ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ರಾಜ್ಯ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಸರ್ಕಾರ ಘೋಷಿಸಿತ್ತು. ಈ ಕಾರಣದಿಂದ ಎನಿವೇರ್ ನೋಂದಣಿಯನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಉಪನೋಂದಣಿ ಕಚೇರಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿ, ಈ ವ್ಯವಸ್ಥೆಯನ್ನು 2011ರಲ್ಲಿ ಬೆಂಗಳೂರು ನಗರ ಜಿಲ್ಲೆಯಲ್ಲಿ, ಮಾರ್ಚ್ 2024ರಲ್ಲಿ ತುಮಕೂರು ಮತ್ತು ಬೆಳಗಾವಿ ಜಿಲ್ಲೆಯಲ್ಲಿ ನೋಂದಣಿ ಕಾಯ್ದೆ-1908ರ ಕಲಂ (5) ಹಾಗೂ ಕಲಂ (6) ರಡಿಯಲ್ಲಿ ಅನುಷ್ಠಾನಗೊಳಿಸಲಾಗಿತ್ತು ಎಂದರು.
ಸ್ಥಿರಾಸ್ತಿ ನೋಂದಣಿಪ್ರಸ್ತುತ ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿರುತ್ತದೆ. ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು. ಎನಿವೇರ್ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಲಾಟ್ ಲಭ್ಯವಿರುವಂತಹ ಕಚೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು ಎ₹ದರು.
ಕೆಲಸದ ಒತ್ತಡ ಕಡಿಮೆನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪನೋಂದಣಿ ಕಚೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ. ಕಚೇರಿ ಸಿಬ್ಬಂದಿಗಳ ಮೇಲೆ ಕೆಲಸದ ಒತ್ತಡ ಕಡಿಮೆಯಾಗುತ್ತದೆ ಹಾಗೂ ಕಚೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ. ಆದ್ದರಿಂದ ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಲಾಟ್ ಲಭ್ಯವಿರುವಂತಹ ಕಚೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳಬಹುದೆಂದು ತಿಳಿಸಿದರು.