ಕನ್ನಡಪ್ರಭ ವಾರ್ತೆ ಪುತ್ತೂರು ಪುತ್ತೂರಿನ ಮಹಾಲಿಂಗೇಶ್ವರ ದೇವಳದ ಮುಂಭಾಗದ ದೇವರ ಮಾರು ಗದ್ದೆಯಲ್ಲಿ ಪುತ್ತಿಲ ಪರಿವಾರ ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಆಶ್ರಯದಲ್ಲಿ ೨೪ ಮತ್ತು ೨೫ ರಂದು ಶ್ರೀನಿವಾಸ ಕಲ್ಯಾಣೋತ್ಸವ ಮತ್ತು ಸನಾತನ ಸಮಾಗಮ ಕಾರ್ಯಕ್ರಮ ನಡೆಲಿದೆ ಎಂದು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಗೌರವಾಧ್ಯಕ್ಷ ಡಾ.ಸುರೇಶ್ ಪುತ್ತೂರಾಯ ಮತ್ತು ಸ್ವಾಗತ ಸಮಿತಿ ಸಂಚಾಲಕ ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನಕುಮಾರ್ ಮಾರ್ತ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೨೪ರಂದು ಬೆಳಗ್ಗೆ ೬.೩೦ರಿಂದ ಭಜನೆ, ಸಂಜೆ ೪ಗಂಟೆಗೆ ನಗರದ ಬೊಳುವಾರಿನಿಂದ ಮಹಾಲಿಂಗೇಶ್ವರ ದೇವಳದ ಗದ್ದೆ ತನಕ ಪುಷ್ಪವೃಷ್ಠಿ, ವಿದ್ವಾಂಸರ ವೇದಪಠಣ, ಶಂಕನಾದ, ಚೆಂಡೆವಾದ್ಯಗಳ ಪೋಷದೊಂದಿಗೆ ದೇವರ ಭವ್ಯ ಶೋಭಾಯಾತ್ರೆ ನಡೆಯಲಿದೆ ಎಂದರು.ಸಂಜೆ ೫.೩೦ಕ್ಕೆ ದ.ಕ.ಮತ್ತು ಉಡುಪಿ ಜಿಲ್ಲೆಯ ಸ್ವಾಮೀಜಿಗಳ ಉಪಸ್ಥಿತಿಯಲ್ಲಿ ಸನಾತನ ಸಮಾಗಮ ಕಾರ್ಯಕ್ರಮ ನಡೆಯಲಿದೆ. ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ, ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ, ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ, ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಆನೆಗುಂಡಿ ಮಹಾಸಂಸ್ಥಾನಂನ ಶ್ರೀ ಸರಸ್ವತೀ ಪೀಠದ ಕಾಳಹಸ್ತೇಂದ್ರ ಸರಸ್ವತಿ ಸ್ವಾಮೀಜಿ, ಚಿತ್ರಾಪುರ ಮಠದ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ, ಮಂಗಳೂರು ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶ್ರೀ ಡಾ.ಧರ್ಮಪಾಲನಾಥ ಸ್ವಾಮೀಜಿ, ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮೀಜಿ, ಅರೆಮಾದೇನಹಳ್ಳಿ ವಿಶ್ವಕರ್ಮ ಪೀಠದ ಶ್ರೀ ಶಿವಸುಜ್ಞಾನ ತೀರ್ಥ ಸ್ವಾಮೀಜಿ, ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಕೇಮಾರು ಮಠದ ಶ್ರೀ ಈಶ ವಿಠಲದಾಸ ಸ್ವಾಮೀಜಿ, ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕನ್ಯಾನ ಕಣಿಯೂರು ಕ್ಷೇತ್ರದ ಶ್ರೀ ಮಹಾಬಲ ಸ್ವಾಮೀಜಿ, ಕನ್ಯಾಡಿ ಮಠದ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ, ವಿಟ್ಲ ಯೋಗೀಶ್ವರ ಮಠದ ಶ್ರೀ ರಾಜಗುರು ಯೋಗಿ ಶ್ರದ್ಧಾನಾಥ ಜೀ, ಕುಕ್ಕಾಜೆ ಶ್ರೀ ಕಾಳಿಕಾಂಬಾ ಆಂಜನೇಯ ಕ್ಷೇತ್ರದ ಕೃಷ್ಣ ಗುರೂಜಿ ಭಾಗವಹಿಸಲಿದ್ದಾರೆ.
ಡಿ.೨೫ರಂದು ಸಂಜೆ ೬ಗಂಟೆಗೆ ವೈಭವದ ಕಲ್ಯಾಣೋತ್ಸವ, ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ೨೩ರಂದು ಗ್ರಾಮ ಮಟ್ಟಗಳಲ್ಲಿ ಹೊರೆಕಾಣಿಕೆ ಸಂಗ್ರಹ, ಸಂಜೆ ೫ ಗಂಟೆಗೆ ನಗರದ ದರ್ಬೆಯಿಂದ ಮಹಾಲಿಂಗೇಶ್ವರ ದೇವಳದ ಗದ್ದೆ ತನಕ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಮನೀಶ್ ಕುಲಾಲ್ ಬನ್ನೂರು, ಸ್ವಯಂ ಸೇವಕ ಸಮಿತಿಯ ಸಂಚಾಲಕ ಅನಿಲ್ ತೆಂಕಿಲ, ಪ್ರಚಾರ ಮತ್ತು ಮಾಧ್ಯಮ ಸಮಿತಿಯ ಸಂಚಾಲಕ ನವೀನ್ ರೈ ಪಂಜಳ, ಕಾರ್ಯದರ್ಶಿ ಪ್ರಜ್ವಲ್ ಘಾಟೆ ಇದ್ದರು.