ಕನ್ನಡಪ್ರಭ ವಾರ್ತೆ ಬೀದರ್
ಫೆ.3ರಂದು ನಗರದ ಚಿಕ್‌ಪೇಟ್ ಹತ್ತಿರದ ಗುರುನಾನಕ-ಚಿಕ್‌ಪೇಟ್ ರಸ್ತೆಯ ಲಾವಣ್ಯ ಫಂಕ್ಷನ್ ಹಾಲ್ ಎದುರು ನಿರ್ಮಿಸಿರುವ ಕನ್ನಡ ಭವನದ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಉದ್ಘಾಟಿಸಲಿದ್ದಾರೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸುರೇಶ ಚನ್ನಶೆಟ್ಟಿ ತಿಳಿಸಿದ್ದಾರೆ.ಪೌರಾಡಳಿತ ಮತ್ತು ಹಜ್ ಸಚಿವರಾದ ರಹೀಮ್‌ಖಾನ್ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ ಕೇಂದ್ರ ಸಚಿವರಾದ ಭಗವಂತ ಖೂಬಾ, ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ ತಂಗಡಗಿ, ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿ ಉಪಸ್ಥಿತರಿರಲಿದ್ದಾರೆ.
ಶಾಸಕರಾದ ಪ್ರಭು ಚವ್ಹಾಣ, ಶರಣು ಸಲಗರ, ಡಾ.ಶೈಲೇಂದ್ರ ಬೆಲ್ದಾಳೆ, ಡಾ.ಸಿದ್ದಲಿಂಗಪ್ಪ ಪಾಟೀಲ, ರಘುನಾಥರಾವ ಮಲ್ಕಾಪುರೆ, ಅರವಿಂದ ಅರಳಿ, ಡಾ.ಚಂದ್ರಶೇಖರ ಪಾಟೀಲ, ಶಶೀಲ ನಮೋಶಿ, ಭೀಮರಾವ ಪಾಟೀಲ, ನಗರಸಭೆ ಅಧ್ಯಕ್ಷ ಮೊಹ್ಮದ ಗೌಸ್, ಉಪಾಧ್ಯಕ್ಷರಾದ ಲಕ್ಷ್ಮಿಬಾಯಿ ಹಂಗರಗಿ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಪಂ ಸಿಇಒ ಡಾ.ಗಿರೀಶ್ ಬಾಡೋಳೆ, ಎಸ್ಪಿ ಚನ್ನಬಸವಣ್ಣ ಎಸ್.ಎಲ್, ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಾಶ ಮತ್ತಿಹಳ್ಳಿ ಭಾಗವಹಿಸಲಿದ್ದು, ಜಲ್ಲೆಯ ಕನ್ನಡಾಭಿಮಾನಿಗಳು, ಸಾಹಿತ್ಯ ಪರಿಷತ್ತಿನ ಸದಸ್ಯರು, ಸಾಹಿತಿಗಳು, ಕಲಾವಿದರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ಕೋರಿದ್ದಾರೆ.21ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮುಂದೂಡಿಕೆ:
ನಾಡೋಜ ಡಾ. ಬಸವಲಿಂಗ ಪಟ್ಟದ್ದೇವರ ಸರ್ವಾಧ್ಯಕ್ಷತೆಯಲ್ಲಿ ಬರುವ ಫೆ.3 ಮತ್ತು 4ರಂದು ಬೀದರ್ ನಗರದ ಗುರುನಾನಕ-ಚಿಕ್ಪೇಟ್ ರಸ್ತೆಯಲ್ಲಿ ಹೊಸದಾಗಿ ನಿರ್ಮಿಸಿರುವ ಕನ್ನಡ ಭವನ ಆವರಣದಲ್ಲಿ ಹಮ್ಮಿಕೊಳ್ಳಲು ಉದ್ದೇಶಿಸಿರುವ ಬೀದರ್ ಜಿಲ್ಲಾ 21ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ. ಆದರೆ ನಿಗದಿಯಂತೆ ಕನ್ನಡ ಭವನದ ಉದ್ಘಾಟನೆ ನಡೆಯಲಿದೆ. ಸಮ್ಮೇಳನದ ಮುಂದಿನ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದೆಂದು ಸುರೇಶ ಚನ್ನಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.