್ಯಯದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿದೆ. ಈ ವ್ಯವಸ್ಥೆಯನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ 2011ರಲ್ಲಿ ತುಮಕೂರು ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಾರ್ಚ್ 2024ರಲ್ಲಿ ನೋಂದಣಿ ಕಾಯ್ದೆ 1908ರ ಕಲಂ (5)ರ ಹಾಗೂ ಕಲಂ (6)ರಡಿ ಜಾರಿಗೆ ಅನುಷ್ಠಾನಗೊಳಿಸಲಾಗಿರುತ್ತದೆ.ಎನಿವೇರ್ ನೋಂದಣಿ ವ್ಯವಸ್ಥೆಯು ಈ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದೆ. ಈ ಕಾರಣದಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಮನಗರ ಜಿಲ್ಲೆಯ ಉಪ ನೋಂದಣಿ ಕಚೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.ಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.ಎನಿವೇರ್ ನೊಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗಿರುವುದಲ್ಲದೇ ಸಮಯವು ಸಹ ಉಳಿಯುತ್ತದೆ. ಉಪ ನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.ಆದ್ದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ಹತ್ತರಿಂದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿ ಕೊಳ್ಳುವಂತೆ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV