ಪ್ರತಿಭೆ ಪ್ರದರ್ಶನಕ್ಕೆ ಸಾಂಸ್ಕೃತಿಕ, ಕ್ರೀಡಾ ಚಟುವಟಿಕೆ ಸಹಕಾರಿ

KannadaprabhaNewsNetwork | Published : Jan 5, 2024 1:45 AM

ಸಾರಾಂಶ

ಕಾಲೇಜಿನ ಏಳ್ಗೆಗೆ ನಮ್ಮೊಂದಿಗೆ ವಿದ್ಯಾರ್ಥಿಗಳು ಮತ್ತು ನಾಗರಿಕರು ಕೈಜೋಡಿಸಬೇಕು. ಪಾಠಬೋಧನೆ ಜೊತೆಗೆ ವಿವಿಧ ತರಬೇತಿಗಳ ಪರಿಣತಿ ಪಡೆದು ಮುಂದೆ ಬರಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು

ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳಭಾರತ ಪ್ರಪಂಚದಲ್ಲಿಯೇ ಅತಿ ಹೆಚ್ಚು ಜನ ಸಂಪನ್ಮೂಲ ಹೊಂದಿದ್ದು, ಕ್ರೀಡೆ ಮತ್ತು ಸಾಂಸ್ಕೃತಿಕ ಕಲೆಗಳಲ್ಲಿ ಪ್ರಗತಿ ಸಾಧಿಸಬೇಕಿದೆ. ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲು ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆ ಸಹಕಾರಿಗಲಿದೆ. ಈ ನಿಟ್ಟಿನಲ್ಲಿ ಬಾಲ್ಯದಲ್ಲಿಯೇ ಮಕ್ಕಳನ್ನು ಪ್ರೋತ್ಸಾಹಿಸುವ ಅಗತ್ಯವಿದೆ ಎಂದು ಶಾಸಕ ಸಿ.ಎಸ್. ನಾಡಗೌಡ(ಅಪ್ಪಾಜಿ) ಹೇಳಿದರು.

ಪಟ್ಟಣದ ಆಲಮಟ್ಟಿ ರಸ್ತೆ ಮಾರ್ಗದಲ್ಲಿರುವ ಮಾದರಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಸತಿಸಹಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳ ಕಾರ್ಯಕ್ರಮವನ್ನು ಬುಧವಾರ ಉದ್ಘಾಟಿಸಿ ಅವರು ಮಾತನಾಡಿದರು.

ಶಾಲೆಯಲ್ಲಿ ಬೋಧನೆ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲೂ ಸಾಧನೆ ಮಾಡಿದೆ. ಇಲ್ಲಿ ವಿದ್ಯಾಭ್ಯಾಸ ಮಾಡಿದ ನೂರಾರು ವಿದ್ಯಾರ್ಥಿಗಳು ದೇಶ-ವಿದೇಶಗಳಲ್ಲಿ ಉನ್ನತ ಹುದ್ದೆಯಲ್ಲಿದ್ದು, ಶಾಲೆಗೆ ಕೀರ್ತಿ ತಂದಿದ್ದಾರೆ. ಈಗಿನ ವಿದ್ಯಾರ್ಥಿಗಳು ಅವರನ್ನು ಮಾದರಿಯಾಗಿಟ್ಟುಕೊಂಡು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು ಪ್ರಯತ್ನಪಡಬೇಕು ಎಂದರು.

