ಕನ್ನಡ ನಾಮಫಲಕ ಅಳವಡಿಕೆ, ವಾರದಲ್ಲಿ ವರದಿಗೆ ಜಿಲ್ಲಾಧಿಕಾರಿ ಸೂಚನೆ

KannadaprabhaNewsNetwork | Published : Mar 13, 2024 2:05 AM

ಸಾರಾಂಶ

ಹಾವೇರಿ ಜಿಲ್ಲೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಮತ್ತು ತಿದ್ದುಪಡಿ ವಿಧೇಯಕ ಅನುಸಾರ ಕಾಲಮಿತಿಯೊಳಗೆ ಶೇ.೬೦ರಷ್ಟು ಪ್ರಮಾಣದಲ್ಲಿ ಕನ್ನಡ ಭಾಷಾ ಬಳಕೆ ಹಾಗೂ ಕನ್ನಡ ಅನುಷ್ಠಾನ ಕುರಿತಂತೆ ಕ್ರಮವಹಿಸಬೇಕು. ಈ ಕುರಿತಂತೆ ವಾರದೊಳಗೆ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.

ಹಾವೇರಿ: ಜಿಲ್ಲೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಮತ್ತು ತಿದ್ದುಪಡಿ ವಿಧೇಯಕ ಅನುಸಾರ ಕಾಲಮಿತಿಯೊಳಗೆ ಶೇ.೬೦ರಷ್ಟು ಪ್ರಮಾಣದಲ್ಲಿ ಕನ್ನಡ ಭಾಷಾ ಬಳಕೆ ಹಾಗೂ ಕನ್ನಡ ಅನುಷ್ಠಾನ ಕುರಿತಂತೆ ಕ್ರಮವಹಿಸಬೇಕು. ಈ ಕುರಿತಂತೆ ವಾರದೊಳಗೆ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಭೆ ನಡೆಸಿದ ಅವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-೨೦೨೨ ಮತ್ತು ತಿದ್ದುಪಡಿ ವಿಧೇಯಕ ೨೦೨೪ ಅನುಷ್ಠಾನಗೊಳಿಸಲು ಈಗಾಗಲೇ ತಾಲೂಕು ಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಕನ್ನಡ ಅನುಷ್ಠಾನ ಕುರಿತಂತೆ ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಜಿಲ್ಲಾ ಮಟ್ಟದ ಸಮಿತಿಗೆ ವರದಿ ನೀಡಬೇಕು ಎಂದು ಸೂಚನೆ ನೀಡಿದರು.

ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಮತ್ತು ತಿದ್ದುಪಡಿ ವಿಧೇಯಕ ಅನುಸಾರ ನಗರ ಪ್ರದೇಶದ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರ ಮತ್ತು ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಮತ್ತು ಮಂಜೂರಾತಿಯೊಂದಿಗೆ ಕಾರ್ಯನಿರ್ವಹಿಸುತ್ತಿರುವ ವಾಣಿಜ್ಯ, ಕೈಗಾರಿಕೆ ಮತ್ತು ವ್ಯವಹಾರ ಉದ್ಯಮಗಳು, ಟ್ರಸ್ಟ್‌ಗಳು, ಸಮಾಲೋಚನೆ ಕೇಂದ್ರ, ಆಸ್ಪತ್ರೆಗಳು, ಪ್ರಯೋಗಾಲಯಗಳು, ಮಳಿಗೆಗಳು, ಬ್ಯಾಂಕ್‌ಗಳು, ಕೈಗಾರಿಕೆಗಳು, ಶಿಕ್ಷಣ ಸಂಸ್ಥೆಗಳು, ಹೋಟೆಲ್‌ಗಳು ಹಾಗೂ ಎಲ್ಲ ಖಾಸಗಿ ಸಂಸ್ಥೆಗಳು, ಮನರಂಜನಾ ಕೇಂದ್ರಗಳು, ಹೋಟೆಲ್‌ಗಳು ಒಳಗೊಂಡಂತೆ ಇತರೆ ಸಂಸ್ಥೆಗಳು ಅಳವಡಿಸಿರುವ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಶೇ.೬೦ರಷ್ಟಯ ಪ್ರಮಾಣದಲ್ಲಿ ಪ್ರದರ್ಶಿಸಲಾಗಿದೆ ಮತ್ತು ನಾಮಫಲಕದಲ್ಲಿ ಕನ್ನಡ ಭಾಷೆಯು ಮೇಲ್ಭಾಗದಲ್ಲಿ ಪ್ರದರ್ಶಿತವಾಗಿದೆ ಎಂಬುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಬೇಕು. ಇದಲ್ಲದೇ ರಸ್ತೆಗಳು ಮತ್ತು ಬಡಾವಣೆ ಪ್ರದೇಶಗಳ ಹೆಸರು ಸೇರಿದಂತೆ ರಾಜ್ಯದ ವಿವಿಧ ಸರ್ಕಾರಿ ಇಲಾಖೆಗಳ ಮತ್ತು ಸ್ಥಳೀಯ ಪ್ರಾಧಿಕಾರಗಳ ಮೇಲ್ವಿಚಾರಣೆಯಲ್ಲಿ ಹಾಕಲಾಗಿರುವ ಫಲಕಗಳ ಮೇಲೆ ಕನ್ನಡವನ್ನು ಬಳಸಬೇಕು. ಈ ಕುರಿತಂತೆ ಪರಿಶೀಲನೆ ನಡೆಸಿ ಮುಂದಿನ ಒಂದು ವಾರದಲ್ಲಿ ವರದಿ ನೀಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕನ್ನಡ ಭಾಷೆಯಲ್ಲಿ ನಿಯಮಾನುಸಾರ ನಾಮಫಲಕ ಅಳವಡಿಸದೇ ಇರುವವರಿಗೆ ಕಾಲಾವಕಾಶ ನೀಡಿ, ನಿಯಮದ ಬಗ್ಗೆ ಅರಿವು ಮೂಡಿಸಿ. ನಾಮಫಲಕಗಳಲ್ಲಿ ಶೇ.೬೦ರ ಪ್ರಮಾಣದಲ್ಲಿ ಕನ್ನಡ ಭಾಷೆಯಲ್ಲಿ ನಾಮಫಲಕ ಬರೆಸಿ ಅಳವಡಿಸುವಂತೆ ತಿಳುವಳಿಕೆ ನೀಡಬೇಕು. ಕಾಲಮಿತಿಯೊಳಗೆ ಅಳವಡಿಕೆಗೆ ಸೂಚನೆ ನೀಡಿ ಎಂದು ಹೇಳಿದರು.