ನಾವಿಂದು ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕುತ್ತಿದ್ದು, ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಲು ಪ್ರಯತ್ನಿಸಬೇಕು. ಸರ್ಕಾರದ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು. ಅತ್ಯಂತ ಶ್ರದ್ಧೆ, ಪ್ರಾಮಾಣಿಕತೆಯಿಂದ ವಿದ್ಯಾರ್ಥಿ ಜೀವನ ಸುಂದರವಾಗಿಸಿಕೊಳ್ಳಬೇಕೆಂದರು.ಸದ್ಯ ಕಾಲೇಜಿನಲ್ಲಿ ರಸ್ತೆ ಚರಂಡಿ ಸೇರಿದಂತೆ ಮೂಲಸೌಲಭ್ಯಗಳ ಕೊರತೆಯಿರುವ ಬಗ್ಗೆ ಮಾಹಿತಿ ಇದ್ದು, ಇಲಾಖೆಯಿಂದ ವಿಶೇಷ ಅನುದಾನ ಬಿಡುಗಡೆಗೊಳಿಸಲು ಸೂಚಿಸುತ್ತೇನೆ. ಇಲಾಖೆಯಲ್ಲಿ ಅನುದಾನದ ಕೊರತೆ ಇದ್ದರೆ ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ ಹಣ ಬಿಡುಗಡೆಗೊಳಿಸಿ ಕಾಲೇಜನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಸ್ವಲ್ಪ ದಿನಗಳಲ್ಲಿ ವಸತಿ ನಿಲಯ ಆರಂಭವಾಗುತ್ತಿದ್ದು, ಅದರ ಪ್ರಯೋಜನ ಪಡೆದಕೊಂಡು ಪರೀಕ್ಷೆಯಲ್ಲಿ ಉತ್ತಮ ಶ್ರೇಣಿ ಪಡೆದುಕೊಳ್ಳುವಂತೆ ಸಲಹೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಂ.ಜಿ.ವಿ.ಸಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಬಿ.ಎ.ಗೂಳಿ ಮತ್ತು ಸರ್ಕಾರಿ ಪದವಿ ಪೂರ್ವಕಾಲೇಜಿನ ಉಪನ್ಯಾಸಕ ಬಸವರಾಜ.ಎ. ನಾಡಗೌಡ ಮಾತನಾಡಿ, ವಿದ್ಯಾರ್ಜನೆ ತಪಸ್ಸು ಇದ್ದ ಹಾಗೆ. ಶ್ರದ್ಧೆ, ಆಸಕ್ತಿ ಏಕಾಗ್ರತೆಯಿಂದ ಶಿಕ್ಷಣ ಪಡೆದು ಮೌಲ್ಯಯುತಜೀವನ ರೂಪಿಸಿಕೊಳ್ಳಬೇಕು. ಮೊಬೈಲ್‌ನ್ನು ಗ್ರಂಥಾಲಯದಂತೆ ಬಳಸಿ ಜ್ಞಾನಾರ್ಜನೆಯ ಜೊತೆಗೆ ಕೌಶಲ್ಯ ರೂಪಿಸಿಕೊಂಡು ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೈಹಿಕ ಮತ್ತು ಮಾನಸಿಕ ಸದೃಢತೆ ಬೆಳೆಸಿಕೊಂಡು ವ್ಯಕ್ತಿತ್ವ ವಿಕಸನದ ಮೂಲಕ ಉತ್ತಮ ನಾಗರಿಕರಾಗಿ ಬೆಳೆಯಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲ ಡಾ.ಎಸ್.ಎಲ್. ಪಾಟೀಲ ಮಾತನಾಡಿ, ಕಾಲೇಜಿನ ಏಳ್ಗೆಗೆ ನಮ್ಮೊಂದಿಗೆ ವಿದ್ಯಾರ್ಥಿಗಳು ಮತ್ತು ನಾಗರಿಕರು ಕೈಜೋಡಿಸಬೇಕು. ಪಾಠಬೋಧನೆ ಜೊತೆಗೆ ವಿವಿಧ ತರಬೇತಿಗಳ ಪರಿಣತಿ ಪಡೆದು ಮುಂದೆ ಬರಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು. ಪ್ರತಿಭೆ ಅನಾವರಣಗೊಳಿಸಲು ಸಾಂಸ್ಕೃತಿಕ ವೇದಿಕೆ ಸೂಕ್ತ ವೇದಿಕೆಯಾಗಿದೆ. ವಿದ್ಯಾರ್ಥಿಗಳು ದೇಶಕ್ಕೆ ಆಸ್ತಿಯಾಗಬೇಕು ಎಂದರು.

ಪ್ರೊ.ಮಂಜುಳಾ ಕಟಗೇರಿ ಪ್ರಾಸ್ತಾವಿಕವಾಗಿ ಮಾತನಾಡಿದರು, ಡಾ.ದಸ್ತಗೀರ ಹಾಲ್ಯಾಳ ಸ್ವಾಗತಿಸಿದರು. ಪ್ರೊ.ಶಿವಕುಮಾರ ಉಣ್ಣಿಬಾವಿ ವಂದಿಸಿದರು.ಪ್ರೊ.ಪೂಜಾ ಬಡಿಗೇರ ನಿರೂಪಿಸಿದರು. ವಿದ್ಯಾರ್ಥಿಗಳು ಪ್ರಾರ್ಥಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.

Share this article