ಸರ್ಕಾರಿ ಮತ್ತು ಸರ್ಕಾರದ ಅಧೀನ ಸಂಸ್ಥೆಗಳು, ಸ್ಥಳೀಯ ಪ್ರಾಧಿಕಾರಿಗಳು ಹೊರಡಿಸುವ ಎಲ್ಲ ಟೆಂಡರ್ ಅಧಿಸೂಚನೆ, ಜಾಹೀರಾತುಗಳು, ಅರ್ಜಿ ನಮೂನೆ, ಡಿಜಿಟಿಲ್ ನಮೂನೆ ಪ್ರಮಾಣಪತ್ರ ಮತ್ತು ಅಧಿಸೂಚನೆಗಳು, ಬ್ಯಾನರ್, ಫ್ಲೆಕ್ಸ್, ಎಲೆಕ್ಟ್ರಾನಿಕ್ ಫಲಕಗಳು, ನೊಟೀಸ್‌ಗಳು, ರಸೀದಿ ಬಿಲ್ಲುಗಳು, ಪತ್ರವ್ಯವಹಾರಗಳು ಪ್ರಮುಖವಾಗಿ ನಿಯಮಾನುಸಾರ ಕನ್ನಡ ಭಾಷೆಯಲ್ಲೇ ಇರುವಂತೆ ನೋಡಿಕೊಳ್ಳಬೇಕು. ಈ ಕುರಿತಂತೆ ಕಾಲಕಾಲಕ್ಕೆ ಪರಿಶೀಲನೆ ನಡೆಸಲು ಸೂಚನೆ ನೀಡಿದರು.

ಗ್ರಾಮೀಣ ಭಾಗದಲ್ಲಿ ಅಳವಡಿಸಿರುವ ನಾಮಫಲಕಗಳ ಪರಿಶೀಲನೆ, ಆಯಾ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ನಡೆಸಬೇಕು. ನಗರ ಪ್ರದೇಶಗಳಲ್ಲಿ ಅಳವಡಿಸಿರುವ ನಾಫಲಕಗಳ ಪರಿಶೀಲನೆ ನಗರ ಸ್ಥಳೀಯ ಸಂಸ್ಥೆಗಳು ಮುಖ್ಯಾಧಿಕಾರಿಗಳು, ಪೌರಾಯುಕ್ತರು ಪರಿಶೀಲನೆ ನಡೆಸಬೇಕು. ವಾಣಿಜ್ಯ ಮಳಿಗೆಗಳು, ಕೈಗಾರಿಕಾ ಸಂಸ್ಥೆಗಳ ನಾಮಫಲಕಗಳನ್ನು ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕರು ನಡೆಸಬೇಕು ಎಂದರು.

ಜಿಲ್ಲಾ ಮಟ್ಟದ ಸಮಿತಿಯಲ್ಲಿ ಜಿಲ್ಲಾಧಿಕಾರಿಗಳು ಅಧ್ಯಕ್ಷರಾಗಿದ್ದು, ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ನಗರಸಭೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಕೈಗಾರಿಕಾ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಜಂಟಿ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು ಸದಸ್ಯರಾಗಿದ್ದು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಸದಸ್ಯ ಕಾರ್ಯದರ್ಶಿಗಳಾಗಿದ್ದಾರೆ. ತಾಲೂಕು ಮಟ್ಟದಲ್ಲಿ ಉಪ ವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಉಪವಿಭಾಗಾಧಿಕಾರಿಗಳು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು, ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್ ಆಯುಕ್ತರು ಹಾಗೂ ಮುಖ್ಯಾಧಿಕಾರಿಗಳು, ಆಯಾ ತಾಲೂಕಿನ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಸದಸ್ಯರಾಗಿದ್ದು, ಆಯಾ ತಾಲೂಕಿನ ತಹಸೀಲ್ದಾರಗಳನ್ನು ಸಂಚಾಲಕರನ್ನಾಗಿ ನೇಮಕ ಮಾಡಿ ಸಮಿತಿಗಳನ್ನು ರಚಿಸಲಾಗಿದೆ. ಸಮಿತಿಯು ಕನ್ನಡ ಅನುಷ್ಠಾನ ಕುರಿಂತೆ ಕಾಲಕಾಲಕ್ಕೆ ಪರಿಶೀಲನೆ ನಡೆಸಬೇಕು ಎಂದರು.

ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗಿ ಇತರರು ಇದ್ದರು.

Share this article